ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಆಗ್ರಹ – ಎಕರೆಗೆ ₹25 ಸಾವಿರ ಬೆಳೆ ನಷ್ಟ ಪರಿಹಾರ ನೀಡುವಂತೆ ಕೊಡಿಹಳ್ಳಿ ಚಂದ್ರಶೇಖರ್ ಒತ್ತಾಯ
ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರ ಪರವಾಗಿ ನಡೆದುಕೊಳ್ಳುತ್ತಿದೆ ಎಂದು ಆರೋಪಿಸಿರುವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಕೊಡಿಹಳ್ಳಿ ಚಂದ್ರಶೇಖರ್, ಡಿಸೆಂಬರ್ 2ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಬೃಹತ್ ರೈತ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಶುಕ್ರವಾರ ಬೆಳಗಾವಿಯಲ್ಲಿ ಮಾತನಾಡಿದ ಅವರು, ರೈತರ ಬೇಡಿಕೆಗಳನ್ನು ಯಾವುದೇ ತಾರತಮ್ಯವಿಲ್ಲದೆ ನ್ಯಾಯಯುತವಾಗಿ ಮತ್ತು ಪಾರದರ್ಶಕವಾಗಿ ಪರಿಹರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು. ರೈತರ ಹಿತಾಸಕ್ತಿಗಳನ್ನು ರಕ್ಷಿಸಬೇಕಾದ ಸರ್ಕಾರವೇ ಸಕ್ಕರೆ ಕಾರ್ಖಾನೆಗಳ ಮಾಲೀಕರ ಬೇಡಿಕೆಗಳಿಗೆ ಮನ್ನಣೆ ನೀಡುತ್ತಿದೆ ಎಂದು ಅವರು ಟೀಕಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ರೈತ ಪ್ರತಿನಿಧಿಗಳು ಹಾಗೂ ಸಕ್ಕರೆ ಕಾರ್ಖಾನೆಗಳ ಮಾಲೀಕರ ನಡುವೆ ಹಲವು ಸುತ್ತಿನ ಮಾತುಕತೆ ನಡೆದ ಬಳಿಕ ಕಬ್ಬಿಗೆ ಪ್ರತಿ ಟನ್ಗೆ ಮೊದಲ ಕಂತಾಗಿ 3,600 ರೂ. ಪಾವತಿಸುವ ಒಪ್ಪಂದಕ್ಕೆ ಬರಲಾಗಿತ್ತು. ಆದರೆ, ಕೆಲವು ಕಾರ್ಖಾನೆಗಳು ಆರಂಭದಲ್ಲಿ 3,500 ರೂ. ಪಾವತಿಸಿ, ಉಳಿದ 100 ರೂ.ಗಳನ್ನು ಕಬ್ಬು ನುರಿಸುವ ಹಂಗಾಮು ಮುಗಿದ ಬಳಿಕ ನೀಡುವುದಾಗಿ ತಿಳಿಸಿರುವುದು ಗೊಂದಲಕ್ಕೆ ಕಾರಣವಾಗಿದೆ. ಒಪ್ಪಂದದ ಅನುಷ್ಠಾನ ಮತ್ತು ರೈತರಿಗೆ ಸಿಗಬೇಕಾದ ಹೆಚ್ಚುವರಿ ಆದಾಯದ ಪಾಲಿನ ಬಗ್ಗೆಯೂ ಸ್ಪಷ್ಟತೆ ಇಲ್ಲ ಎಂದು ರೈತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಮುಂಬೈನಲ್ಲಿ ಸಾಧಾರಣ ವಾಯು ಗುಣಮಟ್ಟ, ನಾಗಪುರದಲ್ಲಿ ವಾಯುಮಾಲಿನ್ಯ ಹೆಚ್ಚಳ
ಬರಗಾಲದ ಪರಿಣಾಮವಾಗಿ ರಾಜ್ಯದಲ್ಲಿ ಸುಮಾರು 62 ಸಾವಿರ ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಹೇಳಿದ ಕೊಡಿಹಳ್ಳಿ ಚಂದ್ರಶೇಖರ್, ರೈತರಿಗೆ ನೀಡಿರುವ ಪರಿಹಾರ ಅತ್ಯಲ್ಪವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಬೆಳೆ ನಷ್ಟ ಅನುಭವಿಸಿದ ರೈತರಿಗೆ ಕೇವಲ 2,500 ರೂ. ಪರಿಹಾರ ನೀಡಿರುವುದು ಅನ್ಯಾಯ. ಹೀಗಾಗಿ ಪ್ರತಿ ಎಕರೆಗೆ 25 ಸಾವಿರ ರೂ. ಬೆಳೆ ನಷ್ಟ ಪರಿಹಾರವನ್ನು ತಕ್ಷಣ ಒದಗಿಸಬೇಕು ಎಂದು ಅವರು ಆಗ್ರಹಿಸಿದರು.
ರೈತರ ಬೇಡಿಕೆಗಳನ್ನು ಸರ್ಕಾರ ತಕ್ಷಣ ಈಡೇರಿಸದಿದ್ದರೆ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ರೈತರು ದೊಡ್ಡ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ ಎಂದು ಎಚ್ಚರಿಸಿದರು. ಕಬ್ಬು ಬೆಳೆಗಾರರ ಸಮಸ್ಯೆ ಮಾತ್ರವಲ್ಲದೆ ಬರಗಾಲದಿಂದ ನಷ್ಟ ಅನುಭವಿಸಿರುವ ರೈತರ ಪರಿಹಾರದ ಪ್ರಶ್ನೆಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂಬುದು ರೈತ ಸಂಘದ ಒತ್ತಾಯವಾಗಿದೆ.
ಇದನ್ನೂ ನೋಡಿ : ಸಾರ್ವಜನಿಕರ ಬ್ಯಾಂಕ್ ಖಾಸಗಿಯವರ ಪಾಲಿಗೆ: IDBI ಮಾರಾಟದ ಹಿಂದಿನ ಲೆಕ್ಕವೇನು? Janashakthi Media
