ಬೆಂಗಳೂರು: ಸರ್ಕಾರವು ಜಾರಿಗೊಳಿಸಿರುವ ಕೋವಿಡ್ ನಿಯಮವಳಿಗಳನ್ನು ಉಲ್ಲಂಘಿಸಿ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದ ಬೆಂಗಳೂರಿನ ಮಾಜಿ ಪಾಲಿಕೆ ಸದಸ್ಯ ಹಾಗೂ ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷ ಎನ್.ಆರ್.ರಮೇಶ್ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೆಪಿಸಿಸಿ ಕಾನೂನು ಮತ್ತು ಮಾನವ ಹಕ್ಕು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಡಿಸಿಪಿ ಸಂಜೀವ್ ಪಾಟೀಲ್ ಅವರಿಗೆ ದೂರು ನೀಡಿದ್ದರು. ದೂರನ್ನು ಆಧರಿಸಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜನವರಿ 14ರಂದು ರಾಯಪುರ ವಾರ್ಡಿನ ಬಿಬಿಎಂಪಿ ಕಟ್ಟಡದಲ್ಲಿ ಸಾವಿರಕ್ಕೂ ಅಧಿಕ ಜನರು ಸೇರಿದ್ದರು. ಅಂದು ಅಲ್ಲಿ ಎನ್.ಆರ್.ರಮೇಶ್ ಹುಟ್ಟುಹಬ್ಬ ಆಚರಿಸಿಕೊಂಡರು. ಆ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ, ಮಾಸ್ಕ್ ಧರಿಸದೆ ಕೊರೊನಾ ನಿಯಮಾವಳಿ ಉಲ್ಲಂಘಿಸಲಾಗಿದೆ. ಈ ಮೂಲಕ ಕೋವಿಡ್ ಸೋಂಕು ವ್ಯಾಪಕವಾಗಿ ಹರಡಲು ಕಾರಣರಾಗಿದ್ದಾರೆ. ಹೀಗಾಗಿ ಎನ್.ಆರ್.ರಮೇಶ್ ಸೇರಿದಂತೆ ಇತರರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಕೋರಲಾಗಿದೆ.
ವಾರಾಂತ್ಯ ಕರ್ಫ್ಯೂ ಸಂದರ್ಭದಲ್ಲಿಯೇ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೊವಿಡ್ ನಿಯಮಾವಳಿ ಉಲ್ಲಂಘನೆ ಮಾಡಿದ ಘಟನೆಗಳು ಹೆಚ್ಚಾಗಿ ರಾಜಕೀಯ ನಾಯಕರಿಂದಲೇ ನಡೆದಿದೆ. ಮತ್ತೊಂದು ಘಟನೆ ದಾವಣಗೆರೆ ಜಿಲ್ಲೆಯ ಹೊನ್ನಳ್ಳಿಯಲ್ಲಿ ನಡೆದಿದ್ದು, ಅಂಗನವಾಡಿ ಕೇಂದ್ರ ಉದ್ಘಾಟನೆ ಮಾಡಿ ಬಿಜೆಪಿ ಶಾಸಕ ರೇಣುಕಾಚಾರ್ಯ ನಿಯಮಾವಳಿ ಉಲ್ಲಂಘಿಸಿದ್ದರು. ಹೊನ್ನಾಳಿ ತಾಲೂಕಿನ ಬಳೇಶ್ವರ ಗ್ರಾಮದಲ್ಲಿ ಅಂಗನವಾಡಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಭಾಗಿಯಾಗಿದ್ದರು.
ಕಳೆದ ಬಾರಿ ವಾರಾಂತ್ಯ ಕರ್ಫ್ಯೂ ವೇಳೆಯೇ ಜನರ ಹಾಗೂ ಮೇಕೆದಾಟು ಪಾದಯಾತ್ರೆಯಲ್ಲಿ ತೊಡಗಿದ್ದ ಕಾಂಗ್ರೆಸ್ ಪಕ್ಷದ ಆಕ್ರೋಶಕ್ಕೆ ಕಾರಣವಾಗಿತ್ತು.