ಮತಾಂತರ ನಿಷೇಧ ಕಾಯ್ದೆ ರದ್ದು, ಮುಸ್ಲಿಮರ 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ನಾಲ್ಕು ಪ್ರಮುಖ ಬೇಡಿಕೆಗಳ ಮುಂದಿಟ್ಟು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ
ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಜನತೆಗೆ ನೀಡಿದ್ದ ಪ್ರಮುಖ ಭರವಸೆಗಳನ್ನು ಈಡೇರಿಸಬೇಕು ಹಾಗೂ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ನವೆಂಬರ್ 12ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಸಾರ್ವಜನಿಕ ಸಮಾವೇಶ ಆಯೋಜಿಸಲಾಗಿದೆ. ಕಾಂಗ್ರೆಸ್
‘ಕರ್ನಾಟಕದ ಅಲ್ಪಸಂಖ್ಯಾತರು ಹಾಗೂ ಶೋಷಿತರ ಧ್ವನಿ’ ಹೆಸರಿನಲ್ಲಿ ನಡೆಯಲಿರುವ ಈ ಸಮಾವೇಶ ಬೆಳಿಗ್ಗೆ 10.30ಕ್ಕೆ ಆರಂಭವಾಗಲಿದೆ. ಬೆಂಗಳೂರಿನ ಆರ್ಚ್ ಬಿಷಪ್, ಮುಸ್ಲಿಂ ಧರ್ಮಗುರುಗಳು, ಕ್ರೈಸ್ತ ಸಮುದಾಯದ ವಿವಿಧ ಸಂಘಟನೆಗಳು, ಮುಸ್ಲಿಂ ಸಂಘಟನೆಗಳು, ಮಸೀದಿ ಜಮಾಅತ್ಗಳು, ರೈತ ಸಂಘಟನೆಗಳು, ದಲಿತ ಸಂಘಟನೆಗಳು, ಮಾನವ ಹಕ್ಕು ಸಂಘಟನೆಗಳು ಹಾಗೂ ಇತರ ಜನಪರ ಸಂಘಟನೆಗಳ ಸಹಕಾರದೊಂದಿಗೆ ಸಮಾವೇಶ ಆಯೋಜಿಸಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
2023ರ ವಿಧಾನಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ಹಲವು ಪ್ರಮುಖ ಭರವಸೆಗಳನ್ನು ನೀಡಿತ್ತು. ಚುನಾವಣಾ ಪ್ರಚಾರದ ಸಂದರ್ಭದಲ್ಲಿಯೂ ಪಕ್ಷದ ಪ್ರಮುಖ ನಾಯಕರು ಈ ಭರವಸೆಗಳನ್ನು ಈಡೇರಿಸುವುದಾಗಿ ಘೋಷಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಜನವಿರೋಧಿ ಕಾಯ್ದೆಗಳನ್ನು ಹಿಂಪಡೆಯುವುದೂ ಈ ಭರವಸೆಗಳಲ್ಲಿ ಪ್ರಮುಖವಾಗಿತ್ತು. ಆದರೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಕ್ಕೂ ಹೆಚ್ಚು ಸಮಯ ಕಳೆದಿದ್ದರೂ ಈ ಪ್ರಮುಖ ಭರವಸೆಗಳು ಇನ್ನೂ ಈಡೇರಿಲ್ಲ ಎಂದು ಸಂಘಟಕರು ಆಕ್ಷೇಪಿಸಿದ್ದಾರೆ.
ಮತಾಂತರ ನಿಷೇಧ ಕಾಯ್ದೆ ರದ್ದುಪಡಿಸುವುದು, ಮುಸ್ಲಿಮರಿಗೆ ಈ ಹಿಂದೆ ಇದ್ದ 2ಬಿ ಮೀಸಲಾತಿಯನ್ನು ಮರುಸ್ಥಾಪಿಸುವುದು, ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದು ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಹಿಂಪಡೆಯುವುದು ಸಂಘಟಕರ ಪ್ರಮುಖ ನಾಲ್ಕು ಬೇಡಿಕೆಗಳಾಗಿವೆ. ಕಾಂಗ್ರೆಸ್
ಇದನ್ನೂ ಓದಿ : ‘ನಿನ್ನನ್ನೂ ಕೊಂದುಬಿಡುತ್ತಾರೆ’ ಎಂದಿದ್ದ ಸೋನಿಯಾ ಗಾಂಧಿ: ರಾಜೀವ್ ಹತ್ಯೆಯ ರೋಚಕ ಕಥೆ!
ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸುವ ನಿರ್ಧಾರವನ್ನು ರಾಜ್ಯ ಸಚಿವ ಸಂಪುಟ ಕೈಗೊಂಡು ಮೂರು ವರ್ಷಗಳೇ ಕಳೆದಿದ್ದರೂ, ಈವರೆಗೆ ಅದನ್ನು ವಿಧಾನಮಂಡಲದಲ್ಲಿ ಮಂಡಿಸಿ ಕಾನೂನುಬದ್ಧವಾಗಿ ರದ್ದುಪಡಿಸಿಲ್ಲ ಎಂದು ಸಂಘಟಕರು ಹೇಳಿದ್ದಾರೆ. ಉಳಿದ ಬೇಡಿಕೆಗಳನ್ನೂ ಸರ್ಕಾರ ಈಡೇರಿಸದೆ ವಿಳಂಬ ಮಾಡುತ್ತಿರುವುದು ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಅವಧಿ ನಿರ್ಣಾಯಕ ಹಂತ ತಲುಪುತ್ತಿದೆ. ಮುಂದಿನ ದಿನಗಳಲ್ಲಿ ಸರ್ಕಾರ ಚುನಾವಣಾ ಸಿದ್ಧತೆಯಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಇರುವುದರಿಂದ, ಮತ್ತಷ್ಟು ವಿಳಂಬ ಮಾಡದೆ ಕಾಂಗ್ರೆಸ್ ಪಕ್ಷ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಗಲೇ ಈಡೇರಿಸಬೇಕು ಎಂಬುದು ಸಮಾವೇಶದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ಮೇಲೆ ಒತ್ತಡ ಹೇರುವ ಸಲುವಾಗಿ ಸಮಾವೇಶ ಆಯೋಜಿಸಲಾಗಿದೆ. ಈಗಾಗಲೇ ವಿವಿಧ ಜನಪರ ಸಂಘಟನೆಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಅವುಗಳು ಸಮಾವೇಶಕ್ಕೆ ಬೆಂಬಲ ಸೂಚಿಸಿವೆ ಎಂದು ಸಂಘಟಕರು ತಿಳಿಸಿದ್ದಾರೆ.
ಸಂಘಟಕರ ಪರವಾಗಿ ಕರ್ನಾಟಕ ಕ್ರೈಸ್ತರ ಒಕ್ಕೂಟದ ಕಾರ್ಯದರ್ಶಿ ಫಾದರ್ ವಿನಯ್ ಕುಮಾರ್ ಹಾಗೂ ಕರ್ನಾಟಕ ರಾಜ್ಯ ಮುಸ್ಲಿಂ ಒಕ್ಕೂಟದ ರಾಜ್ಯ ಸಂಚಾಲಕ ಸುಹೈಲ್ ಅಹ್ಮದ್ ಮರೂರ್ ಪ್ರಕಟಣೆ ನೀಡಿದ್ದಾರೆ.
ಇದನ್ನೂ ನೋಡಿ : ಎಸ್ಐಆರ್ | ಮತದಾರರ ಪಟ್ಟಿ ಅಂತಿಮ: 99.32 ಲಕ್ಷ ಹೆಸರು ಡಿಲೀಟ್! ಗುರುರಾಜ ದೇಸಾಯಿ
