ಪ್ರತಿಭಟನಾ ನಿರತ ರೈತರ ಮೇಲಿನ ಕೇಸು ವಾಪಸ್ಸು ಪಡೆಯಲು ಪಂಜಾಂಬ್‌ ಸಿಎಂ ಪತ್ರ

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರದ ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸಬೇಕೆಂದು ರೈಲ್ವೇ ಹಳಿಗಳ ಮೇಲೆ ಧರಣಿ ಕುಳಿತ ಹೋರಾಟನಿರತ ರೈತ ಸಂಘಟನೆಗಳ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯುವಂತೆ ಆದೇಶಿಸಿ ರೈಲ್ವೆ ಭದ್ರತಾ ಪಡೆಗೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಪತ್ರ ಬರೆದಿದ್ದಾರೆ.

ರೈಲ್ವೆ ಭದ್ರತಾ ಪಡೆಯ ಅಧ್ಯಕ್ಷರಿಗೆ ಪತ್ರವನ್ನು ಬರೆದಿರುವ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ತಕ್ಷಣ ಆದೇಶವನ್ನು ಪಾಲಿಸಬೇಕು. ಪ್ರತಿಭಟನಾ ನಿರತ ರೈತರ ಮೇಲಿನ ಪೊಲೀಸ್ ಪ್ರಕರಣಗಳನ್ನು ಹಿಂಪಡೆಯುವಂತೆ ನಿರ್ದೇಶನ ನೀಡಿದ್ದಾರೆ.

ನೆನ್ನೆ ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದ ಚರಣ್‌ಜಿತ್ ಸಿಂಗ್ ಚನ್ನಿ ಇಂದು ರೈಲ್ವೆ ಭದ್ರತಾ ಪಡೆಯ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ಪ್ರಧಾನಿ ಮೋದಿ ಅವರ ಭೇಟಿಯ ಸಂದರ್ಭದಲ್ಲಿ ವಿವಾದಿತ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಮನವಿ ಸಲ್ಲಿಸಿರುವ ಬಗ್ಗೆ ಚರ್ಚಿಸಿದ್ದಾರೆ.

ಪ್ರಧಾನಿ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಚರಣಜಿತ್​ ಸಿಂಗ್​ ಛನ್ನಿ,  ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಆಂದೋಲನವನ್ನು ಕೊನೆಗೊಳ್ಳಿಸಲು ನಾನು ಪ್ರಧಾನಿಯವರಿಗೆ ಒತ್ತಾಯಿಸಿದ್ದೇನೆ. ಅಷ್ಟೇ ಅಲ್ಲ, ರೈತರೊಂದಿಗೆ ಮಾತುಕತೆ ಪ್ರಕ್ರಿಯೆ ಮುಂದುವರಿಸಿ ಎಂದೂ ನಾನು ಕೇಳಿಕೊಂಡಿದ್ದೇನೆ. ನನ್ನ ಮನವಿಯನ್ನು ಪುರಸ್ಕರಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ಚನ್ನಿ ತಿಳಿಸಿದ್ದರು.

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾಯ್ದೆಗಳ ರದ್ದತಿಗಾಗಿ ಪ್ರತಿಭಟನೆಯಲ್ಲಿ ತೊಡಗಿಕೊಂಡಿರುವ ರೈತರಲ್ಲಿ ಕೆಲವರು ರೈಲ್ವೆ ಹಳಿಗಳ ಮೇಲೆ ಕುಳಿತು ಧರಣಿ ನಡೆಸಿದ್ದರು. ಅವರ ವಿರುದ್ಧ ರೈಲ್ವೆ ಸಂರಕ್ಷಣಾ ಪಡೆ  ಪ್ರಕರಣ ದಾಖಲಿಸಿತ್ತು.

ಕೃಷಿ ಕಾಯ್ದೆ ರದ್ದತಿಗಾಗಿ ನಿರಂತರ ಪ್ರತಿಭಟನೆ

ಕಳೆದ 2020ರ ನವೆಂಬರ್ 26ರಿಂದ ನವದೆಹಲಿಯ ಸಿಂಘು ಗಡಿ, ಟಿಕ್ರಿ ಗಡಿ ಮತ್ತು ಘಾಜಿಪುರ್ ಗಡಿ ಪ್ರದೇಶಗಳಲ್ಲಿ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪಂಜಾಬ್, ಹರಿಯಾಣ, ಮತ್ತು ಉತ್ತರ ಪ್ರದೇಶದ ಸಾವಿರಾರು ರೈತರು ಕೃಷಿ ಕಾಯ್ದೆಗಳ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಿವಾದಿತ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಕಾಯ್ದೆ, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದ ಹಾಗೂ ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಆಗ್ರಹಿಸುತ್ತಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *