ಮೊರಾರ್ಜಿ ವಸತಿ ಶಾಲೆಯಲ್ಲಿ ಆರ್‌ಎಸ್ಎಸ್‌ ಚಟುವಟಿಕೆ ಕಡಿವಾಣಕ್ಕೆ ಆಗ್ರಹಿಸಿ ದಲಿತ ಸಂಘಟನೆ ಪ್ರತಿಭಟನೆ

ಬೀದರ್‌: ಸರ್ಕಾರಿ ಶಾಲೆಗಳು, ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಪಠ್ಯೇತ್ತರ ಚಟುವಟಿಕೆ ಎಂಬಂತೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್‌)ದ  ಚಟುವಟಿಕೆ ನಡೆಸಲು ಅವಕಾಶ ನೀಡಬಾರದೆಂದು ಆಗ್ರಹಿಸಿ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಬೀದರ್ ತಾಲ್ಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರ್‌ಎಸ್‍ಎಸ್ ಶಿಬಿರ ಆಯೋಜಿಸಿ, ಪಠ್ಯೇತರ ಚಟುವಟಿಕೆಯತ್ತ ಮಕ್ಕಳನ್ನು ಸೆಳೆಯಲು ಪ್ರಯತ್ನಿಸಲಾಗುತ್ತಿದೆ. ಬೇರೆ ಬೇರೆ ಕಡೆ ಶಿಬಿರ ನಡೆಸುತ್ತಿದ್ದ ಆರ್‌ಎಸ್‍ಎಸ್‍ನವರು ಇದೀಗ ಸರ್ಕಾರಿ ಶಾಲೆ ಹಾಗೂ ವಸತಿ ಶಾಲೆಗಳಿಗೂ ಲಗ್ಗೆ ಇಡುತ್ತಿದ್ದಾರೆ. ವಸತಿ ಶಾಲೆಯಲ್ಲಿ ಶಿಬಿರಕ್ಕೆ ಅನುಮತಿ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಸರ್ಕಾರಿ ಸ್ಥಳ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಬಿರ ನಡೆಸಲು ಅವಕಾಶ ಕೊಡಬಾರದು ಎಂದು ಒತ್ತಾಯಿಸಿದರು.

ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪೂರಕವಾಗಿರುವಂತ ಕಾರ್ಯಗಳನ್ನು ಮಾಡಬೇಕಿದೆ. ಆದರೆ, ಆರ್‌ಎಸ್‌ಎಸ್‌ ನಂತ ಸಂಸ್ಥೆಗಳು ವಿದ್ಯಾರ್ಥಿಗಳ ಕೈಗೆ ಕೋಲು ಕೊಟ್ಟು ಶಿಸ್ತಿನ ಹೆಸರಿನಲ್ಲಿ ಹೊಡೆದಾಡುವ ಸಂಸ್ಕೃತಿ ಬೆಳೆಸಲು ಪ್ರಯತ್ನಿಸುತ್ತಿದೆ. ಶಾಲೆಗಳಲ್ಲಿ ಧರ್ಮ ಹಾಗೂ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತುವ ಕಾರ್ಯಕ್ಕೆ ಎಂದಿಗೂ ಅವಕಾಶ ಮಾಡಿಕೊಡುವುದಿಲ್ಲ. ಜಿಲ್ಲಾ ಆಡಳಿತ ಕಣ್ಣು ಮುಚ್ಚಿಕುಳಿತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಲೆಯಲ್ಲಿ ಆರ್‌ಎಸ್‌ಎಸ್‌ ಶಿಬಿರಕ್ಕೆ ಅವಕಾಶ ಮಾಡಿಕೊಟ್ಟಿರುವ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು.

Donate Janashakthi Media

Leave a Reply

Your email address will not be published. Required fields are marked *