ಎಸ್‌ಎಫ್‌ಐ ರಾಜ್ಯ ಸಮ್ಮೇಳನ | ಸಾರ್ವಜನಿಕ ಶಿಕ್ಷಣ ಬಲಪಡಿಸಲು, ಖಾಲಿ ಶಿಕ್ಷಕರ ಹುದ್ದೆ ಭರ್ತಿಗೆ ಆಗ್ರಹ

ಕಲಬುರಗಿ: ಸರ್ಕಾರಿ ಶಾಲೆ, ಕಾಲೇಜುಗಳಲ್ಲಿನ ಮೂಲಸೌಕರ್ಯ ಕೊರತೆ ನೀಗಿಸಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಬೇಕು. ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಬೇಕು. ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಬೇಕು ಹಾಗೂ ಕಲ್ಯಾಣ ಕರ್ನಾಟಕದಲ್ಲಿ ಸಂವಿಧಾನದ 371(ಜೆ) ಮೀಸಲಾತಿಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ. ಎಸ್‌ಎಫ್‌ಐ

ಎಸ್‌ಎಫ್‌ಐನ 17ನೇ ರಾಜ್ಯ ಸಮ್ಮೇಳನದ ಅಂಗವಾಗಿ ಅಕ್ಟೋಬರ್ 30ರಂದು ಕಲಬುರಗಿಯ ಜಗತ್ ವೃತ್ತದಲ್ಲಿ ಆಯೋಜಿಸಿದ್ದ ಬಹಿರಂಗ ಸಭೆಯಲ್ಲಿ ಸಂಘಟನೆಯ ಮುಖಂಡರು ಈ ಬೇಡಿಕೆಗಳನ್ನು ಮುಂದಿಟ್ಟರು. ಇದಕ್ಕೂ ಮೊದಲು ನಗರದ ತಿಮ್ಮಾಪುರಿ ವೃತ್ತದಿಂದ ಜಗತ್ ವೃತ್ತದವರೆಗೆ ವಿದ್ಯಾರ್ಥಿಗಳು ಮತ್ತು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ಜಗತ್ ವೃತ್ತದಲ್ಲಿ ನಡೆದ ಬಹಿರಂಗ ಸಭೆಯನ್ನು ಎಸ್‌ಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಆದರ್ಶ್ ಎಂ. ಸಾಜಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆ ದುರ್ಬಲಗೊಳ್ಳುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕಳೆದ ಹತ್ತು ವರ್ಷಗಳ ಆಡಳಿತದಲ್ಲಿ 1.20 ಲಕ್ಷ ಸರ್ಕಾರಿ ಶಾಲೆಗಳು ಮುಚ್ಚಲ್ಪಟ್ಟಿವೆ. ಅಷ್ಟೇ ಸಂಖ್ಯೆಯ ಶಾಲೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವ ಸ್ಥಿತಿಯಲ್ಲಿಲ್ಲ. ಸುಮಾರು ಎರಡು ಲಕ್ಷ ಸರ್ಕಾರಿ ಶಾಲೆಗಳಿಗೆ ವಿದ್ಯುತ್ ಸೌಲಭ್ಯವಿಲ್ಲದಿದ್ದರೆ, ಆರು ಲಕ್ಷ ಶಾಲೆಗಳಲ್ಲಿ ಅಂತರ್ಜಾಲ ಸಂಪರ್ಕವೇ ಇಲ್ಲ ಎಂದು ಅವರು ಆರೋಪಿಸಿದರು. ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತು ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ತನ್ನ ಒಟ್ಟು ಬಜೆಟ್‌ನ ಶೇ.10ರಷ್ಟು ಹಣವನ್ನು ಮೀಸಲಿಡಬೇಕು ಎಂದು ಒತ್ತಾಯಿಸಿದರು.

ದೇಶದ ಶಿಕ್ಷಣ ವ್ಯವಸ್ಥೆ ಕಳೆದ 12 ವರ್ಷಗಳಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದು ಟೀಕಿಸಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿ–2020 ಎಲ್ಲ ವರ್ಗದ ಮಕ್ಕಳಿಗೂ ಸಮಾನ ಅವಕಾಶ ಕಲ್ಪಿಸುವ ಬದಲು ಅನೇಕರನ್ನು ಶಿಕ್ಷಣದಿಂದ ಹೊರಗಿಡುವ ಅಪಾಯ ಹೊಂದಿದೆ ಎಂದು ಅಭಿಪ್ರಾಯಪಟ್ಟರು.

ಇದರೊಂದಿಗೆ ಶಿಕ್ಷಣದ ವೆಚ್ಚವೂ ಹೆಚ್ಚಾಗುತ್ತಿದ್ದು, ಬೋಧನಾ ಶುಲ್ಕದ ಏರಿಕೆ ಸಾಮಾನ್ಯ ಕುಟುಂಬಗಳಿಗೆ ಹೊರೆಯಾಗುತ್ತಿದೆ. ಮಕ್ಕಳ ಶಾಲಾ ಶುಲ್ಕ ಭರಿಸುವುದಕ್ಕಾಗಿ ಮಹಾರಾಷ್ಟ್ರದ 42 ವರ್ಷದ ಮಹಿಳೆಯೊಬ್ಬರು ಓಟದ ಸ್ಪರ್ಧೆಯಲ್ಲಿ ಭಾಗವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಉದಾಹರಿಸಿದ ಅವರು, ಶಿಕ್ಷಣದ ಹೆಚ್ಚುತ್ತಿರುವ ವಾಣಿಜ್ಯೀಕರಣದ ವಿರುದ್ಧ ಕಳವಳ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಶಿಕ್ಷಣವನ್ನು ಎಲ್ಲರಿಗೂ ಕೈಗೆಟುಕುವಂತೆ ಮಾಡುವ ಜವಾಬ್ದಾರಿ ನಿರ್ವಹಿಸಬೇಕು. ಸರ್ಕಾರಿ ಶಾಲೆಗಳನ್ನು ಮುಚ್ಚುವ ಬದಲು ಅವುಗಳಿಗೆ ಅಗತ್ಯ ಸೌಲಭ್ಯ ಕಲ್ಪಿಸಿ ಬಲಪಡಿಸಬೇಕು ಎಂದು ಆಗ್ರಹಿಸಿದರು. ಎಸ್‌ಎಫ್‌ಐ

ಇದನ್ನೂ ಓದಿ : ಹಣದುಬ್ಬರಕ್ಕೆ ಮೋದಿ ಹೊಣೆ, ಡಿ.ಕೆ. ಶಿವಕುಮಾರ್ ಅಲ್ಲ: ಪ್ರಿಯಾಂಕ್ ಖರ್ಗೆ

ಎಸ್‌ಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಆದರ್ಶ್‌ ಎಂ.ಸಾಜಿ ಮಾತನಾಡುತ್ತಿರುವುದು
ಎಸ್‌ಎಫ್‌ಐ ರಾಷ್ಟ್ರೀಯ ಅಧ್ಯಕ್ಷ ಆದರ್ಶ್‌ ಎಂ.ಸಾಜಿ ಮಾತನಾಡುತ್ತಿರುವುದು

ಸಭೆಯಲ್ಲಿ ಮಾತನಾಡಿದ ಪ್ರಗತಿಪರ ಚಿಂತಕಿ ಡಾ. ಮೀನಾಕ್ಷಿ ಬಾಳಿ, ಕಲ್ಯಾಣ ಕರ್ನಾಟಕದಲ್ಲಿ ಬಡತನ, ನಿರುದ್ಯೋಗ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆ ಮುಂದುವರಿದಿದೆ. ಈ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣ ಪಡೆಯಲು ಅಗತ್ಯ ಅವಕಾಶಗಳು ಸಿಗುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಸುಮಾರು 22 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್, ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ಬೋಧಿಸಲು ಶಿಕ್ಷಕರ ಕೊರತೆಯಿದೆ. ಹಲವು ಶಾಲೆಗಳು ಒಬ್ಬರೇ ಶಿಕ್ಷಕರನ್ನು ಅವಲಂಬಿಸಿ ನಡೆಯುತ್ತಿವೆ. ಇದರಿಂದ ಮಕ್ಕಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದೆ. ಸರ್ಕಾರ ಕೂಡಲೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.

ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ರಾಜ್ಯದ ಒಟ್ಟು ಜನಸಂಖ್ಯೆಯ ಸುಮಾರು ಶೇ.20ರಷ್ಟು ಜನರು ವಾಸಿಸುತ್ತಿದ್ದರೂ ಈ ಪ್ರದೇಶ ನಿರೀಕ್ಷಿತ ಅಭಿವೃದ್ಧಿ ಕಂಡಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಲ್ಲಿ ಸಾವಿರಾರು ಕೋಟಿ ರೂಪಾಯಿ ಅನುದಾನವಿದ್ದರೂ ವಿದ್ಯಾರ್ಥಿ ವಸತಿ ನಿಲಯಗಳ ಪರಿಸ್ಥಿತಿ ಸುಧಾರಿಸಿಲ್ಲ. ಹೀಗಾಗಿ ಹೊಸ ವಸತಿ ನಿಲಯಗಳ ನಿರ್ಮಾಣಕ್ಕೆ ಪ್ರತ್ಯೇಕ ಅನುದಾನ ಮೀಸಲಿಡಬೇಕು. ಈಗಿರುವ ವಸತಿ ನಿಲಯಗಳ ನಿರ್ವಹಣೆಗೆ ಮಾತ್ರ ಹಣ ವ್ಯಯಿಸದೆ, ಹೆಚ್ಚುತ್ತಿರುವ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೊಸ ವಸತಿ ನಿಲಯಗಳನ್ನು ಆರಂಭಿಸಬೇಕು ಎಂದು ಹೇಳಿದರು.

ಶಿಕ್ಷಣ ಸೌಲಭ್ಯಗಳು ಆರ್ಥಿಕವಾಗಿ ಅನುಕೂಲವಿರುವವರಿಗೆ ಮಾತ್ರ ಸೀಮಿತವಾಗಬಾರದು. ಜಿಲ್ಲಾಧಿಕಾರಿಗಳ ಮಕ್ಕಳಿಗೆ ದೊರೆಯುವ ಗುಣಮಟ್ಟದ ಶಿಕ್ಷಣವೇ ಕೂಲಿ ಕಾರ್ಮಿಕರ ಮಕ್ಕಳಿಗೂ ಸಿಗಬೇಕು. ಶಿಕ್ಷಣದಲ್ಲಿ ಆರ್ಥಿಕ ಅಸಮಾನತೆ ನಿವಾರಣೆಯಾದಾಗ ಮಾತ್ರ ಸಾಮಾಜಿಕ ಸಮಾನತೆ ಸಾಧ್ಯ. ಶಿಕ್ಷಣ ಮತ್ತು ಉದ್ಯೋಗದ ಹಕ್ಕುಗಳಿಗಾಗಿ ವಿದ್ಯಾರ್ಥಿಗಳು ಸಂಘಟಿತರಾಗಬೇಕು ಎಂದು ಕರೆ ನೀಡಿದರು.

ಕಲ್ಯಾಣ ಕರ್ನಾಟಕದ ಯುವಜನರು ಉನ್ನತ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಬೆಂಗಳೂರಿಗೆ ವಲಸೆ ಬಂದು ಓಲಾ, ಉಬರ್ ಚಾಲಕರು ಹಾಗೂ ಭದ್ರತಾ ಸಿಬ್ಬಂದಿಯಾಗಿ ದುಡಿಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳೀಯವಾಗಿಯೇ ಕೈಗಾರಿಕೆಗಳನ್ನು ಸ್ಥಾಪಿಸಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಶಾಲೆ ತೊರೆಯುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡಲು ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಸ್‌ಎಫ್‌ಐ ರಾಜ್ಯಾಧ್ಯಕ್ಷ ಶಿವಪ್ಪ ಎನ್. ಅಂಬ್ಲಿಕಲ್ ಮಾತನಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಕ್ಕುಗಳು ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ರಕ್ಷಣೆಗಾಗಿ ಸಂಘಟನೆ ನಿರಂತರವಾಗಿ ಹೋರಾಡುತ್ತಿದೆ ಎಂದರು.

ಕೆಪಿಎಸ್ ಶಾಲೆಗಳ ಹೆಸರಿನಲ್ಲಿ ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಮೂಲ ಆಶಯಕ್ಕೆ ಧಕ್ಕೆಯಾಗಬಾರದು. ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ನೀತಿಗಳು ಸಮರ್ಪಕವಾಗಿ ಅನುಷ್ಠಾನಗೊಳ್ಳಬೇಕು. ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಒದಗಿಸಿ ಸರ್ಕಾರಿ ಶಾಲೆ, ಕಾಲೇಜುಗಳು ಮತ್ತು ವಸತಿ ನಿಲಯಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದರು.

ದೇಶದಲ್ಲಿ ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ಹಾಗೂ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳು ಶಿಕ್ಷಣ ವ್ಯವಸ್ಥೆಯಲ್ಲಿರುವ ಗಂಭೀರ ಸಮಸ್ಯೆಗಳನ್ನು ಎತ್ತಿ ತೋರಿಸುತ್ತಿವೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಬದಲು ಅವರ ಧ್ವನಿಯನ್ನು ನಿರ್ಲಕ್ಷಿಸುವುದು ಸರಿಯಲ್ಲ ಎಂದು ಹೇಳಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಮತ್ತು ಧರ್ಮದ ಆಧಾರದಲ್ಲಿ ವಿದ್ಯಾರ್ಥಿಗಳನ್ನು ವಿಭಜಿಸುವ ಪ್ರಯತ್ನಗಳು ನಡೆಯುತ್ತಿವೆ. ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವ, ಸಮಾನತೆ ಮತ್ತು ಸಹಬಾಳ್ವೆಯ ಮೌಲ್ಯಗಳನ್ನು ಬೆಳೆಸುವ ಅಗತ್ಯವಿದೆ. ಭಗತ್ ಸಿಂಗ್ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಯಿಂದ ಪ್ರೇರಣೆ ಪಡೆದ ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಮೌಲ್ಯಗಳ ರಕ್ಷಣೆಗಾಗಿ ಹೋರಾಡಲಿದ್ದಾರೆ. ಪೊಲೀಸ್ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ತಿಳಿಸಿದರು.

ವಿದ್ಯಾರ್ಥಿ ಸಂಘಟನೆಗಳ ಚುನಾವಣೆಯೂ ಸಭೆಯಲ್ಲಿ ಪ್ರಮುಖವಾಗಿ ಪ್ರಸ್ತಾಪವಾಯಿತು. ವಿದ್ಯಾರ್ಥಿಗಳು ತಮ್ಮ ಪ್ರತಿನಿಧಿಗಳನ್ನು ಸ್ವತಂತ್ರವಾಗಿ ಆಯ್ಕೆ ಮಾಡಿಕೊಳ್ಳುವ ಅವಕಾಶ ಕಲ್ಪಿಸಬೇಕು. ಸಂಘಟನೆಗಳನ್ನು ಹೊರಗಿಟ್ಟು ವಿದ್ಯಾರ್ಥಿ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಕ್ರಮ ಪ್ರಜಾಸತ್ತಾತ್ಮಕ ಆಶಯಗಳಿಗೆ ವಿರುದ್ಧವಾಗಿದೆ. ಎಲ್ಲ ಕಾಲೇಜುಗಳಲ್ಲೂ ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಡೆಸಬೇಕು ಎಂಬುದು ಎಸ್‌ಎಫ್‌ಐನ ಆಗ್ರಹವಾಗಿದೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಸಂವಿಧಾನದ 371(ಜೆ) ಅಡಿಯಲ್ಲಿ ದೊರೆತಿರುವ ಅವಕಾಶಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳಬೇಕು. ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿನ ಮೀಸಲಾತಿ ಸಮರ್ಪಕವಾಗಿ ಜಾರಿಯಾಗಬೇಕು. ಪ್ರದೇಶದ ಹಿಂದುಳಿದಿರುವಿಕೆ ನಿವಾರಣೆಗೆ ವಿಶೇಷ ಯೋಜನೆಗಳನ್ನು ರೂಪಿಸಬೇಕು ಎಂದು ಸಂಘಟನೆ ಒತ್ತಾಯಿಸಿದೆ.

ಸಭೆಯಲ್ಲಿ ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಿಜಯಕುಮಾರ್ ಟಿ.ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರೀಯ ಉಪಾಧ್ಯಕ್ಷೆ ಶಿಲ್ಪಾ, ತಮಿಳುನಾಡು ರಾಜ್ಯಾಧ್ಯಕ್ಷ ತಮಿಳ್ ವಿರುದುಲ, ತೆಲಂಗಾಣ ರಾಜ್ಯ ಕಾರ್ಯದರ್ಶಿ ನಾಗರಾಜ್, ಸ್ವಾಗತ ಸಮಿತಿ ಅಧ್ಯಕ್ಷ ಆರ್.ಜಿ. ಶೆಟ್ಟಗಾರ್, ಎಸ್‌ಎಫ್‌ಐ ಉಪಾಧ್ಯಕ್ಷರಾದ ಡಾ. ದೊಡ್ಡ ಬಸವರಾಜ ಗುಳೇದಾಳ, ಬಸವರಾಜ್ ಎಸ್., ಗಣೇಶ ರಾಠೋಡ್, ಡಿವೈಎಫ್‌ಐ ಕೇಂದ್ರ ಸಮಿತಿ ಸದಸ್ಯ ಬಸವರಾಜ ಪೂಜಾರಿ, ರಾಜ್ಯಾಧ್ಯಕ್ಷೆ ಲವಿತ್ರ ವಸ್ತ್ರದ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಎಸ್‌ಎಫ್‌ಐ ಜಿಲ್ಲಾಧ್ಯಕ್ಷೆ ಸುಜಾತ ವೈ. ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಇಮಾಮ್ ಸಾಬ್ ನದಾಫ್ ನಿರೂಪಿಸಿದರು. ಗಣೇಶ ರಾಠೋಡ್ ವಂದಿಸಿದರು.

ಇದನ್ನೂ ನೋಡಿ : SIR ಕರ್ನಾಟಕ | ಬೆಂಗಳೂರಿನಲ್ಲಿ ಇಬ್ಬರು ಮತದಾರರಲ್ಲಿ ಒಬ್ಬರ ಹೆಸರು ಡಿಲೀಟ್‌! ಸಿಕ್ಕ ನುಸುಳುಕೋರರು ಎಷ್ಟು?

Donate Janashakthi Media

Leave a Reply

Your email address will not be published. Required fields are marked *