ಬೆಂಗಳೂರು: ಶತಾಯುಷಿ, ಅವಿರತ ಹೋರಾಟಗಾರ, ಗಾಂಧಿವಾದಿ, ಸ್ವಾತಂತ್ರ್ಯ ಯೋಧ ಹೆಚ್ ಎಸ್ ದೊರೆಸ್ವಾಮಿ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 104 ವರ್ಷ ವಯಸ್ಸಾಗಿತ್ತು.
ದಶಕಗಳಿಗೂ ಹೆಚ್ಚಿನ ಕಾಲ ವಿವಿಧ ಸಾಮಾಜಿಕ ಹೋರಾಟಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಎಚ್.ಎಸ್.ದೊರೆಸ್ವಾಮಿ ಅವರು ಕಳೆದ ತಿಂಗಳಷ್ಟೇ ಅವರು 104ನೇ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದರು. ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದರು. ನಂತರ ಆರೋಗ್ಯದಲ್ಲಿ ಸುಧಾರಣೆ ಕಂಡಿತು. ಮತ್ತೆ ಅಸ್ವಸ್ಥರಾದ ಕಾರಣ ಕೆಲ ದಿನಗಳ ಹಿಂದೆ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಮಧ್ಯಾಹ್ನ 1.30 ಗಂಟೆಯ ಹೊತ್ತಿಗೆ ನಿಧನರಾಗಿದ್ದಾರೆ.
ಕರ್ನಾಟಕ ರಾಷ್ಟ್ರ ಸಮಿತಿ ಅಧ್ಯಕ್ಷ ರವಿಕೃಷ್ಣ ರೆಡ್ಡಿ ದೊರೆಸ್ವಾಮಿ ಅವರ ನಿಧನದ ಬಗ್ಗೆ ಸ್ಪಷ್ಟಪಡಿಸಿದ್ದು, ‘ಕಳೆದ 12 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾತ್ರಿಯಿಂದ ಆರೋಗ್ಯ ಸ್ವಲ್ಪ ಹದಗೆಟ್ಟು ಇಂದು ಬೆಳಿಗ್ಗೆ ಉಸಿರಾಟಕ್ಕೆ ತೊಂದರೆ ಆಗಿತ್ತು. ತೀವ್ರ ನಿಗಾ ಘಟಕಕ್ಕೆ ಕರೆದುಕೊಂಡು ಬಂದ ಸ್ವಲ್ಪ ಹೊತ್ತಿಗೆ ಹೃದಯಾಘಾತ ಆಯಿತು’ ಎಂದು ತಿಳಿಸಿದ್ದಾರೆ.
ಎಚ್.ಎಸ್.ದೊರೆಸ್ವಾಮಿ ಅವರ ಪೂರ್ಣ ಹೆಸರು ಹಾರೊಹಳ್ಳಿ ಶ್ರೀನಿವಾಸಯ್ಯ ದೊರೆಸ್ವಾಮಿ. ಏಪ್ರಿಲ್ 10, 1918ರಲ್ಲಿ ಜನಿಸಿದ್ದ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದರು. ಬ್ರಿಟಿಷರ ಕಾಲದಲ್ಲಿ ಕನ್ನಡದದ ಜನಪ್ರಿಯ ಪತ್ರಿಕೆ ಎನಿಸಿದ್ದ ‘ಪೌರವಾಣಿ’ ವರದಿಗಾರರಾಗಿ ಜನಪ್ರಿಯರಾಗಿದ್ದರು. ಸಾಹಿತ್ಯ ಮಂದಿರದ ಮೂಲಕ ಹಲವು ಪುಸ್ತಕಗಳನ್ನು ಪ್ರಕಟಿಸಿದ್ದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದು, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ ಸೇವಕರು, ನಾಡುನುಡಿ ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಶತಾಯುಷಿ ಹೆಚ್.ಎಸ್.ದೊರೆಸ್ವಾಮಿ ನಿಧನರಾದ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ಕುಟುಂಬದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಕೋರುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಹೆಚ್ಚಿನ ಜನಸಂದಣಿ ಸೇರಲು ಸಾಧ್ಯವಾಗದೆ ಇರುವ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನವನ್ನು ಆನ್ಲೈನ್ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತಿದೆ. ಅಂತಿಮ ಸಂಸ್ಕಾರವು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲೂ ಸಿದ್ದತೆ ನಡೆಯುತ್ತಿದೆ.