ಚಿತ್ರದುರ್ಗ: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮುರುಘಾ ಸ್ವಾಮೀಜಿಯನ್ನು ಬಂಧಿಸಲಾಗಿದೆ. ಗುರುವಾರ ತಡರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ರಾತ್ರಿ 10 ಗಂಟೆಗೆ ಮುರುಘಾ ಸ್ವಾಮೀಜಿಯನ್ನು ವಶಕ್ಕೆ ಪಡೆದುಕೊಂಡ ಪೊಲೀಸರು, ಮಧ್ಯರಾತ್ರಿ 2 ಗಂಟೆಗೆ 1ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ನ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಿದರು. ಚಿತ್ರದುರ್ಗದ ಜಿಲ್ಲಾ ಕಾರಾಗೃಹಕ್ಕೆ ಮುರುಘಾ ಸ್ವಾಮೀಜಿಯನ್ನು ರಾತ್ರಿ 3 ಗಂಟೆಯ ಸುಮಾರಿಗೆ ಕರೆತರಲಾಯಿತು.
ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ವಿಚಾರಣೆಗಾಗಿ ಮುರುಘಾ ಶರಣರನ್ನು 10 ದಿನಗಳ ಅವಧಿಗೆ ತಮ್ಮ ವಶಕ್ಕೆ ನೀಡಬೇಕು ಎಂದು ಕೋರಿ ಪೊಲೀಸರು ನ್ಯಾಯಾಲಯಕ್ಕೆ ಶುಕ್ರವಾರ ಮನವಿ ಮಾಡುವ ಸಾಧ್ಯತೆಯಿದೆ.
ಎಫ್ಐಆರ್ ದಾಖಲಾದ 6 ದಿನಗಳ ಬಳಿಕ ಸ್ವಾಮೀಜಿಯನ್ನು ಪೊಲೀಸರು ಬಂಧಿಸಿದರು. ಬಾಲಕಿಯರು ಸೆ 1ರಂದು ನೀಡಿದ ಹೇಳಿಕೆ ಹಾಗೂ ಇತರ ಸಾಕ್ಷಿಗಳು ಬಿಗಿಯಾಗಿದ್ದ ಕಾರಣ ಸ್ವಾಮೀಜಿ ಬಂಧನದಿಂದ ಪಾರಾಗಲು ಸಾಧ್ಯವಾಗಲಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಇದನ್ನೂ ಓದಿ : ಲೈಂಗಿಕ ಕಿರುಕುಳ ಆರೋಪ : ಕೊನೆಗೂ ಲಾಕ್ ಆದ ಮುರಘಾ ಸ್ವಾಮಿ
ಘಟನೆಯ ಹಿನ್ನಲೆ : ಅಕ್ಕಮಹಾದೇವಿ ವಸತಿ ನಿಲಯದ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ಮುರುಘಾ ಮಠದ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಶ್ರೀಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಶುಕ್ರವಾರದಂದು ನಡೆಯಲಿದೆ. ಲೈಂಗಿಕ ಕಿರುಕುಳದ ಆರೋಪ ಹೊತ್ತಿರುವ ಚಿತ್ರದುರ್ಗದ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಲಾಗಿದೆ.
ಇದಲ್ಲದೇ ಸುಮೋಟೋ ಕೇಸ್ ದಾಖಲಿಸಿರುವ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ)ಗೆ ನೋಟಿಸ್ ನೀಡಿದೆ. ಪ್ರಕರಣದ ಬಗ್ಗೆ ಏಳು ದಿನಗಳಲ್ಲಿ ವರದಿ ನೀಡುವಂತೆ ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅದಲ್ಲದೇ ಪ್ರಕರಣ ಸಂಬಂಧ ಪೋಲೀಸರು ಕೈಗೊಂಡ ಕ್ರಮದ ಬಗ್ಗೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾಹಿತಿ ಕೇಳಿತ್ತು.
ಮುರುಘಾ ಸ್ವಾಮೀಜಿ ಬಂಧನ ಹಿನ್ನೆಲೆಯಲ್ಲಿ ಮುರುಘಾಮಠ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಬಿಗಿ ಭದ್ರತೆ ಕಂಡುಬಂದಿದೆ.