ಬಿಜೆಪಿಯ ಈಡೇರದ ಭರವಸೆಗಳೇ 2029ರಲ್ಲಿ ಎನ್‌ಡಿಎಗೆ ಮುಳುವಾಗಲಿವೆ: ಅಶೋಕ್ ಗೆಹ್ಲೋಟ್

Please follow and like us:
ಕಪ್ಪುಹಣ ವಾಪಸ್, ವರ್ಷಕ್ಕೆ 2 ಕೋಟಿ ಉದ್ಯೋಗ, ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಹಾಗೂ ರೈತರ ಆದಾಯ ದ್ವಿಗುಣಗೊಳಿಸುವ ಭರವಸೆಗಳನ್ನು ಜನರು ಇನ್ನೂ ಮರೆತಿಲ್ಲ ಎಂದ ಕಾಂಗ್ರೆಸ್ ನಾಯಕ
ಜೈಪೂರ :  ಬಿಜೆಪಿ ಚುನಾವಣೆ ಸಂದರ್ಭದಲ್ಲಿ ನೀಡಿದ್ದ ಭರವಸೆಗಳನ್ನು ಈಡೇರಿಸದಿರುವುದು 2029ರ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎಗೆ ದೊಡ್ಡ ಹಿನ್ನಡೆಯಾಗಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಲಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸೋಲನುಭವಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿಯ

ಐಎಎನ್‌ಎಸ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಗೆಹ್ಲೋಟ್, ಕಪ್ಪುಹಣವನ್ನು ದೇಶಕ್ಕೆ ವಾಪಸ್ ತರುವುದಾಗಿ, ಪ್ರತಿವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದಾಗಿ, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಜಮೆ ಮಾಡುವುದಾಗಿ ಹಾಗೂ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ಬಿಜೆಪಿ ನೀಡಿದ್ದ ಭರವಸೆಗಳನ್ನು ನೆನಪಿಸಿದ್ದಾರೆ. ಈ ಭರವಸೆಗಳನ್ನು ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ. ಇದೀಗ ಈ ವಿಚಾರಗಳ ಬಗ್ಗೆ ಮಾತನಾಡುವುದನ್ನೇ ಬಿಜೆಪಿ ನಿಲ್ಲಿಸಿದೆ. ಆದರೆ, ಮತದಾರರು ಈ ಭರವಸೆಗಳನ್ನು ಮರೆತಿಲ್ಲ. ಚುನಾವಣೆಯ ಸಂದರ್ಭದಲ್ಲಿ ಜನರು ಬಿಜೆಪಿಯನ್ನು ಈ ಪ್ರಶ್ನೆಗಳಿಗೆ ಉತ್ತರಿಸುವಂತೆ ಮಾಡಲಿದ್ದಾರೆ ಎಂದು ಗೆಹ್ಲೋಟ್ ಹೇಳಿದ್ದಾರೆ.

2028ರ ಡಿಸೆಂಬರ್‌ನಲ್ಲಿ ರಾಜಸ್ಥಾನ ವಿಧಾನಸಭಾ ಚುನಾವಣೆ ನಡೆಯಲಿದ್ದು, 2029ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯುವ ನಿರೀಕ್ಷೆಯಿದೆ. ರಾಜಸ್ಥಾನದ ಪಂಚಾಯಿತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಸಾಧಿಸಿರುವ ಯಶಸ್ಸು ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಜನರಲ್ಲಿ ಹೆಚ್ಚುತ್ತಿರುವ ಅಸಮಾಧಾನದ ಸಂಕೇತವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಬಿಜೆಪಿಯ

ಇದನ್ನೂ ಓದಿ : ಸಂಸತ್ ಚಳಿಗಾಲದ ಅಧಿವೇಶನ ಯಾವಾಗ? ಮೋದಿ ವಿರುದ್ಧ ಜೈರಾಮ್ ರಮೇಶ್ ಕಿಡಿ!

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ, ನಿರುದ್ಯೋಗ ಹಾಗೂ ಮತಗಳ್ಳಿಕೆಯ ಆರೋಪಗಳ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಧ್ವನಿ ಎತ್ತುತ್ತಿದ್ದಾರೆ. ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಪ್ರತಿಭಟನೆ ಹಾಗೂ ಸಂಸತ್ ಸದಸ್ಯರ ಮೆರವಣಿಗೆ ಪ್ರಜಾಪ್ರಭುತ್ವದ ರಕ್ಷಣೆಗೆ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟದ ಭಾಗವಾಗಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ.

ರಾಜಸ್ಥಾನದಲ್ಲಿ ಕಾಂಗ್ರೆಸ್ ನಾಯಕರ ಒಗ್ಗಟ್ಟು ಹಾಗೂ ತಮ್ಮ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಜನಪರ ಕಲ್ಯಾಣ ಯೋಜನೆಗಳಿಗೆ ಜನರಿಂದ ದೊರೆತ ಬೆಂಬಲ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಸಾಧನೆಗೆ ನೆರವಾಗಿದೆ ಎಂದು ಅವರು ಹೇಳಿದ್ದಾರೆ. ಆದರೆ, ಈಗಿನ ಬಿಜೆಪಿ ಸರ್ಕಾರ ಕೆಲವು ಕಲ್ಯಾಣ ಯೋಜನೆಗಳನ್ನು ಸ್ಥಗಿತಗೊಳಿಸಿದೆ ಅಥವಾ ದುರ್ಬಲಗೊಳಿಸಿದೆ ಎಂದು ಗೆಹ್ಲೋಟ್ ಆರೋಪಿಸಿದ್ದಾರೆ.

ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ನಾಯಕರು ವೈಯಕ್ತಿಕ ಹಿತಾಸಕ್ತಿ ಮತ್ತು ಆಕಾಂಕ್ಷೆಗಳನ್ನು ಬದಿಗಿಟ್ಟು ಪಕ್ಷದ ಸಂಘಟನೆ ಬಲಪಡಿಸಲು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಕರೆ ನೀಡಿದ್ದಾರೆ.

ಇದನ್ನೂ ನೋಡಿ : ನವೆಂಬರ್ ಕನ್ನಡ ಬೇಡ… ಅನುದಿನವೂ ಕನ್ನಡ ಕನ್ನಡ ಎಂದು ಉಸಿರಾಡಬೇಕು – ಶ್ರೀನಾಥ್ ವಸಿಷ್ಠ Janashakthi Media

Please follow and like us:
Donate Janashakthi Media

Leave a Reply

Your email address will not be published. Required fields are marked *