ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡ ಮತದಾನ ಮಾಡಿದ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ಹಾಗೂ ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಅವರನ್ನು ಜೆಡಿಎಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ.
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು.
ಇದನ್ನೂ ಓದಿ : ಕಾಂಗ್ರೆಸ್ಗೆ ಮತ ಹಾಕಿದ ಜೆಡಿಎಸ್ ಶಾಸಕ!
ಹಾಗೆಯೇ ಪಕ್ಷಾಂತರ ನಿಷೇಧ ಕಾಯ್ದೆ ಅಡಿ ಇಬ್ಬರೂ ಶಾಸಕರನ್ನು ವಿಧಾನಸಭೆ ಸದಸ್ಯತ್ವದಿಂದ ಅನರ್ಹಗೊಳಿಸಲು ತಕ್ಷಣವೇ ವಿಧಾನಸಭಾಧ್ಯಕ್ಷರಿಗೆ ದೂರು ನೀಡಲು ಕೂಡ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಎರಡು ಮೂರು ದಿನದೊಳಗೆ ಸ್ಪೀಕರ್ ಅವರಿಗೆ ದೂರು ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ರಾಜ್ಯ ಸಭೆಯಲ್ಲಿ ಅಡ್ಡ ಮತದಾನ : ಇತ್ತೀಚೆಗೆ ನಡೆದಿದ್ದ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ನ ಶಾಸಕರು ಅಡ್ಡ ಮತದಾನ ಮಾಡಿದ್ದರು. ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅಡ್ಡ ಮತದಾನ ಮಾಡಿದ್ದರು. ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ನಜೀರ್ ಅಹ್ಮದ್ ಅವರ ಜತೆಯಲ್ಲಿಯೇ ಮತಗಟ್ಟೆಗೆ ಬಂದಿದ್ದ ಶ್ರೀನಿವಾಸ ಗೌಡ ಕಾಂಗ್ರೆಸ್ಗೆ ಮತ ಚಲಾಯಿಸಿದ್ದರು. ನಾನು ಕಾಂಗ್ರೆಸ್ಗೆ ಮತ ಹಾಕಿದ್ದೇನೆ. ನಾನು ಈ ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಮಂತ್ರಿಯಾಗಿದ್ದೆ ಎಂದು ಕೋಲಾರದ ಜೆಡಿಎಸ್ ರೆಬಲ್ ಶಾಸಕ ಶ್ರೀನಿವಾಸ್ ಗೌಡ ತಿಳಿಸಿದ್ದರು.