ಬೆಂಗಳೂರು : ರಾಜ್ಯದ ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಹಾಗೂ ಕೆಪಿಎಸ್ (ಕರ್ನಾಟಕ ಪಬ್ಲಿಕ್ ಶಾಲೆ) ಹೆಸರಿನಲ್ಲಿ ಗ್ರಾಮ ಪಂಚಾಯಿತಿಗೊಂದು ಸರ್ಕಾರಿ ಶಾಲೆಯಾಗಿ ವಿಲೀನಗೊಳಿಸುವ ಯೋಜನೆಯನ್ನು ತಕ್ಷಣ ಕೈಬಿಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್ಎಫ್ಐ) ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸಿದೆ.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮದಲ್ಲಿ ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಯೋಜನೆ ಪ್ರಕಟಿಸಿದ್ದಾರೆ. ರಾಜ್ಯದ ಆರು ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಮೂರು ವಿಭಾಗಗಳನ್ನು ಮಾಡಿದ್ದು, ಮೊದಲ ಹಂತದಲ್ಲಿ ಒಂದು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸಲು ಉದ್ದೇಶಿಸಲಾಗಿದೆ. ಖಾಸಗಿ ಶಾಲೆಗಳು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸಿದರೆ ಆ ಶಾಲೆಗಳ ಹೆಸರಿನೊಂದಿಗೆ ಖಾಸಗಿ ಶಾಲೆಗಳ ಹೆಸರನ್ನೂ ಸೇರಿಸಲು ಅವಕಾಶ ನೀಡಲಾಗುತ್ತದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಈ ಯೋಜನೆಯು ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ, ಶಿಕ್ಷಣ ಕ್ಷೇತ್ರವನ್ನು ಖಾಸಗಿಯವರ ಕೈಗೆ ಒಪ್ಪಿಸುವ ಪ್ರಯತ್ನವಾಗಿದೆ ಎಂದು ಎಸ್ಎಫ್ಐ ಟೀಕಿಸಿದೆ.
ರಾಜ್ಯದಲ್ಲಿ 47,493 ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳಿವೆ. ಇವುಗಳಲ್ಲಿ 19,603 ಪ್ರಾಥಮಿಕ ಶಾಲೆಗಳು, 21,676 ಹಿರಿಯ ಪ್ರಾಥಮಿಕ ಶಾಲೆಗಳು, 4,895 ಪ್ರೌಢಶಾಲೆಗಳು ಹಾಗೂ 1,319 ಪದವಿಪೂರ್ವ ಕಾಲೇಜುಗಳು ಸೇರಿವೆ. ಎಲ್ಕೆಜಿಯಿಂದ 12ನೇ ತರಗತಿವರೆಗೆ ಶಿಕ್ಷಣ ನೀಡುವ 309 ಕರ್ನಾಟಕ ಪಬ್ಲಿಕ್ ಶಾಲೆಗಳೂ ಇವೆ. 2015-16ರಲ್ಲಿ ಸರ್ಕಾರಿ ಶಾಲೆಗಳಲ್ಲಿದ್ದ 47.1 ಲಕ್ಷ ವಿದ್ಯಾರ್ಥಿಗಳ ದಾಖಲಾತಿ 2025-26ರಲ್ಲಿ 38.2 ಲಕ್ಷಕ್ಕೆ ಇಳಿದಿದೆ. ಅಂದರೆ ಶೇ 19ರಷ್ಟು ಕುಸಿತವಾಗಿದೆ. ಒಟ್ಟು ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಸರ್ಕಾರಿ ಶಾಲೆಗಳ ಪಾಲು ಶೇ 46ರಿಂದ ಶೇ 38ಕ್ಕೆ ಇಳಿದಿದ್ದರೆ, ಖಾಸಗಿ ಅನುದಾನರಹಿತ ಶಾಲೆಗಳಲ್ಲಿನ ದಾಖಲಾತಿ 36.3 ಲಕ್ಷದಿಂದ 47 ಲಕ್ಷಕ್ಕೆ ಏರಿಕೆಯಾಗಿದೆ. 2025-26ನೇ ಸಾಲಿನಲ್ಲಿ 50 ಅಥವಾ ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳ ಸಂಖ್ಯೆ 25,683ಕ್ಕೆ ತಲುಪಿದೆ ಎಂದು ಎಸ್ಎಫ್ಐ ತಿಳಿಸಿದೆ.
ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕಡಿಮೆಯಾಗಲು ಶಿಕ್ಷಣದ ಗುಣಮಟ್ಟವೇ ಕಾರಣ ಎಂದು ಕರ್ನಾಟಕ ಜ್ಞಾನ ಆಯೋಗದ ಶಿಫಾರಸಿನಲ್ಲಿ ಉಲ್ಲೇಖಿಸಲಾಗಿದೆ. ಆದರೆ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಕುಸಿಯಲು ಕಾರಣಗಳೇನು ಎಂಬ ಬಗ್ಗೆ ಸಮಗ್ರ ಅಧ್ಯಯನ ನಡೆಸುವ ಬದಲು, ಮೂಲಸೌಕರ್ಯ ಒದಗಿಸದೆ, ಖಾಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡದೆ, ಸಮಯಕ್ಕೆ ಸರಿಯಾಗಿ ಪಠ್ಯಪುಸ್ತಕಗಳನ್ನು ವಿತರಿಸದೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಸೈಕಲ್ ಯೋಜನೆಯನ್ನೂ ಸ್ಥಗಿತಗೊಳಿಸಲಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರಿ ಶಾಲೆಗಳ ದಾಖಲಾತಿ ಕುಸಿತಕ್ಕೆ ಸರ್ಕಾರವೇ ಹೊಣೆ ಎಂದು ಎಸ್ಎಫ್ಐ ಆರೋಪಿಸಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 79,694 ಹುದ್ದೆಗಳು ಖಾಲಿ ಇವೆ. 43,553 ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿರುವುದಾಗಿ ಶಿಕ್ಷಣ ಸಚಿವರು ತಿಳಿಸಿದ್ದಾರೆ. ಮುಂದಿನ ಶೈಕ್ಷಣಿಕ ವರ್ಷದೊಳಗೆ 18 ಸಾವಿರ ಶಿಕ್ಷಕರನ್ನು ನೇಮಕ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಭರವಸೆಗಳನ್ನು ನೀಡುತ್ತಿದೆಯೇ ಹೊರತು, ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತಿಲ್ಲ ಎಂದು ಸಂಘಟನೆ ಟೀಕಿಸಿದೆ. 2026-27ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಶೂಗಳನ್ನು ವಿತರಿಸಿರುವುದೂ ಸರ್ಕಾರದ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದೆ.
ಕರ್ನಾಟಕ ಪಬ್ಲಿಕ್ ಶಾಲೆಗಳ ಮೂಲಕ ಎಲ್ಕೆಜಿಯಿಂದ ಪದವಿಪೂರ್ವ ಶಿಕ್ಷಣದವರೆಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಇದಕ್ಕಾಗಿ ಏಷ್ಯನ್ ಅಭಿವೃದ್ಧಿ ಬ್ಯಾಂಕ್ನಿಂದ ₹2,500 ಕೋಟಿ ಸಾಲ ಪಡೆಯುವುದಾಗಿ ಹಾಗೂ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ನಿಧಿಯಡಿ 500 ಹೊಸ ಪಬ್ಲಿಕ್ ಶಾಲೆಗಳನ್ನು ಆರಂಭಿಸುವುದಾಗಿ ತಿಳಿಸಿತ್ತು. ಕಲ್ಯಾಣ ಕರ್ನಾಟಕದಲ್ಲಿ 200 ಶಾಲೆಗಳನ್ನು ಸ್ಥಾಪಿಸುವುದಾಗಿಯೂ ಘೋಷಿಸಿತ್ತು. ಆದರೆ ಹೊಸ ಶಾಲೆಗಳನ್ನು ಆರಂಭಿಸುವ ಬದಲು ಈಗಿರುವ ಶಾಲೆಗಳನ್ನೇ ಪಂಚಾಯಿತಿಗೊಂದು ಶಾಲೆಯಾಗಿ ಉನ್ನತೀಕರಿಸುವ ಯೋಜನೆ ರೂಪಿಸಲಾಗುತ್ತಿದೆ. ಇದು ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ಮುಚ್ಚುವ ಮತ್ತು ಶಿಕ್ಷಣ ಕ್ಷೇತ್ರವನ್ನು ಖಾಸಗೀಕರಣಗೊಳಿಸುವ ಹುನ್ನಾರವಾಗಿದೆ ಎಂದು ಎಸ್ಎಫ್ಐ ಆರೋಪಿಸಿದೆ.
ಸಂವಿಧಾನದ ಅನುಚ್ಛೇದ 21ಎ ಮತ್ತು ಶಿಕ್ಷಣ ಹಕ್ಕು ಕಾಯ್ದೆಯಡಿ 6ರಿಂದ 14 ವರ್ಷದ ಪ್ರತಿಯೊಂದು ಮಗುವಿಗೂ ನೆರೆಹೊರೆಯ ಶಾಲೆಯಲ್ಲಿ ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕಿದೆ. ಸರ್ಕಾರಿ ಶಾಲೆಗಳನ್ನು ಖಾಸಗಿಯವರೊಂದಿಗೆ ಜೋಡಿಸುವುದು ಹಾಗೂ ಕೆಪಿಎಸ್ ಹೆಸರಿನಲ್ಲಿ ಶಾಲೆಗಳನ್ನು ವಿಲೀನಗೊಳಿಸುವುದರಿಂದ ಗ್ರಾಮೀಣ ಮಕ್ಕಳ ಶಿಕ್ಷಣದ ಹಕ್ಕಿಗೆ ಧಕ್ಕೆಯಾಗಲಿದೆ. ಆದ್ದರಿಂದ ಎರಡು ಸಾವಿರ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳೊಂದಿಗೆ ಜೋಡಿಸುವ ಮತ್ತು ಕೆಪಿಎಸ್ ಹೆಸರಿನಲ್ಲಿ ಶಾಲೆಗಳನ್ನು ವಿಲೀನಗೊಳಿಸುವ ಎರಡೂ ಯೋಜನೆಗಳನ್ನು ಸರ್ಕಾರ ತಕ್ಷಣ ಹಿಂಪಡೆಯಬೇಕು ಎಂದು ಎಸ್ಎಫ್ಐ ರಾಜ್ಯ ಅಧ್ಯಕ್ಷ ಗಣೇಶ್ ರಾಠೋಡ್ ಮತ್ತು ರಾಜ್ಯ ಕಾರ್ಯದರ್ಶಿ ವಿಜಯ್ ಕುಮಾರ್ ಟಿ.ಎಸ್. ಜಂಟಿ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.
