ಬಿಎಸ್‌ವೈ ಮೇಲಿನ ಆರೋಪಗಳ ಸತ್ಯಾಂಶ ಹೊರಬರಲಿ: ಸಂತೋಷ್‌ ಹೆಗ್ಡೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ವರಿಷ್ಠ ಬಿ.ಎಸ್. ಯಡಿಯೂರಪ್ಪ ತಮ್ಮ ಅಧಿಕಾರವಧಿಯಲ್ಲಿ ಗುತ್ತಿಗೆ ನೀಡುವ ವಿಚಾರದಲ್ಲಿ ಲಂಚ ಪಡೆದ ಆರೋಪ ಪ್ರಕರಣದ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಇದು ಒಳ್ಳೆಯ ವಿಚಾರ. ಹೊಸ ವಿಚಾರಣೆ ನಡೆಯಬೇಕು, ಸತ್ಯಾಂಶ ಹೊರ ಬರಬೇಕು. ಎಲ್ಲರೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಇಂತಹ ಸಂದರ್ಭ ಬರುವುದಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ. ಲೋಕಾಯುಕ್ತ ಜವಾಬ್ದಾರಿಯಿಂದ ಕೆಲಸ ಮಾಡಲಿ ಎಂದರು.

ಬಿ ಎಸ್‌ ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಕುಟುಂಬ ಸದಸ್ಯರು ಅಧಿಕಾರ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣ ಕುರಿತು ಎಫ್ ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತು.

ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಈ ಬಗ್ಗೆ ದೂರು ಸಲ್ಲಿಸಿದ್ದರು, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಹಿಂದೆ ಪ್ರಕರಣವನ್ನು ಅಂತ್ಯಗೊಳಿಸಿ ತೀರ್ಪು ನೀಡಿತ್ತು. ಟಿ.ಜೆ. ಅಬ್ರಹಾಂ ಅವರು ಉಚ್ಚ ನ್ಯಾಯಲಯಕ್ಕೆ ಮೋರೆ ಹೋಗಿದ್ದರು, ಇತ್ತೀಚಿಗೆ ನ್ಯಾಯಾಲಯವು ಮರು ವಿಚಾರಣೆ ಕೈಗೊಳ್ಳಬೇಕೆಂದು ಆಗ್ರಹಿಸಿತು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗುತ್ತಿಗೆ ನೀಡುವುದಕ್ಕೆ ಪ್ರತಿಯಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಮತ್ತು ಇತರ ಶೆಲ್ ಕಂಪನಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪವಿದೆ.

ಯಡಿಯೂರಪ್ಪ ಪರವಾಗಿ ಐಎಎಸ್ ಅಧಿಕಾರಿ ಜಿ.ಸಿ.ಪ್ರಕಾಶ್ 12 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಪ್ರಕಾಶ್ ವಸೂಲಿ ಮಾಡಿ ಮಗನ ಮೂಲಕ ಯಡಿಯೂರಪ್ಪಗೆ ಪಾವತಿಸಿದ್ದಾರೆ ಎನ್ನಲಾಗಿದೆ. ಯಡಿಯೂರಪ್ಪ, ವಿಜಯೇಂದ್ರ, ಶಶಿಧರ್ ಮರಡಿ ಮತ್ತು ಸಂಜಯ್ ಶ್ರೀಗಳು ಶೆಲ್ ಕಂಪನಿಗಳನ್ನು ಬಳಸಿಕೊಂಡು ಅಕ್ರಮ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಅರ್ಜಿದಾರರು ದೂರಿನಲ್ಲಿ ಆರೋಪಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *