ಬೆಂಗಳೂರು: ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಪಕ್ಷದ ಬೆಳಗವಣಿಗೆಗಳ ನಡುವೆ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ಮಧ್ಯಾಹ್ನ 12 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಡಳಿತದೊಂದಿಗೆ ವಿಡಿಯೋ ಸಂವಾದ ನಡೆಸಲಿದ್ದಾರೆ.
ಸಭೆಯಲ್ಲಿ ಬಳ್ಳಾರಿ, ವಿಜಯನಗರ,ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡ ಜಿಲ್ಲೆಗಳಿಗೆ ಸಂಬಂಧಪಟ್ಟ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನು ಓದಿ: ಸೋಮುವಾರದಿಂದ ಬಿಎಂಟಿಸಿ ಬಸ್ ಸಂಚಾರಕ್ಕೆ ಬಿಬಿಎಂಪಿ ಒಪ್ಪಿಗೆ
ಈಗಾಗಲೇ ಸಭೆಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ತಾವಿರುವ ಸ್ಥಳದಿಂದಲೇ ವೀಡಿಯೋ ಸಂವಾದದಲ್ಲಿ ಭಾಗವಹಿಸುವಂತೆ ಸೂಚನೆ ನೀಡಲಾಗಿದೆ.
ಮುಂಗಾರು ಆರಂಭವಾಗಿದ್ದು ಉತ್ತರ ಒಳನಾಡು, ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ.
ಮಹಾರಾಷ್ಟ್ರದ ನೀರಾವರಿ ಸಚಿವರು ನಾಳೆ(ಶನಿವಾರ) ರಾಜ್ಯಕ್ಕೆ ಆಗಮಿಸಲಿದ್ದಾರೆ. ಅವರೊಂದಿಗೆ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸುವ ಬಗ್ಗೆ ಚರ್ಚೆ ನಡೆಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ಲಾಕ್ಡೌನ್ ನಿಯಮಾವಳಿ ಬಗ್ಗೆಯೂ ನಾಳೆ ತೀರ್ಮಾನ
ಈಗಾಗಲೇ ರಾಜ್ಯದಲ್ಲಿ ಜಾರಿಯಲ್ಲಿ ಲಾಕ್ಡೌನ್ 11 ಜಿಲ್ಲೆಗಳಲ್ಲಿ ಮುಂದುವರೆದಿದೆ. ಇನ್ನುಳಿದಂತೆ ವಿವಿಧ ಜಿಲ್ಲೆಗಳಲ್ಲಿ ಸಡಿಲಿಕೆಗೊಳಿಸಿದ 2ನೇ ಹಂತದ ಲಾಕ್ಡೌನ್ ವಿಚಾರದ ಕ್ರಮಗಳ ಬಗ್ಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ನಾಳೆ ಮಹತ್ವದ ತೀರ್ಮಾನವನ್ನು ಕೈಗೊಳ್ಳಲಿದ್ದಾರೆ.
ಇದನ್ನು ಓದಿ: ಯಡಿಯೂರಪ್ಪ ಮತ್ತೆ ಜೈಲಿಗೆ ಹೋಗಬಹುದೆಂದು ವರಿಷ್ಠರ ಗಮನಕ್ಕೆ ತಂದಿರುವೆ: ಹೆಚ್ ವಿಶ್ವನಾಥ್
ಜೂನ್ 21ರ ಬಳಿಕ ಕೋವಿಡ್ ಲಾಕ್ಡೌನ್ ನಿಯಮಾವಳಿಗಳನ್ನು ಇನ್ನಷ್ಟು ಸಡಲಿಸಬೇಕೆ ಎಂಬ ಬಗ್ಗೆ ನಾಳೆ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಕೋವಿಡ್ ಪ್ರಕರಣಗಳ ವಿಚಾರದಲ್ಲಿ ಈಗ ಪರಿಸ್ಥಿತಿ ಸುಧಾರಣೆ ಕಂಡಿದೆ. ಕೋವಿಡ್ 3ನೇ ಅಲೆಯ ಮುನ್ಸೂಚನೆಗಳು ಇರುವುದರಿಂದ ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿದು ಬಂದಿದೆ.
ಸರಕಾರವು ಜಾರಿಗೊಳಿಸಿರುವ ಲಾಕ್ಡೌನ್ ನಿಯಮಾವಳಿಗಳು ಜೂನ್ 21ರ ಬೆಳಿಗ್ಗೆ 5 ಗಂಟೆಗೆ ಮುಗಿಯಲಿದೆ.