ಬೆಂಗಳೂರು: ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯಲ್ಲಿ ಪರೀಕ್ಷೆಯ ಅಕ್ರಮ ಬಯಲಾಗಿತ್ತು. ಬೆಂಗಳೂರಿನಲ್ಲೂ ಅಕ್ರಮ ನಡೆದಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇದನ್ನು ಓದಿ: ಪಿಎಸ್ಐ ನೇಮಕಾತಿ ಅಕ್ರಮ: ಐಪಿಎಸ್ ಅಧಿಕಾರಿ ಅಮೃತ್ ಪೌಲ್ ಎತ್ತಂಗಡಿ
ರಾಜ್ಯದ 92 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆಗಳು ನಡೆದಿದ್ದವು. ಅವುಗಳಲ್ಲಿನ ಕೆಲವು ಕೇಂದ್ರಗಳಲ್ಲಿ ಅಕ್ರಮ ನಡೆದಿರುವುದು ಕಂಡುಬಂದಿದೆ. ಬೆಂಗಳೂರಿನ 7 ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್ಐ ಪರೀಕ್ಷೆ ಬರೆದ 22 ಅಭ್ಯರ್ಥಿಗಳ ಒಎಂಆರ್ ಪ್ರತಿಗಳ ಬಗ್ಗೆ ಸಿಐಡಿ ಅನುಮಾನ ವ್ಯಕ್ತಪಡಿಸಿದೆ. ಈ ಕುರಿತು ಸರ್ಕಾರಕ್ಕೆ ಸಹ ವರದಿ ನೀಡಲಾಗಿತ್ತು. ಈಗ 12 ಅಭ್ಯರ್ಥಿಗಳ ಬಂಧನವಾಗಿದೆ.
ಬಂಧಿತ 12 ಮಂದಿಯನ್ನು 10 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಸಿಐಡಿ ಡಿಎಸ್ಪಿ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಲಾಗಿತ್ತು. ಈ ಪ್ರಕರಣವನ್ನೂ ಸಹ ಸಿಐಡಿಗೆ ವರ್ಗಾಯಿಸಲಾಗಿದೆ.
ಇದನ್ನು ಓದಿ: ಪಿಎಸ್ಐ ಪರೀಕ್ಷಾ ಅಕ್ರಮ – ಬೆಳೆಯುತ್ತಲೇ ಇದೆ ಬಿಜೆಪಿಗರ ಪಟ್ಟಿ
ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮದ ಹಿನ್ನಲೆಯಲ್ಲಿ ಪರೀಕ್ಷೆ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಮತ್ತೊಂದು ಕಡೆ ಸಿಐಡಿ ಹಗರಣದ ತನಿಖೆ ಚುರುಕುಗೊಳಿಸಿದೆ.