ಲಕ್ನೋ: ಉತ್ತರ ಪ್ರದೇಶ ರಾಜ್ಯದ ಲಖಿಂಪುರ ಜಿಲ್ಲೆಯ ಖೇರಿ ಗ್ರಾಮದಲ್ಲಿ ನಡೆದಿರುವ ಹಿಂಸಾಚಾರ ಪ್ರಕರಣದ ಸಾಕ್ಷಿದಾರರಿಗೆ ರಕ್ಷಣೆ ನೀಡುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠದಿಂದ ಅರ್ಜಿಯ ವಿಚಾರಣೆ ನಡೆದಿದ್ದು, ಸಿಆರ್ಪಿಸಿಯ ಸೆಕ್ಷನ್ 164ರ ಅಡಿಯಲ್ಲಿ ಮ್ಯಾಜಿಸ್ಟ್ರೇಟ್ಗಳ ಎದುರು ಇತರೆ ಸಂಬಂಧಿತ ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸುವಂತೆ ಉತ್ತರ ಪ್ರದೇಶ ಸರ್ಕಾರದ ಪರ ವಕೀಲ ಹರೀಶ್ ಸಾಳ್ವೆ ಮತ್ತು ಗರಿಮಾ ಪ್ರಸಾದ್ ಅವರಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
“ಸಿಆರ್ಪಿಸಿಯ ಸೆಕ್ಷನ್ 164ರಡಿ ಸಾಕ್ಷ್ಯಗಳ ಹೇಳಿಕೆಗಳನ್ನು ದಾಖಲಿಸುವ ಕಾರ್ಯವನ್ನು ಲಭ್ಯವಿರುವ ಹತ್ತಿರದ ಮ್ಯಾಜಿಸ್ಟ್ರೇಟ್ಗಳಿಗೆ ವಹಿಸಲು ಸಂಬಂಧಪಟ್ಟ ಜಿಲ್ಲಾ ನ್ಯಾಯಾಧೀಶರಿಗೆ ನಿರ್ದೇಶಿಸುತ್ತೇವೆ” ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ಪೀಠ ಹೇಳಿದೆ.
ವರದಿ ಸಲ್ಲಿಕೆಗೆ ಸೂಚನೆ
ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿ ವಿಜ್ಞಾನ ಪ್ರಯೋಗಾಲಯ ಮತ್ತು ತಜ್ಞರ ಸಮಿತಿ ಸಿದ್ಧಪಡಿಸಿದ ವರದಿಯ ವಿದ್ಯುನ್ಮಾನ ಪುರಾವೆಗಳನ್ನು ಸಿದ್ಧಪಡಿಸುವಂತೆ ಸರ್ಕಾರಿ ಪರ ವಕೀಲ ಹರೀಶ್ ಸಾಳ್ವೆ ಅವರಿಗೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಎರಡು ದೂರುಗಳಿಗೆ ಸಂಬಂಧಿಸಿದಂತೆ ವರದಿ
ಹಿಂಸಾಚಾರ ಪ್ರಕರಣದಲ್ಲಿ ಪತ್ರಕರ್ತನ ಹತ್ಯೆಗೆ ಸಂಬಂಧಿಸಿದ ದೂರಿನ ಜೊತೆಗೆ ಎರಡು ದೂರುಗಳ ಬಗ್ಗೆ ತನ್ನ ವರದಿಯನ್ನು ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಕೇಳಿರುವ ನ್ಯಾಯಾಲಯವು “ಪ್ರಕರಣಗಳಲ್ಲಿ ಪ್ರತ್ಯೇಕ ಉತ್ತರಗಳನ್ನು ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಲಾಗಿದೆ” ಎಂದು ನ್ಯಾಯಪೀಠ ತಿಳಿಸಿದೆ.
ನವೆಂಬರ್ 8ರಂದು ಮುಂದಿನ ವಿಚಾರಣೆ ನಡೆಸಲಾಗುವುದು ಎಂದು ಕೋರ್ಟ್ ಹೇಳಿದೆ.
ಅಕ್ಟೋಬರ್ 03ರಂದು ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಹಾಗೂ ಒಬ್ಬ ಪತ್ರಕರ್ತ ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದರು. ಈ ಸಂಬಂಧ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾ ವಿರುದ್ಧ ರೈತರ ಮೇಲೆ ಕಾರು ಹರಿಸಿದ ಆರೋಪ ಮಾಡಲಾಗಿದ್ದು, ಅಕ್ಟೋಬರ್ 9ರಂದು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.