ಬೆಂಗಳೂರು: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ವನ್ನು ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲಿ ಖಾಸಗಿ ದೂರುದಾರರೊಬ್ಬರು ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ನ್ಯಾಯಮೂರ್ತಿಗಳಾದ ಹಿಮಾ ಕೊಹ್ಲಿ ಹಾಗೂ ಸಿ.ಟಿ.ರವಿಕುಮಾರ್ ಅವರಿದ್ದ ನ್ಯಾಯಪೀಠದ ಮುಂದೆ ಅರ್ಜಿಯ ವಿಚಾರಣೆಗೆ ಬಂತು.
ಎಸಿಬಿಯನ್ನು ರದ್ದುಗೊಳಿಸಿ, ಅಲ್ಲಿರುವ ಎಲ್ಲಾ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಮಾಡಿರುವ ಕನಕರಾಜು ಎನ್ನುವವರು ವಕೀಲ ಅಶೋಕ್ ಪಾಣಿಗ್ರಾಹಿ ಅವರ ಮೂಲಕ ಖಾಸಗಿ ಅರ್ಜಿ ಸಲ್ಲಿಸಿದ್ದಾರೆ. ಶೀಘ್ರವೇ ಅರ್ಜಿಯ ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠ ಹೇಳಿದೆ.
ಕರ್ನಾಟಕ ಹೈಕೋರ್ಟ್ ಎಸಿಬಿಯನ್ನು ರದ್ದುಪಡಿಸಿ, ಅದು ನಿರ್ವಹಿಸುತ್ತಿದ್ದ ಎಲ್ಲ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ವರ್ಗಾವಣೆ ಮಾಡಿತು. ಇದರಿಂದ ಪ್ರಕರಣದ ತನಿಖೆಗೆ ತೊಂದರೆಯಾಗುತ್ತದೆ ಎನ್ನುವುದು ಅರ್ಜಿದಾರರ ಆಕ್ಷೇಪವಾಗಿದೆ. ‘ಹೈಕೋರ್ಟ್ ತೀರ್ಪಿನಿಂದಾಗಿ ಭ್ರಷ್ಟಾಚಾರ ತಡೆ ಕಾಯ್ದೆ ಅನ್ವಯ ದಾಖಲಾಗಿರುವ ವಿವಿಧ ಪ್ರಕರಣಗಳ ತನಿಖೆಗೆ ಧಕ್ಕೆಯುಂಟಾಗಬಹುದು’ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.
ಆರಂಭದಲ್ಲಿ ರಾಜ್ಯ ಸರ್ಕಾರವೇ ಎಸಿಬಿ ರದ್ದು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ ಎಂದು ವರದಿಯಾಗಿತ್ತು. ಆದರೆ ಈ ವರದಿಯನ್ನು ತಳ್ಳಿಹಾಕಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಖಾಸಗಿ ಮೇಲ್ಮನವಿ ಅರ್ಜಿ ದಾಖಲಾಗಿದೆ. ಈ ವಿಚಾರದಲ್ಲಿ ಸರ್ಕಾರದ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ. ಎಸಿಬಿ ರದ್ದು ಮಾಡುವ ನಮ್ಮ ನಿರ್ಧಾರಕ್ಕೆ ಬದ್ಧರಾಗಿದ್ದೇವೆ’ʼ ಎಂದು ಹೇಳಿದ್ದಾರೆ.
ಮಹತ್ವದ ಬೆಳವಣಿಗೆಯಲ್ಲಿ ಈ ಹಿಂದಿನ ಸರ್ಕಾರ 2016ರಲ್ಲಿ ರಚನೆ ಮಾಡಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು ಕಳೆದ ಆಗಸ್ಟ್ 11ರಂದು ಕರ್ನಾಟಕ ಹೈಕೋರ್ಟ್ ಭ್ರಷ್ಟಾಚಾರ ನಿಗ್ರಹ ದಳದ ರಚನೆಯನ್ನೇ ರದ್ದುಪಡಿಸಿತ್ತು.
ಎಸಿಬಿ ಈವರೆಗೆ ಯಾವುದೇ ಸಚಿವರು, ಸಂಸದರು, ವಿಧಾನ ಪರಿಷತ್ ಸದಸ್ಯರು ಅಥವಾ ಶಾಸಕರ ವಿರುದ್ಧ ಪ್ರಕರಣ ದಾಖಲಿಸಿಲ್ಲ. ಕೆಲವೇ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ದಾಳಿಗಳನ್ನು ಮಾಡಿದೆ ಎಂದು ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಈ ತೀರ್ಪು ಬರುವ ಕೆಲ ದಿನಗಳು ಮೊದಲಷ್ಟೇ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಎಸಿಬಿ ಕಾರ್ಯನಿರ್ವಹಣೆಯ ಬಗ್ಗೆ ಬಹಿರಂಗವಾಗಿ ಆಕ್ಷೇಪ ವ್ಯಕ್ತಪಡಿಸಿದ್ದನ್ನು ಸ್ಮರಿಸಬಹುದು.