- ಧರ್ಮದ ಆಧಾರದ ಮೇಲೆ ಪೌರತ್ವ ನಿರ್ಧರ ಖಂಡಿಸಿರುವ ಪಿಣರಾಯಿ ವಿಜಯನ್
- ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಕಚಿತ ನಿಲುವನ್ನು ವ್ಯಕ್ತಪಡಿಸಿದ ಎಡರಂಗ ಸರ್ಕಾರ
ತಿರುವನಂತಪುರ: ವಿವಾದಾತ್ಮಕ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ರಾಜ್ಯದಲ್ಲಿ ತಮ್ಮ ಸರ್ಕಾರ ಜಾರಿಗೆ ತರುವುದಿಲ್ಲ ಎಂದು ಕೇರಳ ಎಡರಂಗ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಜನರಲ್ಲಿ ಕೋಮು ಉದ್ವಿಗ್ನತೆಯನ್ನು ಉಂಟುಮಾಡಲು ದೇಶದ ವಿವಿಧ ಭಾಗಗಳಲ್ಲಿ ಹಲವಾರು ಸಮೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ವಿಜಯನ್ ಅವರು ‘ಕೇರಳದಲ್ಲಿ ಸಮಾಜದ ಅತ್ಯಂತ ಬಡ ಕುಟುಂಬಗಳನ್ನು ಗುರುತಿಸಲು ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ. ಈ ಸಮೀಕ್ಷೆಯ ಭಾಗವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದುʼʼ ಎಂದು ಭರವಸೆ ನೀಡಿದ್ದಾರೆ.
ಎಲ್ಡಿಎಫ್ ಸರ್ಕಾರದ ಮೊದಲ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಅವರು, ‘ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ನಮ್ಮ ಸರ್ಕಾರವು ಸ್ಪಷ್ಟ ನಿಲುವು ಹೊಂದಿದೆ. ಅದು ಮುಂದುವರಿಯುತ್ತದೆ’ ಎಂದು ಖಚಿತಪಡಿಸಿದ್ದಾರೆ.
‘ದೇಶದಲ್ಲಿ ಜಾತ್ಯತೀತತೆಯನ್ನು ಹೋಗಲಾಡಿಸುವ ಪ್ರಯತ್ನಗಳು ನಡೆಯುತ್ತಿದ್ದು, ಧರ್ಮದ ಆಧಾರದ ಮೇಲೆ ಪೌರತ್ವವನ್ನು ನಿರ್ಧರಿಸಲಾಗುತ್ತಿದೆ. ಆದರೆ ನಮ್ಮ ರಾಜ್ಯದಲ್ಲಿ ಧರ್ಮದ ಆಧಾರದ ಮೇಲೆ ಪೌರತ್ವ ನಿರ್ಧರಿಸುವುದಿಲ್ಲ. ಇದು ನಮ್ಮ ಸರ್ಕಾರದ ದೃಢ ನಿರ್ಧಾರವಾಗಿದೆ ಎಂದರು.