ಕಾಂಗ್ರೆಸ್‌ ಪಕ್ಷಕ್ಕೆ ಮುಖ್ಯಮಂತ್ರಿ ಚಂದ್ರು ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ, ಕಾಂಗ್ರೆಸ್ ನಾಯಕ, ನಟ ಮುಖ್ಯಮಂತ್ರಿ ಚಂದ್ರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದಿದ್ದಾರೆ.

ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ದೇಶದಲ್ಲೇ ಸುದೀರ್ಘ ಇತಿಹಾಸವಿರುವ ಪಕ್ಷಕ್ಕೆ ವ್ಯಾಪಕ ನೆಲೆಯಲ್ಲಿ ಜನಸೇವೆ ಮಾಡುವ ಆಶಯದಿಂದ ಸೇರ್ಪಡೆಯಾಗಿದ್ದು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆಂಬ ತೃಪ್ತಿಯಿದೆ ಎಂದಿರುವ ಅವರು, ಸದ್ಯ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿರುವೆ. ನನ್ನ ಮೇಲೆ ವಿಶ್ವಾಸವಿಟ್ಟು ಪಕ್ಷದ ಸಾಂಸ್ಕೃತಿಕ ಘಟಕದ ಅಧ್ಯಕ್ಷರನ್ನಾಗಿ ಪ್ರಕಟಿಸಿರುವ ಜವಾಬ್ದಾರಿಯನ್ನು ವಹಿಸಿಕೊಳ್ಳುವ ಪ್ರಮೇಯವೇ ಉದ್ಭವಿಸುವುದಿಲ್ಲ. ಇಂದಿನವರೆಗೂ ನನಗೆ ಪಕ್ಷದಲ್ಲಿ ಬೆಂಬಲಿಸಿದ, ಪ್ರೀತಿಯನ್ನು ತೋರಿಸಿದ ಎಲ್ಲರಿಗೂ ಮನದಾಳದ ಕೃತಜ್ಞತೆಗಳು ಪತ್ರದಲ್ಲಿ ತಿಳಿಸಿದ್ದಾರೆ.

68 ವರ್ಷ ವಯಸ್ಸಿನ ಮುಖ್ಯಮಂತ್ರಿ ಚಂದ್ರು ಈ ಹಿಂದೆ ಬಿಜೆಪಿಯಿಂದ ವಿಧಾನ ಪರಿಷತ್ ಸ್ಥಾನಕ್ಕೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಸೇರ್ಪಡೆ ಆಗಿದ್ದರು. ಈ ಬಾರಿ ವಿಧಾನ ಪರಿಷತ್ ಇಲ್ಲವೇ ರಾಜ್ಯಸಭೆಗೆ ಕಾಂಗ್ರೆಸ್ ಪಕ್ಷ ಪರಿಗಣಿಸಲಿದೆ ಎಂದು ನಿರೀಕ್ಷಿಸಿದ್ದರು. ಆದರೆ ಆಯ್ಕೆ ಆಗದ ಹಿನ್ನೆಲೆಯಲ್ಲಿ ಪಕ್ಷದ ಮೇಲಿನ ಬೇಸರ ಹಾಗೂ ತಮ್ಮನ್ನು ಕಾಂಗ್ರೆಸ್​ನಲ್ಲಿ ನಿರ್ಲಕ್ಷಿಸಲಾಗುತ್ತಿದೆ ಎಂದು ತೀರ್ಮಾನಿಸಿ ರಾಜೀನಾಮೆ ಸಲ್ಲಿಸಿದ್ದಾರೆ ಎಂಬ ಮಾಹಿತಿ ಇದೆ.‌

ಮುಖ್ಯಮಂತ್ರಿ ಚಂದ್ರು 1985 ರಿಂದ 1989ರ ಅವಧಿಯಲ್ಲಿ ಗೌರಿಬಿದನೂರು ಶಾಸಕರಾಗಿ ಕಾರ್ಯನಿರ್ವಹಿಸಿದ್ದರು. 1998 ರಿಂದ 2010ರ ಅವಧಿಗೆ ಬಿಜೆಪಿಯಿಂದ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು. 2008 ರಿಂದ 2014ರ ಅವಧಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ನಟರಾಗಿ, ರಂಗಭೂಮಿ ಕಲಾವಿದರಾಗಿ ಸಾಕಷ್ಟು ಹೆಸರು ಮಾಡಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *