ಬೆಂಗಳೂರು : ಕನ್ನಡ ನಾಡಿನ ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ,ಕನ್ನಡ ಹೋರಾಟಗಾರ ಚಂದ್ರಶೇಖರ ಪಾಟೀಲ್ ಇಂದು ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ಪ್ರೊ.ಚಂದ್ರಶೇಖರ್ ಪಾಟೀಲ್ ಅವರಿಗೆ ಭಾನುವಾರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾದ ಪರಿಣಾಮ ಅವರನ್ನು ಬೆಂಗಳೂರಿನ ಕೋಣನಕುಂಟೆ ಕ್ರಾಸ್ ಬಳಿಯಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಗೆ ದಾಖಲಿಸಿದ ಬೆನ್ನಲ್ಲೇ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದರು. ಆದರೆ ನಂತರದಲ್ಲಿ ಚಿಕಿತ್ಸೆಗೆ ಸ್ಪಂದಿಸದ ಹಿನ್ನಲೆಯಲ್ಲಿ ಸೋಮುವಾರ ಬೆಳಗಿನಜಾವ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅಂತ್ರ್ಯಕ್ರಿಯೆ ಕುರಿತು ಮಾಹಿತಿ ಲಭ್ಯವಾಗಬೇಕಿದೆ.
‘ಚಂಪಾ’ ಎಂಬ ಕಾವ್ಯನಾಮದಿಂದ ಖ್ಯಾತಿಯಿಗಿದ್ದ ಚಂದ್ರಶೇಖರ್ ಪಾಟೀಲ್ ಜೂನ್ 18, 1936 ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ ಜನಸಿದರು. ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಅವರ ತಂದೆಯವರಿಗೆ ಇಂಗ್ಲಿಷ್ ಬಗ್ಗೆ ಅಭಿಮಾನವಿದ್ದುದರಿಂದ ಅದರಿಂದ ಪ್ರೇರಿತರಾಗಿ ಇಂಗ್ಲಿಷ್ ಎಂ.ಎ. ಪದವಿ ಗಳಿಸಿದರು. ಇದಲ್ಲದೆ ಬ್ರಿಟಿಷ್ ಕೌನ್ಸಿಲ್ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್ ಸಂಸ್ಥೆಯಿಂದ ಇಂಗ್ಲಿಷ್ ಅಧ್ಯಯನದ ಡಿಪ್ಲೊಮ ಪಡೆದರು. ಶಿಕ್ಷಣದ ಪ್ರತಿ ಹಂತದಲ್ಲಿಯೂ ಆಗ್ರ ಶ್ರೇಯಾಂಕ ಗಳಿಸಿದ ಕೀರ್ತಿ ಅವರದ್ದಾಗಿತ್ತು.
ಚಂದ್ರಶೇಖರ ಪಾಟೀಲರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಬೋಧಕ ವೃತ್ತಿ ಆರಂಭಿಸಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಲೇ ತಮ್ಮ ಕಾವ್ಯ ಹಾಗೂ ನಾಟಕಗಳ ಮೂಲಕ ಪ್ರಸಿದ್ಧರಾಗುತ್ತಾ ಬಂದರು. ಅವರು ಹಾವೇರಿಯ ಮುನಿಸಿಪಲ್ ಹೈಸ್ಕೂಲಿನಲ್ಲಿದ್ದಾಗಲೇ ಕವನ ಬರೆಯುವುದರ ಬಗ್ಗೆ ಆಸಕ್ತಿ ಮೂಡಿಸಿಕೊಂಡಿದ್ದರು. ಕಥೆ, ಕವನ, ಕಾದಂಬರಿ, ನಾಟಕ, ಸಂಪಾದನೆ, ಅಂಕಣ ಹೀಗೆ ಸಾಹಿತ್ಯದ ವಿವಿಧ ಪ್ರಕಾರದಲ್ಲಿ ಅವರು ಸಾಕಷ್ಟು ಕೃಷಿ ಮಾಡಿದ್ದರು.
ಹೊಂಗನಸ ಹಡಗು, ನಾಳಿಗಿದೋ ಸ್ವಾಗತ, ಚರಿಪನಾದವೊ ಹಾಡು ಹಕ್ಕಿಯೋ ಮುಂತಾದವು ಅವರ ಪ್ರಮುಖ ಕವನ ಸಂಕಲನಗಳು. ಕಾವ್ಯಕೃಷಿಯಲ್ಲೇ ತೊಡಗಿಸಿಕೊಂಡಿದ್ದ ಚಂಪಾರವರು ನಾಟಕಮಾಧ್ಯಮವನ್ನೂ ಆಯ್ದುಕೊಂಡು ಹಲವಾರು ನಾಟಕಗಳನ್ನೂ ರಚಿಸಿದ್ದು ಅವುಗಳಲ್ಲಿ ಕೊಡೆಗಳು, ಅಪ್ಪ, ಕುಂಟ ಕುಂಟ ಕುರುವತ್ತಿ, ಗುರ್ತಿನವರು, ಟಿಂಗರ ಬುಡ್ಡಣ್ಣ, ಕತ್ತಲರಾತ್ರಿ, ಗೋಕರ್ಣದ ಗೌಡಸಾನಿ, ಜಗದಂಬೆಯ ಬೀದಿನಾಟಕ, ಬುರಡಿ ಬಾಬನ ವಸ್ತ್ರಾಪಹರಣ ಪವಾಡ, ನಳ ಕವಿಯ ಮಸ್ತಕಾಭಿಷೇಕ, ವಂದಿಮಾಗಧ ಮುಂತಾದವುಗಳು ಪ್ರಖ್ಯಾತವಾಗಿವೆ.
ಸಂಕ್ರಮಣ : ಪೂರ್ಣರೂಪದ ಸಾಹಿತ್ಯ ಪತ್ರಿಕೆಯೊಂದರ ಅವಶ್ಯಕತೆಯನ್ನು ಮನಗಂಡ ಚಂದ್ರಶೇಖರ ಪಾಟೀಲರು ಸಮಾನ ಮನಸ್ಕರೊಡನೆ ಸಮಾಲೋಚಿಸಿ ಗಿರಡ್ಡಿ ಗೋವಿಂದರಾಜ, ಸಿದ್ಧಲಿಂಗ ಪಟ್ಟಣಶೆಟ್ಟಿ, ಇವರುಗಳೊಡನೆ ಸೇರಿ 1964 ರಲ್ಲಿ ಪ್ರಾರಂಭಿಸಿದ ಪತ್ರಿಕೆ ‘ಸಂಕ್ರಮಣ’. ಈ ಪತ್ರಿಕೆಯು ನವ್ಯದ ಉಚ್ಛ್ರಾಯ ಸ್ಥಿತಿಯಲ್ಲಿ ಪ್ರಾರಂಭವಾಗಿದ್ದು ಎಪ್ಪತ್ತರ ದಶಕದ ನಂತರ ದಲಿತ, ಬಂಡಾಯ ಸಾಹಿತ್ಯ ಚಳವಳಿ ಮುಂತಾದವುಗಳನ್ನು ಒಳಗೊಂಡು ಹಲವಾರು ಯುವ ಬರಹಗಾರರಿಗೆ ವೇದಿಕೆಯನ್ನು ಕಲ್ಪಿಸಿದ ಪತ್ರಿಕೆಯಾಗಿ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಪ್ರಕಟವಾಗುತ್ತಿದೆ. ಬಹುತೇಕ ಸಾಹಿತ್ಯದ ಕೃಷಿಕರಿಗೆ ಸಂಕ್ರಮಣ ವೇದಿಕೆಯಾಗಿ ಮಾರ್ಗದರ್ಶಕವೂ ಆಗಿತ್ತು.
ಕನ್ನಡ ಹೋರಾಟಗಾರ : ಚಂದ್ರಶೇಖರ ಪಾಟೀಲರು ಉತ್ತರ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎನಿಸಿಕೊಂಡಿರುವ ಧಾರವಾಡದಲ್ಲಿದ್ದಾಗಿನಿಂದಲೂ ಕನ್ನಡ ಪರ ಕಾಳಜಿ ವಹಿಸಿ, ಕನ್ನಡ ಪರ ಹೋರಾಟವನ್ನು ನಡೆಸುತ್ತಾ ಬಂದವರು. ಹಲವಾರು ಸಂಘಟನೆಗಳಲ್ಲಿ ಪ್ರಮುಖ ಪಾತ್ರವಹಿಸಿದವರು. ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಧಾರವಾಡ ನಾಟಕ ಕೂಟದ ಕಾರ್ಯದರ್ಶಿಯಾಗಿ, ಮ್ಯಾಳ ನಾಟಕ ಸಂಘದ ಕಾರ್ಯಾಧ್ಯಕ್ಷರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ವಿಶ್ವಚೇತನ ಸಾಂಸ್ಕೃತಿಕ ವೇದಿಕೆಯ ನಿಯೋಜಕರಾಗಿ-ಹೀಗೆ ಹಲವು ಹತ್ತು ಸಂಘಟನೆಗಳಲ್ಲೂ, ಗೋಕಾಕ ಚಳವಳಿ ಮುಂತಾದ ಅನೇಕ ಜನಪರ ಚಳವಳಿಗಳಲ್ಲೂ ತಮನ್ನು ತೊಡಗಿಸಿಕೊಂಡವರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ 26 ದಿನ 25 ರಾತ್ರಿ ಜೈಲುವಾಸವನ್ನನುಭವಿಸಿದರು.
ಸಾಹಿತ್ಯದ ಪ್ರೋತ್ಸಾಹಕ : ಕನ್ನಡಕ್ಕಾಗಿ ದುಡಿಯುತ್ತಿದ್ದ ಚಂದ್ರಶೇಖರ ಪಾಟೀಲರನ್ನು ಕರ್ನಾಟಕ ಸರ್ಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿತು. 1996 -99 ರ ಅವಧಿಗೆ ಈ ಜವಾಬ್ಧಾರಿಯನ್ನು ನಿರ್ವಹಿಸುವುದರ ಜೊತೆಗೆ 2004-08 ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದರು. ಅವರು ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಪರಿಷತ್ತನ್ನು ಪ್ರಬಲ ಹೋರಾಟದ ವೇದಿಕೆಯನ್ನಾಗಿ ರೂಪಿಸಿದ್ದು, ಪುಸ್ತಕ ಮಾರಾಟದ ಮೂಲಕ ಸಣ್ಣ ಪ್ರಮಾಣದ ಪ್ರಕಾಶಕರನ್ನು ಉತ್ತೇಜಿಸಲು ‘ಪುಸ್ತಕ ಸಂತೆ’ಯನ್ನು ಪ್ರತಿ ಶನಿವಾರ ಸಂಜೆ ಏರ್ಪಡಿಸಿದ್ದರ ಜೊತೆಗೆ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು, ಶಿಕ್ಷಣ ಸಮಸ್ಯೆಯನ್ನು ಪರಿಹರಿಸಲು ಉನ್ನತ ಮಟ್ಟದ ಸಮಾಲೋಚನ ಸಭೆಯನ್ನು ಏರ್ಪಡಿಸಿದ್ದು, ಗಡಿನಾಡ ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕಾಗಿ ಅಧ್ಯಕ್ಷರ ಪುಸ್ತಕ ನಿಧಿಯನ್ನು ಪ್ರಾರಂಭಿಸಿದ್ದು, ಕನ್ನಡ ಭಾಷೆಗೂ ಶಾಸ್ತ್ರೀಯ ಸ್ಥಾನಮಾನ ದೊರೆಯುವಂತಾಗಲು ಹೋರಾಟ ನಡೆಸಿದ್ದು, ಪರಿಷತ್ತಿಗೆ ತನ್ನದೇ ಆದ ವೆಬ್ಸೈಟ್, ಅಂತರ್ಜಾಲ ಸೌಲಭ್ಯಗಳು, ಗಣಕ ಸಮ್ಮೇಳನದ ಆಯೋಜನೆ ಮುಂತಾದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.
ಜನಪರ ಜೀವಪರ ಹೋರಾಟಗಾರ : ಬಂಡಾಯ, ನವೋದಯ ಸಾಹಿತ್ಯದ ಚಳುವಳಿಗಳಲ್ಲಿ ಚಂಪಾ ಹೆಸರು ಮೇಲ್ಪಂಕ್ತಿಯಲ್ಲಿದೆ. ಬಂಡಾಯ ಸಾಹಿತ್ಯ ಈಗ ಕ್ಷೀಣಿಸಿರಬಹುದು, ಮುಂದೆ ಅದು ಪ್ರಭಲವಾಗಲಿದೆ. ಸಾಹಿತ್ಯ ಚಳುವಳಿ ನಿರಂತರ ಎಂದು ಬಂಡಾಯ ಸಾಹಿತ್ಯದ ಪುನರ್ ಸಂಘಟನೆಯ ಬಗ್ಗೆ ಆಶಯ ಹೊಂದಿದ್ದರು.
ಜನಪರ ಸಂಘಟನೆಗಳು ನಡೆಸುತ್ತಿದ್ದ ಹೋರಾಟ, ಕಾರ್ಯಕ್ರಮಗಳಲ್ಲಿ ಚಂಪಾ ಇರುತ್ತಿದ್ದರು. ಮೌಡ್ಯ ಪ್ರತಿಬಂಧಕ ಕಾಯ್ದೆ ಜಾರಿಗಾಗಿ ನಡೆದ ಹೋರಾಟದಲ್ಲಿ ಸಾಕಷ್ಟು ಶ್ರಮ ಹಾಕಿದವರು. ಕಾಂಗ್ರೆಸ್, ಬಿಜೆಪಿಯೇತರ ಪರ್ಯಾಯ ಸರಕಾರ ರಚನೆಯಾಗಬೇಕು ಎಂಬ ಬಲವಾದ ವಾದ ಮಂಡಿಸುತ್ತಿದ್ದರು.
ಪ್ರಶಸ್ತಿಗಳು : ಕನ್ನಡ ನಾಡು-ನುಡಿ, ಸಂಸ್ಕೃತಿಯ ರಕ್ಷಣೆಗಾಗಿ ನಿರಂತರ ಹೋರಾಡುತ್ತಾ ಬಂದಿರುವ ಚಂಪಾರವರಿಗೆ ಬಂದಿರುವ ಪ್ರಶಸ್ತಿ ಗೌರವಗಳು ಹಲವಾರು. ಇವುಗಳಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್ ಮಾಧ್ಯಮ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, ಆಳ್ವಾಸ್ ನುಡಿಸಿರಿ ಪ್ರಶಸ್ತಿ ಮತ್ತು ಪಂಪ ಪ್ರಶಸ್ತಿ ಮುಂತಾದವುಗಳು ಪ್ರಮುಖವಾಗಿವೆ.2017 ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು 2018 ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.