ಬೆಂಗಳೂರು: ವಿದೇಶಗಳಲ್ಲಿ ಕೋವಿಡ್ ಸಾಂಕ್ರಾಮಿಕತೆ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೆ ತರಲಾಗಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಮೇಲೆ ಸರ್ಕಾರ ನಿಗಾ ಇಡಲಿದೆ ಎಂದು ರಾಜ್ಯ ಆರೋಗ್ಯ ಸಚಿವ ಕೆ ಸುಧಾಕರ್ ಬುಧವಾರ ಹೇಳಿದ್ದರು.
ಇದನ್ನು ಓದಿ: ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ, ಪರಿಸ್ಥಿತಿ ನೋಡಿ ನಿರ್ಧಾರ: ಕೆ.ಸುಧಾಕರ್
ದೇಶಾದ್ಯಂತ ಕೋವಿಡ್ ಭೀತಿ ಆವರಿಸಿದೆ. ಈ ನಡುವೆ ಹೊಸವರ್ಷ ಆಚರಣೆ ಸಮೀಪಿಸುತ್ತಿದೆ, ಹೀಗಾಗಿ ಪೊಲೀಸ್ ಇಲಾಖೆಯೂ ಕಠಿಣ ಕ್ರಮಗಳನ್ನು ಅನುಸರಿಸಬೇಕೇ ಬೇಡವೇ ಎಂಬ ಗೊಂದಲದಲ್ಲಿಯೂ ಇದೆ. ಈ ವೇಳೆ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರಿಗೆ ಕೆಲವು ಮುನ್ನೆಚ್ಚರಿಕೆ ಮಾರ್ಗಸೂಚಿ ಕ್ರಮಗಳ ಬಿಡುಗಡೆ ಮಾಡಲಾಗಿದೆ.
ಪರಿಷ್ಕೃತ ಮಾರ್ಗಸೂಚಿ ಇಂದು ಬೆಳಿಗ್ಗೆ 10 ರಿಂದ ಜಾರಿಗೊಂಡಿದೆ. ವಿಮಾನ ನಿಲ್ದಾಣಕ್ಕೆ ಬರುವ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯವಾಗಿದೆ. ಆರೋಗ್ಯ ಇಲಾಖೆಯು ಶೇ. 2ರಷ್ಟು ಪ್ರಯಾಣಿಕರ ಗಂಟಲು ದ್ರವ ಸಂಗ್ರಹ ಮಾಡಿ ಪರೀಕ್ಷೆಗೆ ಒಳಪಡಿಸಲು ಕಡ್ಡಾಯ ಮಾಡಲಾಗಿದೆ. ರೋಗ ಲಕ್ಷಣಗಳು ಕಂಡುಬರುವ ಪ್ರಯಾಣಿಕರು ತತ್ಕ್ಷಣ ಐಸೋಲೇಷನ್ ಆಗಬೇಕು. 12 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಪರೀಕ್ಷೆ ಇರುವುದಿಲ್ಲ. ರೋಗ ಗುಣ ಲಕ್ಷಣಗಳು ಇದ್ದರೆ ಮಾತ್ರ ಪರೀಕ್ಷೆಯನ್ನು ಮಾಡಲಾಗುತ್ತದೆ. ರೋಗ ಲಕ್ಷಣಗಳಿಲ್ಲದ ಪ್ರಯಾಣಿಕರು ಸ್ವಯಂ ನಿಗಾವಹಿಸಲು ಸೂಚಿಸಲಾಗಿದೆ.
ಇದನ್ನು ಓದಿ: ಮಾಸ್ಕ್ ಹಾಕಿಕೊಳ್ಳಿ, ಬೂಸ್ಟರ್ ಡೋಸ್ ತೆಗೆದುಕೊಳ್ಳಿ; ನೀತಿ ಆಯೋಗ ಸದಸ್ಯ ಡಾ.ವಿ.ಕೆ.ಪೌಲ್ ಸಲಹೆ
ಕೋವಿಡ್ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳು ಮಾಸ್ಕ್ ಧರಿಸಬೇಕು ಮತ್ತು ಬೂಸ್ಟರ್ ಡೋಸ್ ಹಾಕಿಸಿಕೊಳ್ಳಬೇಕೆಂದು ಸೂಚನೆ ನೀಡಿದೆ. ಈ ಬಗ್ಗೆ ಸುತ್ತೋಲೆಯನ್ನು ಹೊರಡಿಸಿರುವ ವಿಶ್ವವಿದ್ಯಾನಿಲಯ ಕೋವಿಡ್ -19 ಹರಡುವುದನ್ನು ತಡೆಯಲು ಮಾಸ್ಕ್ಗಳನ್ನು ಕಡ್ಡಾಯಗೊಳಿಸುವ ಆರೋಗ್ಯ ಇಲಾಖೆಯ ನಿರ್ದೇಶನವನ್ನು ಉಲ್ಲೇಖಿಸಿದೆ. ಆದರೆ, ಸಾರ್ವಜನಿಕ ಶಿಕ್ಷಣ ಇಲಾಖೆ ಇದುವರೆಗೆ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಿಂದಾಗಿ ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿ ಹೊರಡಿಸಲಾಗುವುದು ಎಂದಿದ್ದಾರೆ.
ನಾಳೆ ಕಂದಾಯ ಸಚಿವ ಆರ್. ಅಶೋಕ ಮತ್ತು ಆರೋಗ್ಯ ಸಚಿವ ಡಾ. ಸುಧಾಕರ್ ಅವರು ಕೋವಿಡ್ ನಿಯಂತ್ರಣ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಭೆ ನಡೆಸಿ, ಮಾರ್ಗಸೂಚಿಗಳನ್ನು ಪ್ರಕಟಿಸಲಿದ್ದಾರೆ ಎಂದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ
‘ಬೂಸ್ಟರ್ ಡೋಸ್ ಲಸಿಕೆ ನೀಡುವುದಕ್ಕೆ ಸಂಬಂಧಿಸಿದಂತೆ ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಶಿಬಿರ ಏರ್ಪಡಿಸಬೇಕು. ಆರೋಗ್ಯ ಪರಿಕರಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಂಡು, ಔಷಧಿಗಳು ಹಾಗೂ ವ್ಯಾಕ್ಸಿನ್ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ. ಆಸ್ಪತ್ರೆಗಳಲ್ಲಿರುವ ಆಮ್ಲಜನಕದ ಘಟಕಗಳು ತುರ್ತು ಸಂದರ್ಭದಲ್ಲಿ ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ, ಅವುಗಳನ್ನು ಪ್ರಾಯೋಗಿಕವಾಗಿ ಚಾಲನೆಯಲ್ಲಿಡಲು ತಿಳಿಸಲಾಗಿದೆ’ ಎಂದು ಹೇಳಿದರು.