ಮುಂಬೈ: ಸುಪ್ರೀಂ ಕೋರ್ಟ್ ನಾಳೆ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿದ ಬೆನ್ನಲ್ಲೇ, ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಈ ಕುರಿತಂತೆ ಇಂದು ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದಂತ ಅವರು, ಕಳೆದ ಎರಡೂವರೆ ವರ್ಷಗಳ ಕಾಲ ನನಗೆ ಸಹಕರಿಸಿದಂತ ಎಲ್ಲರಿಗೂ ಧನ್ಯವಾದಗಳು ಎಂಬುದಾಗಿ ಹೇಳಿದ್ದಾರೆ.
ಜೂನ್ 30 ರಂದು ಸದನದಲ್ಲಿ ಬಹುಮತ ಸಾಬೀತುಪಡಿಸುವಂತೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಸಿಎಂ ಉದ್ಧವ್ ಠಾಕ್ರೆ ಅವರಿಗೆ ನೀಡಿದ್ದ ನಿರ್ದೇಶನವನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಸಲ್ಲಿಸಿದ್ದ ಅರ್ಜಿಯ ಆದೇಶವನ್ನು ಸುಪ್ರೀಂ ಕೋರ್ಟ್ ಕಾಯ್ದಿರಿಸಿದ್ದ ತನ್ನ ತೀರ್ಪು ಪ್ರಕಟಿಸಿದೆ. ಇದೀಗ ನಾಳೆ ಸದನದಲ್ಲಿ ವಿಶ್ವಾಸಮತ ಯಾಚಿಸುವಂತೆ ಆದೇಶಿಸಿತ್ತು.
ಉದ್ಧವ್ ಠಾಕ್ರೆ ನೇತೃತ್ವದ ಸಮ್ಮಿಶ್ರ ಸರ್ಕಾರದ ಅಳಿವು ಉಳಿವಿನ ಬಿಕ್ಕಟ್ಟಿಗೆ ಕಾರಣವಾದ ಶಿವಸೇನೆ ನಾಯಕ ಏಕನಾಥ್ ಶಿಂಧೆ ಅವರ ಬಂಡಾಯದ ನಂತರ ಮಹಾರಾಷ್ಟ್ರದ ರಾಜಕೀಯದಲ್ಲಿ ಸಿಲುಕಿರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಸದನದ ಏಕೈಕ ಮಾರ್ಗವೆಂದರೆ ಸದನದ ಏಕೈಕ ಮಾರ್ಗ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿತ್ತು.
ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಗುರುವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸುವಂತೆ ಮುಖ್ಯಮಂತ್ರಿಗೆ ಸೂಚಿಸಿದ ಆದೇಶವನ್ನು ಪ್ರಶ್ನಿಸಿ ಮಹಾರಾಷ್ಟ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ವಾದ-ಪ್ರತಿವಾದ ಆಲಿಸಿತ್ತು. ಎಲ್ಲಾ ಕಡೆಯವರು ತಮ್ಮ ವಾದವನ್ನು ಮುಗಿಸಿದ ನಂತರ ತನ್ನ ತೀರ್ಪನ್ನು ಕಾಯ್ದಿರಿಸಿತ್ತು.
ಶಿವಸೇನೆಯ ಮುಖ್ಯ ಸಚೇತಕ ಸುನಿಲ್ ಪ್ರಭು ಅವರ ಪರವಾಗಿ ವಾದಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮುಂದೆ ತುರ್ತು ವಿಚಾರಣೆ ನಡೆಸುವಂತೆ ಕೋರಿದ ನಂತರ ಈ ವಿಷಯವನ್ನು ವಿಚಾರಣೆಗೆ ತೆಗೆದುಕೊಳ್ಳಲಾಯಿತು. ಎರಡು ಕಡೆಯ ವಾದವನ್ನು ಆಲಿಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ನಾಳೆ ಬೆಳಿಗ್ಗೆ 11 ಗಂಟೆಗೆ ಮಹಾರಾಷ್ಟ್ರ ರಾಜ್ಯಪಾಲರ ಸೂಚನೆಯಂತೆ ವಿಶ್ವಾಸಮತ ಯಾಚನೆಗೆ ಸೂಚಿಸಿತ್ತು. ಈ ಬೆನ್ನಲ್ಲೇ ಸಿಎಂ ಸ್ಥಾನಕ್ಕೆ ಉದ್ಧವ್ ಠಾಕ್ರೆ ರಾಜೀನಾಮೆ ಘೋಷಿಸಿದ್ದಾರೆ.
ನಾಳೆ ಬಂಡಾಯ ನಾಯಕ ಏಕನಾಥ್ ಶಿಂಧೆ ವಿಶ್ವಾಸಮತ ಯಾಚಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಬಿಜೆಪಿಯ ಸಹಕಾರದೊಂದಿಗೆ ಸರಕಾರ ರಚನೆಯಾಗಲಿದ್ದು, ಮುಖ್ಯಮಂತ್ರಿ ಸ್ಥಾನ ಬಿಜೆಪಿಗೆ. ಉಪಮುಖ್ಯಮಂತ್ರಿ ಸ್ಥಾನ ಏಕನಾಥ್ ಸಿಂದೆಗೆ ಸಿಗಲಿದೆ ಎಂದು ಮೂಲಗಳು ತಿಳಿಸಿವೆ.