ಬೆಂಗಳೂರು ಜ 13 : ರಾಜ್ಯ ಸಚಿವ ಸಂಪುಟದ ನೂತನ ಸಚಿವರುಗಳಾಗಿ ಏಳು ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮ ರಾಷ್ಟ್ರಗೀತೆಯೊಂದಿಗೆ ಆರಂಭವಾಯಿತು. ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಅವರು ಮೊದಲನೆಯವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ಮೂರನೇ ಬಾರಿಗೆ ಮಂತ್ರಿ ಪದವಿಗೇರಿದ ಖುಷಿಯಲ್ಲಿ ಜನರತ್ತ ಕೈ ಬೀಸಿದರು.
ಮಹದೇವಪುರ ಶಾಸಕ ಅರವಿಂದ ಅವರು ಎರಡನೆಯವರಾಗಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅರವಿಂದ ಲಿಂಬಾವಳಿ ಅವರು ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಯಡಿಯೂರಪ್ಪ ಆಪ್ತ ವಲಯದಲ್ಲಿ ಲಿಂಬಾವಳಿ ಗುರಿತಿಸಿಕೊಂಡಿದ್ದರು. ಕಾಲಿಗೆ ನಮಸ್ಕರಿಸುವ ಮೂಲಕ ಮಂತ್ರಿ ಮಾಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ಎರಡನೆ ಬಾರಿಗೆ ಮಂತ್ರಿಯಾದ ಸಂಭ್ರಮದಲ್ಲಿದ್ದರು.
ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಅವರು ಮೂರನೆಯವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೂ ದೇವರ ಹೆಸರಿನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆಪರೇಷನ್ ಕಮಲಕ್ಕೋಳಗಾಗಿ ಹೋಸಕೋಟೆ ಚುನಾವಣೆಯಲ್ಲಿ ಸೋತಿದ್ದರು. ಕೊನಗೆ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಲಾಗಿತ್ತು. ಕೊಟ್ಟ ಮಾತಿನಂತೆ ಅವರನ್ನು ಸಚಿವರನ್ನಾಗಿ ಮಾಡಲಾಗಿದೆ. ಬಿಜೆಪಿ ಸರಕಾರದಲ್ಲಿ ಮೊದಲ ಬಾರಿಗೆ ಸಚಿವರಾದ ಖುಷಿ ಇತ್ತು.
ಬಾಗಲಕೋಟೆ ಜಿಲ್ಲೆಯ ಬೀಳಗಿ ಕ್ಷೇತ್ರದ ಶಾಸಕ ಮುರುಗೇಶ್ ನಿರಾಣಿ ಅವರಿಗೆ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದರು. ದೇವರು, ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅವರು ನಂತರ ರಾಜ್ಯಪಾಲರು ಮತ್ತು ಸಿಎಂ ಯಡಿಯೂರಪ್ಪ ಕಾಲು ಮುಟ್ಟಿ ನಮಸ್ಕರಿಸಿದರು. ಇವರು ಎರಡನೆ ಬಾರಿ ಸಚಿವರಾಗಿ ಆಯ್ಕೆಯಾಗಿದ್ದಾರೆ.
ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ ಅವರು ಬಿಎಸ್ ವೈ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಆರ್.ಶಂಕರ್ ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನಂತರ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳ ಕಾಲು ಮುಟ್ಟಿ ನಮಸ್ಕರಿಸಿದರು. ಇವರು ಆಪರೇಷನ್ ಕಮಲಕ್ಕೆ ಒಳಗಾಗಿ, ಶಾಸಕ ಸ್ಥಾನವನ್ನು ಬೇರೊಬ್ಬರಿಗೆ ಬಿಟ್ಟುಕೊಟ್ಟಿದ್ದರು. ಇವರಿಗೆ ಕೊಟ್ಟ ಮಾತಿನಂತೆ ಸಚಿವರನ್ನಾಗಿ ಮಾಡಲಾಗಿದೆ.
ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಅವರು ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಐದು ಬಾರಿ ಶಾಸಕರಾಗಿ ಅನುಭವ ಇರುವ ಯೋಗೇಶ್ವರ್ 2008 ರಲ್ಲಿ ಆಪರೇಷನ್ ಕಮಲಕ್ಕೆ ಒಳಗಾದವರು. ಕಳೆದ ಬಾರಿಯ ಚುನಾವಣೆಯಲ್ಲಿ ಕುಮಾರಸ್ವಾಮಿ ಕೈಯಲ್ಲಿ ಸೋಲುಂಡಿದ್ದರು. ಅಚ್ಚರಿ ಬೆಳವಣಿಗೆ ಮಧ್ಯೆ ಇವರು ಸಚಿವರಾಗಿದ್ದಾರೆ. ರಾಮನಗರ ಭಾಗದಲ್ಲಿ ಜೆಡಿಎಸ್ ನ್ನು ಕ್ಷೀಣ ಮಾಡಿ ಬಿಜೆಪಿ ಬಲಪಡಿಸುವ ತಂತ್ರವೂ ಸಚಿವಸ್ಥಾನದ ಹಿಂದೆ ಇದೆ.
ಸುಳ್ಯ ಶಾಸಕ ಎಸ್.ಅಂಗಾರ ಅವರು ಮೊದಲ ಬಾರಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಎಸ್.ಅಂಗಾರ ಅವರು ವೇದಿಕೆ ಹತ್ತುತ್ತಿದ್ದಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಚಪ್ಪಾಳೆ ತಟ್ಟಿ ಸಂತಸ ವ್ಯಕ್ತಪಡಿಸಿದರು.