ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ: ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ – ನಟ ಕಿಶೋರ್

Please follow and like us:

ಬೆಂಗಳೂರು : ‘ಕಾಂತಾರ’ ಸಿನಿಮಾ ಎಷ್ಟು ಮೆಚ್ಚುಗೆಯನ್ನು ಪಡೆದಿದೆಯೋ, ಅಷ್ಟೇ ಚರ್ಚೆಯ ವಿಷಯವಾಗಿದೆ. ನಟ ಚೇತನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದು ಹೇಳಿದ್ದೇ ತಡ, ಪರ ವಿರೋಧ ವಾದಗಳು ಹುಟ್ಟಿಕೊಂಡವು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ನಡೆಯುತ್ತಿದ್ದು, ‘ಕಾಂತಾರ’ ಸಿನಿಮಾದಲ್ಲಿ ನಟಿಸಿರುವ ನಟ ಕಿಶೋರ್ ಅವರು ಈ ಬಗ್ಗೆ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ನಟ ಕಿಶೋರ್ ಅವರು ಫೆಸ್ಬುಕ್ ನಲ್ಲಿ ಪೋಸ್ಟ್ ಹೀಗಿದೆ..

ಕಾಂತಾರ ಮತ್ತು ಧರ್ಮ

ನಮ್ಮ ಜನಪದೀಯರ ಕೋಲದ ಭೂತಕ್ಕೂ, ನೇಮದ ದೈವಕ್ಕೂ ಧರ್ಮದ ಬಣ್ಣ ಬಳಿಯುತ್ತಿರುವವರಲ್ಲಿ ಕಳಕಳಿಯ ಮನವಿ . ಅದೇ ದೈವದ ವೇಷ ಧರಿಸುವವನನ್ನು ಅಸ್ಪೃಷ್ಯನೆಂದು ಮನೆಯೊಳಗೆ ಸೇರಿಸದ, ಮನೆಯೊಳಗೆ ಬಂದರೆ ಶುದ್ಧಿ ಮಾಡಿಸುವ ಅಸ್ಪೃಷ್ಯತೆಯ ಆಚರಣೆಯಲ್ಲಿ ನಮಗೆ ಅಧರ್ಮದ ಬಣ್ಣ ಕಾಣುತ್ತಿಲ್ಲವೇಕೆ? ಜನರಿಗಾಗಿ ಬಾಂಬು ಸಿಡಿಸಿ ಜೀವತೆತ್ತ ಗರ್ನಾಲು ಸಾಹೇಬನ ಧರ್ಮ ಕಾಣುತ್ತಿಲ್ಲವೇಕೆ?

ಎಲ್ಲ ಒಳ್ಳೆಯ ಸಿನಿಮಾಗಳಂತೆ “ಕಾಂತಾರ” ಜಾತಿ, ಧರ್ಮ, ಭಾಷೆಗಳನ್ನು ಮೀರಿ ದೇಶದ ಜನಗಳನ್ನು ಬೆಸೆಯುತ್ತಿದೆ. ಮನರಂಜನೆಯ ಮೂಲಕವೇ ಹಲವು ಸಾಮಾಜಿಕ ಸಮಸ್ಯೆಗಳ ಬಗ್ಗೆ ಜನರನ್ನು ಜಾಗೃತಗೊಳಿಸುತ್ತಿದೆ. ಅಂಥ ಸಿನಿಮಾವನ್ನು ಬಳಸಿ ಮೂಢನಂಬಿಕೆಯನ್ನೊ ಧರ್ಮಾಂಧತೆಯನ್ನೊ ಪ್ರಚೋದಿಸಿ ಜನಗಳನ್ನು ವಿಭಜಿಸುವ ಮಟ್ಟಕ್ಕೆ ಇಳಿದು ಬಿಟ್ಟರೆ ಇಂಥಾ ದೊಡ್ಡ ಗೆಲುವೂ ಮನುಷ್ಯತ್ವದ ದೊಡ್ಡ ಸೋಲಾಗಿ ಹೋದೀತು.

ಕೇವಲ ಓಟಿಗಾಗಿ ಪಟೇಲ್ ಗಾಂಧಿ ಬೋಸ್, ನೆಹರೂ ಸಹಿತ ಕೋಟಿ ಕೋಟಿ ಸ್ವತಂತ್ರ್ಯ ಹೋರಾಟಗಾರರನ್ನೂ ಬಳಸುವ, ಬೈಯ್ಯುವ.. ರಾಷ್ಟ್ರ ಗೀತೆ, ಧ್ವಜ,ಲಾಂಛನ, ಕವಿಗಳನ್ನೂ ಬಿಡದೆ ಕಬಳಿಸಿದ ದ್ವೇಷದ ದಲ್ಲಾಳಿಗಳು ಸಿನಿಮಾಗಳನ್ನೂ ಕಬಳಿಸುವ ಮುನ್ನಒಂದು ಕ್ಷಣ ಯೋಚಿಸಿ. ನಮ್ಮ ಸಿನಿಮಾಗಳು ನಮ್ಮ ಹೆಮ್ಮೆ. ಅವುಗಳನ್ನು ಧರ್ಮಾಂಧ ರಾಜಕಾರಣದ ದಾಳಗಳಾಗುವುದು ಬೇಡ ಎಂದು ಫೆಸ್ಬುಕ್ ನಲ್ಲಿ ಬರೆದುಕೊಂಡಿದ್ದಾರೆ.

Please follow and like us:
Donate Janashakthi Media

Leave a Reply

Your email address will not be published. Required fields are marked *