ರಾಜ್ಯದಲ್ಲಿ ಕೋವಿಡ್ ಉಲ್ಬಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ತುರ್ತು ಸಭೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು 4 ಗಂಟೆಗೆ ಆರೋಗ್ಯ ಅಧಿಕಾರಿಗಳ ಜೊತೆ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತು ಸಭೆ ನಡೆಸಿಕೊಡಲಿದ್ದಾರೆ. ವಿದೇಶದಲ್ಲಿ ಹೊಸ ರೂಪಾಂತರ ತಳಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುನ್ನಚ್ಚರಿಕೆಯಾಗಿ ಆರೋಗ್ಯ ಇಲಾಖೆ ಮತ್ತು ಬಿಬಿಎಂಪಿ ಅಧಿಕಾರಿಗಳ ಸರ್ಕಾರ ಸಭೆ ನಡೆಸಲು ಮುಂದಾಗಿದೆ.

ರಾಜ್ಯದಲ್ಲಿಯೂ ಧಾರವಾಡ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೋವಿಡ್–19 ಸೋಂಕಿತರ ಸಂಖ್ಯೆಯು ಗಣನೀಯವಾಗಿ ಹೆಚ್ಚುತ್ತಿದೆ. ಪರಿಸ್ಥಿತಿ ನಿಯಂತ್ರಣ ಕುರಿತು ಚರ್ಚೆ ನಡೆಯಲದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ‘ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯು ಏರಿಕೆಯಾಗುತ್ತಿದೆ. ನೆರೆಯ ಕೇರಳ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ. ಕೆಲವು ರಾಷ್ಟ್ರಗಳಲ್ಲಿ ಕೊರೊನಾ ವೈರಾಣುವಿನ ರೂಪಾಂತರಿ ವೈರಸ್‌ ಕಾಣಿಸಿಕೊಳ್ಳುತ್ತಿದೆ. ಈ ಎಲ್ಲ ವಿಷಯಗಳ ಬಗ್ಗೆಯೂ ಚರ್ಚಿಸಿ, ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು’ ಎಂದರು.

ಕೋವಿಡ್ ಸೋಂಕು ಹರಡದಂತೆ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲೇಬೇಕಿದೆ. ಈ ಕಾರಣದಿಂದ ಸಾಕಷ್ಟು ಮುಂಚಿತವಾಗಿಯೇ ರಾಜ್ಯ ಸರ್ಕಾರ ತೀರ್ಮಾನಗಳನ್ನು ಕೈಗೊಳ್ಳುತ್ತಿದೆ. ಎಲ್ಲಾ ಅಂಶಗಳ ಬಗ್ಗೆ ಚರ್ಚಿಸಿದ ಬಳಿಕ ನಿಯಂತ್ರಣ ಕ್ರಮಗಳನ್ನು ಪ್ರಕಟಿಸಲಾಗುವುದು ಎಂದರು.

ಇಂದು ಸಂಜೆ ನಾಲ್ಕು ಗಂಟೆಗೆ ಸಿಎಂ ಗೃಹ ಕಛೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದೆ. ಅಭಿವೃದ್ಧಿ ಆಯುಕ್ತರು, ಬಿಬಿಎಂಪಿ ಮುಖ್ಯ ಆಯುಕ್ತರು, ವಿಪತ್ತು ನಿರ್ವಹಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಧಾರವಾಡ, ದಕ್ಷಿಣ ಕನ್ನಡ, ಉಡುಪಿ, ಚಾಮರಾಜನಗರ, ಕೊಡಗು, ಮೈಸೂರು, ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ತಾಂತ್ರಿಕ ಸಲಹಾ ಸಮಿತಿ ಸದಸ್ಯರಿರನ್ನು ಸಹ ಸಭೆಗೆ ಆಹ್ವಾನ ನೀಡಲಾಗಿದೆ.

ಈ ಸಂಬಂಧ ಸಭೆಯಲ್ಲಿ ಮಹತ್ವದ ಕೆಲ ನಿರ್ಧಾರ ಪ್ರಕಟಗೊಳ್ಳುವ ಸಾಧ್ಯತೆಗಳಿವೆ. ವಿಮಾನ ನಿಲ್ದಾಣಗಳಲ್ಲಿ ಹಾಗೂ ರಾಜ್ಯದ ಗಡಿ ಭಾಗದಲ್ಲಿ ತೆಗೆದುಕೊಳ್ಳಬೇಕಾದ ‌ಬಿಗಿ ಕ್ರಮಗಳು, ಶಾಲೆಗಳಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳು, ವಿದೇಶದಿಂದ ಬರುವವರಿಗೆ ಕ್ವಾರಂಟೈನ್ ಮಾಡುವುದು, ಗಡಿ ಭಾಗದಲ್ಲಿ ರಾಜ್ಯಕ್ಕೆ ಬಂದು ಹೋಗುವವರ ಮೇಲೆ ನಿಗಾ ವಹಿಸುವುದು ಹೀಗೆ ಇನ್ನು ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದ್ದು, ನಂತರ ನಿಯಮಾವಳಿಗಳನ್ನು ಘೋಷಿಸುವ ಸಾಧ್ಯತೆ ಇದೆ.

Donate Janashakthi Media

Leave a Reply

Your email address will not be published. Required fields are marked *