ದೆಹಲಿ: ಪ್ರಸಕ್ತ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸುತ್ತಿರುವ ಉದಯ್ ಉಮೇಶ್ ಲಲಿತ್ ಅವರ ಅಧಿಕಾರವಧಿಯು ನವೆಂಬರ್ 8ರಂದು ಕೊನೆಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ತಮ್ಮ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.
ಉನ್ನತ ನ್ಯಾಯಾಲಯದ ನ್ಯಾಯಾಧೀಶರು ನಡೆಸಿದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ ಈ ಶಿಫಾರಸು ಮಾಡಲಾಗಿದೆ. ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ನವೆಂಬರ್ 9ರಂದು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದು, ಎರಡು ವರ್ಷಗಳು ಕಾರ್ಯನಿರ್ವಹಿಸಲಿದ್ದಾರೆ.
ಮೇ 13, 2016ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆದ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಫೆಬ್ರವರಿ 22, 1978 ರಿಂದ ಜುಲೈ 11, 1985 ರವರೆಗೆ ನ್ಯಾಯಾಂಗದ ಮುಖ್ಯಸ್ಥರಾಗಿದ್ದ ಸಿಜೆಐ ವೈ ವಿ ಚಂದ್ರಚೂಡ್ ಅವರ ಪುತ್ರ.
ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಮ್ಮುಖದಲ್ಲಿ ಹಾಲಿ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರು, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರನ್ನು ಮುಂದಿನ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮಾಡುವ ಬಗ್ಗೆ ಶಿಫಾರಸ್ಸು ಮಾಡಿದರು.
ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಲ್ಲಿ 2 ವರ್ಷಗಳ ಕಾಲ ಕಾರ್ಯನಿರ್ವಹಿಸಲಿದ್ದಾರೆ. ನವೆಂಬರ್ 10, 2024ಕ್ಕೆ ಅವರ ಅಧಿಕಾರವಧಿ ಮುಗಿಯಲಿದೆ. ಅಂದರೆ ಸುಪ್ರೀಂ ಕೋರ್ಟ್ ನ್ಯಾಯಾಧೀಶರು 65ನೇ ವಯಸ್ಸಿನಲ್ಲಿ ನಿವೃತ್ತರಾಗುತ್ತಾರೆ.
48ನೇ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯನಿರ್ವಹಿಸಿದ್ದ ಎನ್.ವಿ.ರಮಣ ಅವರು ಆಗಸ್ಟ್ 27ರಂದು ನಿವೃತ್ತಿ ಹೊಂದಿದ ಬಳಿಕ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು. ಲಲಿತ್ ಅಧಿಕಾರ ವಹಿಸಿಕೊಂಡಿದ್ದರು. ಲಲಿತ್ ಅವರ ನಂತರ ಸುಪ್ರೀಂ ಕೋರ್ಟ್ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಅಲಂಕರಿಸಿದ ಯು.ಯು. ಲಲಿತ್ ಅವರು 74 ದಿನಗಳ ಅಲ್ಪಾವಧಿಯ ನಂತರ ನವೆಂಬರ್ 8ರಂದು ಅಧಿಕಾರದಿಂದ ನಿವೃತ್ತಿ ಹೊಂದಲಿದ್ದಾರೆ. ಒಂದು ದಿನದ ನಂತರ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.