ಗೂಢಚಾರಿಕೆ: ಕೇಂದ್ರ ಗೃಹ ಇಲಾಖೆಗೆ ಸಿದ್ದರಾಮಯ್ಯ ಬರೆದ ಪತ್ರದ ಬಗ್ಗೆ ಶೀಘ್ರ ಕ್ರಮಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಸೂಚನೆ

ಬೆಂಗಳೂರು: ತಮ್ಮ ವಿರುದ್ಧ ಗೂಢಚಾರಿಕೆ ನಡೆಯುತ್ತಿದೆ ಎಂದು ಆರೋಪಿಸಿ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೇಂದ್ರ ಗೃಹ ಇಲಾಖೆ ಬರೆದಿದ್ದ ಪತ್ರವನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.

ಪೆಗಾಸಸ್ ತಂತ್ರಾಂಶ ಬಳಸಿ ಗೂಢಚರ್ಯೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಕೇಂದ್ರ ಗೃಹ ಇಲಾಖೆಗೆ ಪತ್ರವನ್ನ ಬರೆದಿದ್ದರು. ಪತ್ರಕ್ಕೆ ಸಂಬಂಧಿಸಿ ಉತ್ತರ ನೀಡುವಂತೆ ರಾಜ್ಯ ಸರ್ಕಾರಕ್ಕೆ ತಿಳಿಸಿರುವ ಕೇಂದ್ರ ಗೃಹ ಇಲಾಖೆಯು ಕಾನೂನು ಸುವ್ಯವಸ್ಥೆಯು ರಾಜ್ಯ ಸರ್ಕಾರದ ಅಧೀನಕ್ಕೆ ಬರುವ ವಿಷಯವಾಗಿರುವ ಹಿನ್ನೆಲೆಯಲ್ಲಿ ಪತ್ರವನ್ನು ಪರಿಶೀಲಿಸಿ, ಪತ್ರ ಬರೆದಿರುವವರಿಗೇ ನೇರವಾಗಿ ಲಿಖಿತ ಉತ್ತರ ನೀಡಬೇಕು ಎಂದು ಸೂಚಿಸಿದೆ.

ಇದನ್ನು ಓದಿ: ಪೆಗಾಸಸ್‌ ಬಗೆಗಿನ ಆರೋಪ ಆಧಾರರಹಿತ-ತನಿಖೆಗೆ ತಜ್ಞರ ಸಮಿತಿ ರಚನೆ: ಸುಪ್ರೀಂಗೆ ಕೇಂದ್ರದ ಮಾಹಿತಿ

ಉತ್ತರವನ್ನು ನೇರವಾಗಿ ಅರ್ಜಿದಾರ ಅಥವಾ ಪತ್ರ ಬರೆದಿರುವ ಸಿದ್ದರಾಮಯ್ಯ ಅವರಿಗೆ ನೀಡಿ ಎಂದು ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಕೇಂದ್ರ ಗೃಹ ಇಲಾಖೆ ಆದಷ್ಟು ತ್ವರಿತವಾಗಿ ವಿಚಾರಣೆ ನಡೆಸುವಂತೆಯೂ ತಿಳಿಸಿದೆ.

ಪೆಗಾಸಸ್ ತಂತ್ರಾಂಶ ಬಳಸಿ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚಿಸಿ ಸುಪ್ರೀಂಕೋರ್ಟ್ ತಜ್ಞರ ಸಮಿತಿಯನ್ನು ರಚಿಸಿದೆ. ಸುಪ್ರೀಂಕೋರ್ಟ್​ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ಸಮಿತಿ ತನಿಖೆ ನಡೆಸುತ್ತಿದೆ.

ರಾಜಕೀಯ ಚರ್ಚೆಗೆ ಹೋಗದೇ ಮೌಲ್ಯ ಎತ್ತಿ ಹಿಡಿಯಲು ಶ್ರಮಪಡಬೇಕು. ಪ್ರತಿಯೊಬ್ಬ ಭಾರತೀಯನಿಗೂ ಖಾಸಗಿತನದ ರಕ್ಷಣೆ ನೀಡಬೇಕು. ನಾವು ಮಾಹಿತಿಯ ಯುಗದಲ್ಲಿ ಬದುಕುತ್ತಿದ್ದೇವೆ. ಕೆಲ ಅರ್ಜಿಗಳು ಕೇಂದ್ರ ಸರ್ಕಾರದ ನಿಷ್ಕ್ರಿಯತೆ ಬಗ್ಗೆ ಪ್ರಸ್ತಾಪಿಸಿವೆ. ಈ ತೀರ್ಪಿನಲ್ಲಿ ನಾವು ಖಾಸಗಿತನದ ಹಕ್ಕಿನ ಬಗ್ಗೆ ಚರ್ಚಿಸಿದ್ದೇವೆ. ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಭಾರಿ ಪರಿಣಾಮ ಬೀರುತ್ತೆ. ಶಾಸನದ ಮಾನ್ಯತೆ ಇಲ್ಲದೇ ಖಾಸಗಿತನದ ಹಕ್ಕಿನಲ್ಲಿ ಮೂಗುತೂರಿಸುವಿಕೆಗೆ ಅವಕಾಶವಿಲ್ಲ. ಖಾಸಗಿತನದ ಹಕ್ಕನ್ನು ಅತಿಕ್ರಮಿಸುವ ಮೂಲಕ ಮಾಧ್ಯಮ ಸ್ವಾತಂತ್ರ್ಯವನ್ನು ಕಡೆಗಣಿಸಲಾಗಲ್ಲ. ಖಾಸಗಿತನದ ಹಕ್ಕಿನಲ್ಲಿ ಮೂಗು ತೂರಿಸಲು ಮಸೂದೆ ಪಾಸ್ ಆಗಬೇಕು. ಸಾಂವಿಧಾನಿಕ ಅಗತ್ಯದ ಪರೀಕ್ಷೆ ಪಾಸ್ ಆಗಬೇಕು ಎಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ತನ್ನ ತೀರ್ಪಿನಲ್ಲಿ ಸ್ಪಷ್ಟವಾಗಿ ಅಭಿಪ್ರಾಯಪಟ್ಟಿದೆ.

Donate Janashakthi Media

Leave a Reply

Your email address will not be published. Required fields are marked *