ಬೆಳಗಾವಿ: ಹಿಂದೂ ಪದ ಕುರಿತ ನೀಡಿದ ಹೇಳಿಕೆ ಕುರಿತು ವಿಷಾಧ ವ್ಯಕ್ತಪಡಿಸಿರುವ ಶಾಸಕ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದಿದ್ದಾರೆ. ಅಲ್ಲದೇ ತನಿಖಾ ತಂಡವನ್ನು ರಚಿಸಿ ಸತ್ಯವನ್ನು ಬಹಿರಂಗಪಡಿಸಬೇಕೆಂದು ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.
ನವೆಂಬರ್ 06ರಂದು ಮಾನವ ಬಂಧುತ್ವ ವೇದಿಕೆ ವತಿಯಿಂದ ನಿಪ್ಪಾಣಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಹಿಂದೂ ಪದದ ಅರ್ಥ ಅಶ್ಲೀಲವಾಗಿದೆ ಮತ್ತು ಅದು ಪರ್ಶಿಯನ್ ಭಾಷೆಯದ್ದು ಎಂದು ಹೇಳಿದ್ದರು. ಇದು ರಾಜ್ಯ ಮಾತ್ರವಲ್ಲದೆ, ರಾಷ್ಟ್ರಮಟ್ಟದಲ್ಲಿ ಸದ್ದು ಭಾರೀ ಚರ್ಚೆಯ ವಿಚಾರವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸಹ ಗಂಭೀರವಾಗಿ ಪರಿಗಣಿಸಿ ಎಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ ಸತೀಶ್ ಜಾರಕಿಹೊಳಿ ತಮ್ಮ ಹೇಳಿಕೆಯನ್ನು ಹಿಂಪಡೆದುಕೊಂಡಿದ್ದು, ತಂಡ ರಚನೆ ಮಾಡಿ ತನಿಖೆ ಮಾಡಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಿಳಿಸಿದ್ದಾರೆ.
ಮುಖ್ಯಮಂತ್ರಿಗೆ ಬರೆದಿರುವ ಪತ್ರದಲ್ಲಿ, ‘ಹಿಂದೂ ಪದದ ಕುರಿತು ನಾನು ನೀಡಿದ ಹೇಳಿಕೆಯನ್ನು ತಿರುಚಿ ಅಪಪ್ರಚಾರ ಮಾಡಲಾಗುತ್ತಿದೆ. ಇದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಆಗಬಾರದು ಎಂದು ಹೇಳಿಕೆ ಹಿಂಪಡೆದಿದ್ದೇನೆ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ’ ಎಂದು ತಿಳಿಸಿದ್ದಾರೆ.
ಅಲ್ಲದೇ, ‘ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನನ್ನನ್ನು ಹಿಂದೂ ವಿರೋಧಿ ಎಂದು ಬಿಂಬಿಸಲು ಹೊರಟಿವೆ. ನನ್ನ ತೇಜೋವಧೆ ಮಾಡುವ ವ್ಯವಸ್ಥಿತಿ ಪಿತೂರಿ ನಡೆದಿದೆ. ಈ ಎಲ್ಲ ಅಂಶಗಳ ಕುರಿತು ಪರಿಶೀಲಿಸಬೇಕು. ಜೊತೆಗೆ ನನಗೆ ತೇಜೋವಧೆ ಹಾಗೂ ಹಾನಿವುಂಟು ಮಾಡುವ ವ್ಯವಸ್ಥಿತ ಪಿತೂರಿ ನಡೆದಿರುತ್ತದೆ. ಮೇಲಿನ ಎಲ್ಲ ಅಂಶಗಳನ್ನು ಪರಿಶೀಲಿಸಲು ಮತ್ತು ನೈಜ ಸ್ಥಿತಿಯನ್ನು ವಿವರಿಸದೇ ಈ ಅವಾಂತರ ಸೃಷ್ಟಿಸಿದವರ ಮೇಲೆ ತನಿಖೆ ಮಾಡುವಂತೆ ವಿನಂತಿಸಿಕೊಳ್ಳುತ್ತೇನೆʼ ಎಂದು ತಿಳಿಸಿದ್ದಾರೆ.
‘ಹಿಂದೂ ಶಬ್ದ ಪರ್ಷಿಯನ್ ಭಾಷೆಯಿಂದ ಬಂದಿದೆ. ಇದು ಭಾರತಕ್ಕೆ ಹೇಗೆ ಬಂತು? ಹಲವಾರು ಲೇಖನಗಳಲ್ಲಿ ಹಿಂದೂ ಪದದ ಬಗ್ಗೆ ಕೆಟ್ಟ ಅರ್ಥಗಳಿವೆ ಎಂಬುದಾಗಿ ಬರೆದಿದ್ದಾರೆ ಎಂದು ನಾನು ಹೇಳಿಕೆ ನೀಡಿದ್ದೇನೆ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆ ಆಗಬೇಕಾದುದು ಅವಶ್ಯ ಎಂದು ಹೇಳಿದ್ದೇನೆ. ವಿಕಿಪೀಡಿಯಾ, ಪುಸ್ತಕಗಳು, ಶಬ್ದಕೋಶಗಳು ಹಾಗೂ ಇತಿಹಾಸಕಾರರ ಬರಹದ ಉಲ್ಲೇಖದ ಮೇಲೆ ಈ ನನ್ನ ಭಾಷಣ ಆಧರಿತವಾಗಿದೆ’ ಎಂದು ವಿವರಿಸಿದ್ದಾರೆ.
ಮತ್ತೊಮ್ಮೆ ತಮ್ಮಲ್ಲಿ ಕೇಳಿಕೊಳ್ಳುವದೇನೆಂದರೆ, ಈ ಕುರಿತು ತಕ್ಷಣ ತನಿಖಾ ಸಮಿತಿ ರಚಿಸಬೇಕು ಎಂದು ವಿನಂತಿಸಿಕೊಳ್ಳುತ್ತೇನೆ. ಹಾಗೂ ನಿಪ್ಪಾಣಿಯಲ್ಲಿ ಜರುಗಿದ ಮಾನವ ಬಂಧುತ್ವ ವೇದಿಕೆಯ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ, ಕಾರ್ಯಕ್ರಮದಲ್ಲಿ ನಾನು ಮಾತನಾಡಿದ ಆ ಒಂದು ಮಾತು ವಿವಾದಕ್ಕಿಡಾಗಿದೆ. ಈ ಹೇಳಿಕೆಯಿಂದ ಯಾರಿಗಾದರೂ ಮನಸ್ಸಿಗೆ ನೋವಾಗಿದ್ದಲ್ಲಿ ವಿಷಾದಿಸುತ್ತೇನೆ ಎಂದು ಬರೆದಿದ್ದಾರೆ.
ನವೆಂಬರ್ 08ರಂದು ಸತೀಶ ಜಾರಕಿಹೊಳಿ ‘ಹಿಂದೂ ಎಂಬ ಪದಕ್ಕೆ ಅಶ್ಲೀಲ ಅರ್ಥಗಳಿವೆ. ಈ ಬಗ್ಗೆ ಶಬ್ದಕೋಶ ಹಾಗೂ ವಿಕಿಪೀಡಿಯಾದಲ್ಲಿ ದಾಖಲೆಗಳಿವೆ. ನಾನು ಕ್ಷಮೆ ಕೇಳುವ ಪ್ರಮೇಯವೇ ಇಲ್ಲ. ನನ್ನದು ತಪ್ಪೆಂದು ಸಾಬೀತು ಮಾಡಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಸವಾಲು ಹಾಕಿದ್ದರು.