- ದೆಹಲಿ ಸಮೀಪದ ರೈತರ ಪ್ರತಿಭಟನೆಗೆ ಉತ್ತರಪ್ರದೇಶದ ರೈತರ ಸಾಥ್
ನೋಯ್ಡಾ: ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಭಾಗಗಳಲ್ಲಿ ರೈತರ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದ್ದು, ಪ್ರತಿಭನಾಕಾರರು ಬುಧವಾರ ದೆಹಲಿ ಮತ್ತು ಉತ್ತರ ಪ್ರದೇಶ ಸಂಪರ್ಕಿಸುವ ಪ್ರಮುಖ ದಾರಿಗಳನ್ನು ಬಂದ್ ಮಾಡಿದ್ದಾರೆ.
ಪಶ್ಚಿಮ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳ ರೈತರು ದೆಹಲಿ – ನೋಯ್ಡಾ ಗಡಿ ಭಾಗದಲ್ಲಿ ಜಮಾಯಿಸಿದ್ದು, ದೆಹಲಿಯಲ್ಲಿ ಹರಿಯಾಣ– ಪಂಜಾಬ್ ರೈತರು ಆರಂಭಿಸಲಿರುವ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ರಾಜಧಾನಿಯತ್ತ ಹೊರಟಿದ್ದಾರೆ.
ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುವ ಪ್ರಯಾಣಿಕರು ಚಿಲ್ಲಾ ಮಾರ್ಗದ ಬದಲಿಗೆ ಕಾಲಿಂದ್ ಕುಂಜ್ ಅಥವಾ ಡಿಎನ್‌ಡಿ ಮಾರ್ಗದ ಮೂಲಕ ಪ್ರಯಾಣಿಸುವಂತೆ ಸಲಹೆ ನೀಡುತ್ತಿದ್ದಾರೆ.
ಇದನ್ನೂ ಓದಿ: ಯಾವುದೇ ತೀರ್ಮಾನಗಳಿಲ್ಲದೇ ಅಂತ್ಯಗೊಂಡ ರೈತ ಸಭೆ: ಡಿ.3ಕ್ಕೆ ಮತ್ತೆ ಚರ್ಚೆ!
ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ ಮಾತುಕತೆ ವಿಫಲವಾಗಿದ್ದು, ರೈತರು ತಮ್ಮ ಪ್ರತಿಭಟನೆಯನ್ನು ಮುಂದುವರೆಸಲು ನಿರ್ಧರಿಸಿದ್ದಾರೆ. ಇದರಿಂದ ದೆಹಲಿ ಗಡಿಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ 7ನೇ ದಿನಕ್ಕೆ ಕಾಲಿಟ್ಟಿದೆ. ಕೇಂದ್ರ ಕೃಷಿ ಸಚಿವ ನರೇಂದ್ರ ತೋಮರ್, ಪಿಯೂಷ್ ಗೋಯಲ್, ಕಿರಿಯ ಕೈಗಾರಿಕಾ ಸಚಿವ ಸೋಮ್ ಪ್ರಕಾಶ್ ಹಾಗೂ ರೈತ ಸಂಘಟನೆಗಳ 30ಕ್ಕೂ ಹೆಚ್ಚು ಪ್ರತಿನಿಧಿಗಳ ನಡುವೆ ನಿನ್ನೆ ಸಭೆ ನಡೆದಿತ್ತು. ಆ ಸಭೆ ವಿಫಲವಾಗಿದ್ದು ರೈತರು ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.ಸಭೆಯಲ್ಲಿ ಕೇಂದ್ರ ಸಚಿವರುಗಳು ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟರು. ಈ ಪ್ರಸ್ತಾಪಕ್ಕೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ವಿವಾದಾತ್ಮಕ ಮಸೂದೆಗಳನ್ನು ಹಿಂಪಡೆಯಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು. ಪರಸ್ಪರ ಸಹಕಾರ ಮೂಡದೆ ಸಭೆಯನ್ನು ವಿಸರ್ಜಿಸಬೇಕಾಯಿತು.