ಎಸಿಬಿಗಿಲ್ಲ ಪೊಲೀಸ್ ಠಾಣೆ ಸ್ಥಾನಮಾನ; ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾಯಿಸಲು ಹೈಕೋರ್ಟ್ ಆದೇಶ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ. ಎಸಿಬಿಗೆ ನೀಡಲಾಗಿದ್ದ ಪೊಲೀಸ್ ಠಾಣೆ ಸ್ಥಾನಮಾನವನ್ನು ಮರಳಿ ಲೋಕಾಯುಕ್ತ ಸಂಸ್ಥೆಗೆ ನೀಡಬೇಕೆಂದು ಆದೇಶ ಹೊರಡಿಸಲಾಗಿದೆ.

ಲೋಕಾಯುಕ್ತ ಪೊಲೀಸ್ ಠಾಣೆ ಸ್ಥಾನಮಾನ ರದ್ದುಪಡಿಸಿದ ವಿಚಾರಕ್ಕೆ ಸಂಬಂಧಿಸಿ, ಎಸಿಬಿ ರಚನೆ ಪ್ರಶ್ನಿಸಿದ್ದ ಸಾರ್ವಜನಿಕ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಬಿ.ವೀರಪ್ಪ, ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾರವರಿದ್ದ ನ್ಯಾಯಪೀಠ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರಚನೆ ಆದೇಶ ರದ್ದುಪಡಿಸಿದೆ.

ಎಸಿಬಿಯ ರಚನೆ-ಕಾರ್ಯವ್ಯಾಪ್ತಿಗೆ ಸಂಬಂಧಿಸಿದ ಸಂವಿಧಾನವನ್ನು ಪ್ರಶ್ನಿಸಿ ಬೆಂಗಳೂರಿನ ವಕೀಲ ಚಿದಾನಂದ ಅರಸ್, ವಕೀಲರ ಸಂಘ ಮತ್ತು ಸಮಾಜ ಪರಿವರ್ತನಾ ಸಮುದಾಯ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟಿಗೆ ಸಲ್ಲಿಸಿದ್ದರು.

ಇದೇ ವೇಳೆ, ಎಸಿಬಿ ತನ್ನ ವ್ಯಾಪ್ತಿಯಲ್ಲಿರುವ ಪ್ರಕರಣಗಳು ಮತ್ತು ಅಧಿಕಾರಿಗಳನ್ನು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾಯಿಸಲು ಹೈಕೋರ್ಟ್ ನಿರ್ದೇಶನ ನೀಡಿದ್ದು, ಅವರು ಆ ಪ್ರಕರಣಗಳನ್ನು ಮುಂದೆ ಕೈಗೆತ್ತಿಕೊಳ್ಳಬೇಕು ಮತ್ತು ಭ್ರಷ್ಟಾಚಾರ ನಿರ್ಮೂಲನೆಗೆ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಲು ನಿರ್ದೇಶನ ನೀಡಿದೆ.

ಕರ್ನಾಟಕ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ಅಗತ್ಯವಿದೆ. ಮೂರು ವರ್ಷದ ಅವಧಿಗೆ ಅಧಿಕಾರಿಗಳ ನೇಮಕವಾಗಬೇಕು. ಲೋಕಾಯುಕ್ತರ ನೇಮಕ ವೇಳೆ ಅರ್ಹತೆ ಪರಿಗಣಿಸಬೇಕು. ಜಾತಿ ಆಧರಿಸಿ ಲೋಕಾಯುಕ್ತ, ಉಪಲೋಕಾಯುಕ್ತ ನೇಮಕವಾಗಬಾರದು. ಭ್ರಷ್ಟಾಚಾರ ಆರೋಪ ಹೊತ್ತವರು ಪಾರಾಗಬಾರದು. ಹೀಗಾಗಿ ಲೋಕಾಯುಕ್ತ ಪೊಲೀಸರೇ ತನಿಖೆ ಮುಂದುವರಿಸಬೇಕು ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ಭ್ರಷ್ಟಾಚಾರ ನಿಗ್ರಹ ದಳವನ್ನು ರಚಿಸಲು ಅಧಿಸೂಚನೆ ಹೊರಡಿಸಿದ್ದು ಏಕೆ? ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣಗಳ ತನಿಖೆಗೆ ಲೋಕಾಯುಕ್ತದಿಂದ ಅಧಿಕಾರವನ್ನು ಏಕೆ ಹಿಂತೆಗೆದುಕೊಂಡಿದೆ ಎಂಬುದನ್ನು ಸಮರ್ಥಿಸಲು ರಾಜ್ಯ ಸರ್ಕಾರ ವಿಫಲವಾಗಿದೆ.

Donate Janashakthi Media

Leave a Reply

Your email address will not be published. Required fields are marked *