ಅರ್ಹ ರೈತರಿಗೆ ಬರ ಪರಿಹಾರ ತಕ್ಷಣ ತಲುಪಿಸಲು ಅಧಿಕಾರಿಗಳಿಗೆ ಪರಮೇಶ್ವರ್ ಸೂಚನೆ

Please follow and like us:
ಕೆಲವು ಜಿಲ್ಲೆಗಳಲ್ಲಿ ₹5 ಸಾವಿರ ಪರಿಹಾರ ವಿತರಣೆ ಬಾಕಿ – ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಪೂರೈಕೆಗೆ ಆದ್ಯತೆ ನೀಡುವಂತೆ ಸೂಚನೆ
ಬೆಂಗಳೂರು :  ಬರದಿಂದ ಸಂಕಷ್ಟಕ್ಕೀಡಾಗಿರುವ ಅರ್ಹ ರೈತರಿಗೆ ₹5 ಸಾವಿರ ಪರಿಹಾರ ಹಣವನ್ನು ಯಾವುದೇ ವಿಳಂಬವಿಲ್ಲದೆ ತಲುಪಿಸುವಂತೆ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಸರ್ಕಾರ ಪರಿಹಾರ ಘೋಷಿಸಿ ಸುಮಾರು ಎರಡು ತಿಂಗಳು ಕಳೆದಿದ್ದರೂ ಕೆಲವು ಜಿಲ್ಲೆಗಳಲ್ಲಿ ಹಣ ವಿತರಣೆ ಪೂರ್ಣಗೊಂಡಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಶುಕ್ರವಾರ ಜಿಲ್ಲಾಧಿಕಾರಿಗಳು ಹಾಗೂ ಉಪವಿಭಾಗಾಧಿಕಾರಿಗಳೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಪರಮೇಶ್ವರ್, ಬರದಿಂದ ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಉಂಟಾಗಿರುವ ಪರಿಣಾಮವನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ಪರಿಹಾರ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

ರಾಜ್ಯದಲ್ಲಿ ಸೂಪರ್ ಎಲ್‌ನಿನೋ ಪರಿಣಾಮದಿಂದ ನಿರೀಕ್ಷೆಗೂ ಮೀರಿದ ಬರ ಪರಿಸ್ಥಿತಿ ಎದುರಾಗಿದೆ. ಯಾವುದೇ ಜಿಲ್ಲೆಯಲ್ಲಿ ಉತ್ತಮ ಬೆಳೆ ಬಂದಿರುವ ಬಗ್ಗೆ ಮಾಹಿತಿ ಇಲ್ಲ. ಈಶಾನ್ಯ ಮುಂಗಾರು ಕೂಡ ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ ಎಂದು ಅವರು ಹೇಳಿದರು.

ಅರ್ಹ ರೈತರಿಗೆ ತಲಾ ₹5 ಸಾವಿರ ಬರ ಪರಿಹಾರ ನೀಡಲು ಸರ್ಕಾರ ನಿರ್ಧರಿಸಿದ್ದರೂ, ಕೆಲವು ಜಿಲ್ಲೆಗಳಲ್ಲಿ ವಿತರಣಾ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಸರ್ಕಾರದ ಘೋಷಣೆಗಳು ಕೇವಲ ಕಾಗದದಲ್ಲಿ ಉಳಿಯಬಾರದು, ಅವು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಪರಿಹಾರಕ್ಕಾಗಿ ಕಾಯುತ್ತಿರುವ ರೈತರಿಗೆ ಅಧಿಕಾರಿಗಳು ಯಾವ ಉತ್ತರ ನೀಡುತ್ತಾರೆ ಎಂದು ಪ್ರಶ್ನಿಸಿದ ಅವರು, ಜಿಲ್ಲಾಧಿಕಾರಿಗಳು ಮತ್ತು ಉಪವಿಭಾಗಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಅರ್ಹ ರೈತರಿಗೆ ಪರಿಹಾರ ತಲುಪಿಸಬೇಕು ಎಂದು ನಿರ್ದೇಶನ ನೀಡಿದರು.

ಕುಡಿಯುವ ನೀರು, ಮೇವು ಪೂರೈಕೆಗೆ ಕ್ರಮ

ಬರ ಪರಿಸ್ಥಿತಿಯಲ್ಲಿ ಜನರಿಗೆ ಕುಡಿಯುವ ನೀರು ಮತ್ತು ಜಾನುವಾರುಗಳಿಗೆ ಅಗತ್ಯ ಮೇವು ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಪರಮೇಶ್ವರ್ ಸೂಚಿಸಿದರು. ರೈತರಿಗೆ ಮೇವು ಬೀಜದ ಕಿಟ್‌ಗಳನ್ನು ವಿತರಿಸಲು ಈಗಾಗಲೇ ನಿರ್ದೇಶನ ನೀಡಲಾಗಿದ್ದರೂ, ಕೆಲವು ಜಿಲ್ಲೆಗಳಲ್ಲಿ ಯೋಜನೆಯ ಅನುಷ್ಠಾನ ಸಮರ್ಪಕವಾಗಿಲ್ಲ ಎಂದು ಹೇಳಿದರು.

ಮೇವು ಬೀಜದ ಕಿಟ್ ವಿತರಣೆಗಾಗಿ ಹೆಚ್ಚುವರಿಯಾಗಿ ₹30 ಕೋಟಿ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅದನ್ನು ಪರಿಶೀಲಿಸಲಾಗುವುದು. ಮೇವು ಕೊರತೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದನ್ನೂ ಓದಿ : ಕರ್ನಾಟಕದ ಎಸ್‌ಐಆರ್ ಅಂತಿಮ ಪಟ್ಟಿ ತರ್ಕಹೀನ: ನವೆಂಬರ್ 26ರಿಂದ ರಾಜ್ಯಾದ್ಯಂತ ಹೋರಾಟಕ್ಕೆ ಸಿದ್ಧತೆ

15 ಲಕ್ಷ ನಿವೇಶನ ವಿತರಣೆಗೆ ಆದ್ಯತೆ

ಸಭೆಯಲ್ಲಿ ಕಂದಾಯ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವಿವಿಧ ಯೋಜನೆಗಳ ಅನುಷ್ಠಾನವನ್ನೂ ಪರಿಶೀಲಿಸಿದ ಪರಮೇಶ್ವರ್, ಬಡ ಕುಟುಂಬಗಳಿಗೆ 15 ಲಕ್ಷ ನಿವೇಶನಗಳನ್ನು ವಿತರಿಸುವ ಯೋಜನೆಗೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಉದ್ದೇಶಕ್ಕಾಗಿ ಸುಮಾರು 24 ಸಾವಿರ ಎಕರೆ ಭೂಮಿ ಗುರುತಿಸಲಾಗಿದ್ದು, ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ ಭೂಮಿಗೆ ಸಂಬಂಧಿಸಿದ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ನಿವೇಶನ ವಿತರಣೆಯನ್ನು ತ್ವರಿತಗೊಳಿಸಬೇಕು ಎಂದು ಹೇಳಿದರು.

ರಾಜ್ಯದಲ್ಲಿ ಸುಮಾರು 23 ಲಕ್ಷ ಮಂದಿ ಪಿಂಚಣಿ ಪಡೆಯಲು ಅರ್ಹರಲ್ಲದವರು ಎಂದು ಗುರುತಿಸಲಾಗಿದ್ದು, ಪಿಂಚಣಿ ಫಲಾನುಭವಿಗಳ ಸಮಗ್ರ ಪರಿಶೀಲನೆ ನಡೆಸುವಂತೆ ಸೂಚಿಸಿದರು. ಅರ್ಹರಿಗೆ ಪಿಂಚಣಿ ಸಿಗುವುದನ್ನು ಖಚಿತಪಡಿಸಿಕೊಳ್ಳುವುದರ ಜೊತೆಗೆ ಅನರ್ಹರು ಯೋಜನೆಯ ಲಾಭ ಪಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದರು.

ಸರ್ಕಾರಿ ಯೋಜನೆಗಳ ಅನುಷ್ಠಾನದಲ್ಲಿ ಪಾರದರ್ಶಕತೆ, ವೇಗ ಮತ್ತು ಹೊಣೆಗಾರಿಕೆಗೆ ಒತ್ತು ನೀಡಿದ ಅವರು, ಅಧಿಕಾರಿಗಳು ಪ್ರಗತಿ ವರದಿಗಳಿಗೆ ಮಾತ್ರ ಸೀಮಿತವಾಗದೆ ಯೋಜನೆಗಳ ನೈಜ ಪ್ರಯೋಜನ ಜನರಿಗೆ ತಲುಪಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.

ಇದನ್ನೂ ನೋಡಿ : ಎಸ್‌ಐಆರ್‌ ಅಕ್ರಮಗಳ ವಿರುದ್ಧ ಜನಾಂದೋಲನ: ನವೆಂಬರ್ 26ರಿಂದ ಬೃಹತ್ ಹೋರಾಟJanashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *