ಪದವಿ ಹಂತದಲ್ಲಿ ಕಡ್ಡಾಯ ಕನ್ನಡ ಕಲಿಕೆ: ವಿಚಾರಣೆ ಮುಂದೂಡಿದ ರಾಜ್ಯ ಹೈಕೋರ್ಟ್

ಬೆಂಗಳೂರು: ಪದವಿ ಹಂತದಲ್ಲಿ ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಇಂದು ನಡೆಸಿದ ಕರ್ನಾಟಕ ಹೈಕೋರ್ಟ್‌ ಈ ಬಗ್ಗೆ ಇನ್ನಷ್ಟು ವಿಚಾರಣೆಯ ಅಗತ್ಯತೆ ಇದ್ದು, ವಿಚಾರಣೆ ಜನವರಿ 31ಕ್ಕೆ ಮುಂದೂಡಲಾಗಿದೆ.

ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, ಮಹಾವಿದ್ಯಾಲಯ ಸಂಸ್ಕೃತ ಪ್ರಾಧ್ಯಾಪಕ ಸಂಘ, ಶ್ರೀ ಹಯಗ್ರೀವಾ ಟ್ರಸ್ಟ್‌, ವ್ಯೋಮಾ ಲಿಂಗ್ವಿಸ್ಟಿಕ್‌ ಲ್ಯಾಬ್ಸ್‌ ಫೌಂಡೇಶನ್‌ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಭಾಷೆಯ ಅಧ್ಯಯನ ಮುಂದುವರಿಸಲು ಸ್ವತಂತ್ರರು ಎಂದು ಆದೇಶ ಮಾಡಬೇಕೆಂದು ಕೋರಿ ಶಿವಕುಮಾರ್‌ ಕೆ ಜಿ ಸೇರಿದಂತೆ ಆರು ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತು ರಾಜ್‌ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಕನ್ನಡ ಕಲಿಯಬಯಸದ ವಿದ್ಯಾರ್ಥಿಗಳಿಗೆ ಕನ್ನಡ ಕಡ್ಡಾಯ ಬೇಡ. ಹೈಕೋರ್ಟ್​​ನ ಆದೇಶವನ್ನು ರಾಜ್ಯ ಸರ್ಕಾರ ಪಾಲಿಸಿಲ್ಲ. ಅಲ್ಲದೇ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಆದೇಶದ ಮಾಹಿತಿ ನೀಡಬೇಕಿತ್ತು. ಈ ಬಗ್ಗೆ ಸರ್ಕಾರಕ್ಕೆ ನಿರ್ದೇಶಿಸಲು ಅರ್ಜಿದಾರರು ಮನವಿ ಮಾಡಿದ್ದರು. ಹೀಗಾಗಿ ಎಲ್ಲವೂಗಳ ಬಗ್ಗೆ ಮುಂದಿನ ವಿಚಾರಣೆಯಲ್ಲಿ ಆಲಿಸಲಾಗುವುದು ಎಂದು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹೇಳಿದ್ದಾರೆ.

ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸುವಂತೆ ಹೈಕೋರ್ಟ್ ಸಲಹೆ ನೀಡಿತ್ತು. ಈ ಹಿಂದೆಯೂ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಸಚಿನ್ ಶಂಕರ್ ಮಗದುಮ್‌ ನೇತೃತ್ವದ ಪೀಠ ಸರ್ಕಾರದ ಕ್ರಮಕ್ಕೆ ಅಸಮಾಧಾನ ಹೊರ ಹಾಕಿ ಇಂತಹ ಆದೇಶಗಳನ್ನು ವಿದ್ಯಾರ್ಥಿಗಳ ಮೇಲೆ ಹೇರುವುದು ಸೂಕ್ತವಲ್ಲ. ಕನ್ನಡ ಕಲಿಕೆ ಕಡ್ಡಾಯ ನೀತಿಯನ್ನು ಮರುಪರಿಶೀಲಿಸಬೇಕೆಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸಲಹೆ ನೀಡಿತ್ತು.

ತನ್ನ ಕ್ರಮವನ್ನು ಸಮರ್ಥಿಸಿಕೊಂಡ ರಾಜ್ಯ ಸರ್ಕಾರ, ಶಾಸ್ತ್ರೀಯವಾದ ಕನ್ನಡ ಕಲಿಯುವಂತೆ ಆದೇಶದಲ್ಲಿ ಸೂಚಿಸಲಾಗಿಲ್ಲ ಎಂದು ವಾದ ಮಂಡನೆ ಮಾಡಿತು. ಆದರೆ ಸರ್ಕಾರದ ವಾದವನ್ನು ಹೈಕೋರ್ಟ್ ಒಪ್ಪಲಿಲ್ಲ. ಬದಲಿಗೆ ಸರ್ಕಾರದ ಆದೇಶ ಮರುಪರಿಶೀಲಿಸುವಂತೆ ಸಲಹೆ ನೀಡಿತ್ತು.

ಸದ್ಯ ಇಂದು ಮತ್ತೆ ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತಿದ್ದೀರಿ. ಇದರಿಂದ ಎಷ್ಟು ವಿದ್ಯಾರ್ಥಿಗಳು ಹೊರಹೋಗಿದ್ದಾರೆ ಗೊತ್ತೇ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನೆ ಮಾಡಿದೆ.

ಅರ್ಜಿದಾರರ ವಾದವೆಂದರೆ, ಹಲವು ವಿದ್ಯಾರ್ಥಿಗಳು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದಲ್ಲಿ ಕನ್ನಡ ಕಲಿತಿರುವುದಿಲ್ಲ. ಆದರೆ ಪದವಿ ಸೇರಿದ ಕೂಡಲೇ ಕನ್ನಡ ಕಲಿಯಬೇಕೆಂದು ಕಡ್ಡಾಯಗೊಳಿಸುವುದು ಸರಿಯಲ್ಲ. ನಮ್ಮ ರಾಜ್ಯವಲ್ಲದೇ, ಹೊರ ರಾಜ್ಯದ ಸಾವಿರಾರು ವಿದ್ಯಾರ್ಥಿಗಳು ಪದವಿ ಶಿಕ್ಷಣ ಪಡೆಯುತ್ತಿದ್ದಾರೆ. ಸರ್ಕಾರದ ಕ್ರಮದಿಂದ ಈ ಎಲ್ಲಾ ವಿದ್ಯಾರ್ಥಿಗಳೂ ತೊಂದರೆ ಅನುಭವಿಸುವಂತಾಗಿದೆ.

ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಆಯ್ಕೆ ಆಧರಿತ ಶಿಕ್ಷಣಕ್ಕೆ ಅವಕಾಶ ಕಲ್ಪಿಸಲಾಗಿದೆಯೇ ಹೊರತು ಕನ್ನಡ ಕಲಿಕೆ ಕಡ್ಡಾಯಗೊಳಿಸಲು ಶಿಫಾರಸು ಮಾಡಲಾಗಿಲ್ಲ. ಹೀಗಿರುವಾಗ ಸರ್ಕಾರದ ಆದೇಶ ಏಕಪಕ್ಷೀಯವಾಗಿದೆ. ಸಂವಿಧಾನದ ಸಮಾನತೆ, ಅಭಿವ್ಯಕ್ತಿ ಹಾಗೂ ಬದುಕುವ ಹಕ್ಕಿನ ಉಲ್ಲಂಘನೆಯಾಗಿದೆ. ಹೀಗಾಗಿ ಕನ್ನಡ ಕಲಿಕೆ ಕಡ್ಡಾಯ ಆದೇಶ ರದ್ದುಪಡಿಸಬೇಕೆಂದು ಅರ್ಜಿಯಲ್ಲಿ ವಾದಿಸಲಾಗಿದೆ.

Donate Janashakthi Media

Leave a Reply

Your email address will not be published. Required fields are marked *