ಬೆಂಗಳೂರು: ಜಿಬಿಎ ಚುನಾವಣೆಗೆ 2025ರ ಮತದಾರರ ಪಟ್ಟಿಯನ್ನೇ ಬಳಸಲು ರಾಜ್ಯ ಚುನಾವಣಾ ಆಯೋಗ ಸಿದ್ಧವಿದೆ. ಈ ಸಂಬಂಧ ಸುಪ್ರೀಂಕೋರ್ಟ್ನಿಂದ ನಿರ್ದೇಶನ ಬಂದ ಕೂಡಲೇ ರಾಜ್ಯದ ಮತದಾರರ ಪಟ್ಟಿಯ ಆಧಾರದ ಮೇಲೆ ಚುನಾವಣೆ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್. ಸಂಗ್ರೇಶಿ ತಿಳಿಸಿದ್ದಾರೆ. ಜಿಬಿಎ ಚುನಾವಣೆ
ಮಂಗಳವಾರ ಎಸ್ಐಆರ್ ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟದ ನಿಯೋಗವು ರಾಜ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಮೂಲಕ ಸಿದ್ಧಪಡಿಸಿರುವ ಅಂತಿಮ ಮತದಾರರ ಪಟ್ಟಿಯನ್ನು ಬಳಸಬಾರದು. ಅದರ ಬದಲಿಗೆ 2025ರ ಮತದಾರರ ಪಟ್ಟಿಯನ್ನೇ ಬಳಸಬೇಕು ಎಂದು ಒತ್ತಾಯಿಸಿತು.
ನಿಯೋಗದ ಮನವಿ ಸ್ವೀಕರಿಸಿ ಮಾತನಾಡಿದ ಸಂಗ್ರೇಶಿ, 2025ರ ಮತದಾರರ ಪಟ್ಟಿಯನ್ನೇ ಆಧರಿಸಿ ಜಿಬಿಎ ಚುನಾವಣೆ ನಡೆಸಲು ನಿರ್ದೇಶನ ನೀಡುವಂತೆ ಸುಪ್ರೀಂಕೋರ್ಟ್ಗೆ ಮನವಿ ಸಲ್ಲಿಸಲಾಗಿದೆ. ನ್ಯಾಯಾಲಯದ ನಿರ್ದೇಶನ ಬಂದ ತಕ್ಷಣ ರಾಜ್ಯ ಚುನಾವಣಾ ಆಯೋಗದ ಮತದಾರರ ಪಟ್ಟಿಯನ್ನು ಬಳಸಿಕೊಂಡು ಚುನಾವಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಜಿಬಿಎ ವ್ಯಾಪ್ತಿಯಲ್ಲಿ 89 ಲಕ್ಷ ಮತದಾರರು
ಜಿಬಿಎ ವ್ಯಾಪ್ತಿಯ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಸಂಗ್ರೇಶಿ, ರಾಜ್ಯ ಚುನಾವಣಾ ಆಯೋಗವು ಈಗಾಗಲೇ ಏಪ್ರಿಲ್ ವೇಳೆಗೆ ಸುಮಾರು 89 ಲಕ್ಷ ಮತದಾರರನ್ನು ಒಳಗೊಂಡ ಪಟ್ಟಿಯನ್ನು ಅಂತಿಮಗೊಳಿಸಿದೆ ಎಂದು ತಿಳಿಸಿದರು.
ಹೊಸ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಿಕೊಳ್ಳಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಸಿದ್ಧಪಡಿಸಿರುವ ಮತದಾರರ ಪಟ್ಟಿಯನ್ನು ಜಿಬಿಎ ಅಧಿಕಾರಿಗಳಿಗೂ ನೀಡಲಾಗಿದೆ ಎಂದು ಹೇಳಿದರು.
ಗ್ರಾಮಸಭೆ, ವಾರ್ಡ್ ಸಭೆಗಳಿಗೂ ಮತದಾರರ ಪಟ್ಟಿ ಸಿದ್ಧಪಡಿಸಲು ಸಿದ್ಧ
ಗ್ರಾಮಸಭೆ ಮತ್ತು ವಾರ್ಡ್ ಸಭೆಗಳಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಿದರೆ ಮತದಾರರ ಪಟ್ಟಿ ಸಿದ್ಧಪಡಿಸಲು ಆಯೋಗ ಸಿದ್ಧವಿದೆ ಎಂದು ಸಂಗ್ರೇಶಿ ತಿಳಿಸಿದರು.
ಇದಕ್ಕಾಗಿ ಅಗತ್ಯವಾದ ಡೇಟಾ ಸೆಂಟರ್ ಸೇರಿದಂತೆ ಮೂಲಸೌಕರ್ಯಗಳನ್ನು ಸರ್ಕಾರ ಒದಗಿಸಬೇಕು. ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಈಗಾಗಲೇ ಒಪ್ಪಿಗೆ ನೀಡಿದೆ. ಮುಂಬರುವ ಅಧಿವೇಶನದಲ್ಲಿ ತಿದ್ದುಪಡಿ ಕಾಯ್ದೆ ಅಂಗೀಕಾರಗೊಂಡರೆ ಮತದಾರರ ಪಟ್ಟಿ ಸಿದ್ಧಪಡಿಸಲು ಸಾಧ್ಯವಾಗಲಿದೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎಸ್ಐಆರ್ ವಿರೋಧಿ ಒಕ್ಕೂಟದ ಜೆ.ಎಂ. ವೀರಸಂಗಯ್ಯ, ತಾರಾರಾವ್, ಸುನೀಲ್ ಸಿರಸಂಗಿ, ಅಮ್ಜದ್ ಪಾಷಾ, ಡಾ. ರಮೇಶ್ ಬೆಲ್ಲಮಕೊಂಡ, ನಾಗೇಶ್ ಅರಳಕುಪ್ಪೆ, ನೈನಾ, ಹೈದರ್ ಬೇಗ್, ರವಿ ಮೋಹನ್, ಪವನ್, ಬಸವರಾಜ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಇದನ್ನೂ ನೋಡಿ: ಕ್ಲಸ್ಟರ್ ಕಿಚನ್ ವಿರುದ್ಧ ಬಿಸಿಯೂಟ ನೌಕರರ ಪ್ರತಿಭಟನೆ | ನಮ್ಮ ಕೆಲಸ ಕಿತ್ತುಕೊಳ್ಳಬೇಡಿ
