ಬೆಳಗಾವಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್ ಪಕ್ಷ ನಾಳೆ(ಮಾ.20) ವಾಣಿಜ್ಯನಗರಿ ಬೆಳಗಾವಿಯಲ್ಲಿ ಯುವಕ್ರಾಂತಿ ಸಮಾವೇಶವನ್ನು ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಆಗಮಿಸಲಿದ್ದಾರೆ.
ಸಮಾವೇಶದ ಸ್ಥಳ ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ನಡೆಯಲಿದ್ದು, ಮಧ್ಯಾಹ್ನ 12.30ಕ್ಕೆ ವಿಶೇಷ ವಿಮಾನದ ಮೂಲಕ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ ಮಧ್ಯಾಹ್ನ 1 ಗಂಟೆಯಿಂದ 3.30ರ ವರೆಗೆ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಸುಮಾರು 2 ಲಕ್ಷ ಜನರು ಸೇರುವ ನಿರೀಕ್ಷೆ ಇದೆ.
ಇದನ್ನು ಓದಿ: ಕಾರ್ಯಾಚರಣೆಗೆ ಇಳಿದ ಚುನಾವಣಾ ಆಯೋಗ; ಚಿನ್ನ, ಬೆಳ್ಳಿ, ನಗದು ವಶ
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಈಗಾಗಲೇ ಕಾಂಗ್ರೆಸ್ ಪಕ್ಷವು ಮೂರು ಪ್ರಮುಖ ಭರವಸೆಗಳನ್ನು ನೀಡಿದ್ದು, ರಾಹುಲ್ ಗಾಂಧಿಯವರ ಮೂಲಕ ನಾಳೆ ನಾಲ್ಕನೇ ಭರವಸೆ ಘೋಷಣೆಯಾಗುವ ಸಾಧ್ಯತೆಗಳಿವೆ. ಯುವಕರಿಗೆ ಉದ್ಯೋಗ ಭರವಸೆ ಅಥವಾ ನಿರುದ್ಯೋಗಿಗಳಿಗೆ ಭತ್ಯೆಯಂತಹ ಘೋಷಣೆಯ ನಿರೀಕ್ಷೆ ಇದೆ.
200 ಯುನಿಟ್ ವರೆಗೆ ಉಚಿತ ವಿದ್ಯುತ್, ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಹಾಗೂ ಕುಟುಂಬದ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿಯ ಭರವಸೆ ನೀಡಿದೆ.
ಬೆಳಗಾವಿ ಜಿಲ್ಲೆಯಲ್ಲಿ 18 ವಿಧಾನ ಸಭೆ ಕ್ಷೇತ್ರಗಳಿದ್ದು ಕಳೆದ ವಿಧಾನಸಭೆ ಚುನಾವಣೆಯಲ್ಲಿ 8 ಸ್ಥಾನಗಳನ್ನು ಕಾಂಗ್ರೆಸ್ ಗೆಲುವು ಸಾಧಿಸಿದೆ. ಆದರೆ ನಂತರ ನಡೆದ ಆಪರೇಶನ್ ಕಮಲದಲ್ಲಿ ಮೂವರು ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡಿದ ಹಿನ್ನೆಲೆಯಲ್ಲಿ ಸಧ್ಯ ಕಾಂಗ್ರೆಸ್ ನಲ್ಲಿ 5 ಶಾಸಕರಿದ್ದಾರೆ.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪಕ್ಷದ ಮುಖಂಡರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್ ಸೇರಿದಂತೆ ಹಲವು ನಾಯಕರು ಪಾಲ್ಗೊಳ್ಳಲಿದ್ದಾರೆ.
ಸಮಾವೇಶ ಸ್ಥಳಕ್ಕೆ ಸತೀಶ್ ಜಾರಕಿಹೊಳಿ ಭೇಟಿ
ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಸಮಾವೇಶ ನಡೆಯಲಿರುವ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಹಾಗೂ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಾಜ್ಯದಲ್ಲಿ ರೈತ ಸಮಾವೇಶ, ಮಹಿಳಾ ಸಮಾವೇಶ ಮಾಡಲಾಗಿದ್ದು, ಈಗ ಬೆಳಗಾವಿಯಲ್ಲಿ ಯುವ ಸಮಾವೇಶ ಮಾಡಲಾಗುತ್ತಿದೆ. ಸಮಾವೇಶಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಗಮಿಸುತ್ತಿದ್ದು, ಯುವಕರಿಗೆ ಹೊಸ ಸಂದೇಶ ನೀಡಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಐಸಿಸಿ ವೀಕ್ಷಕ ವಿಶ್ವನಾನಂದ, ಯುತ್ ಕಾಂಗ್ರೆಸ್ ಅಧ್ಯಕ್ಷ ಮಹಮದ್ ನಲಪಾಡ, ಮಾಜಿ ಶಾಸಕ ಸುಭಾಷ್ ಜೋಶಿ, ಕಾಂಗ್ರೆಸ್ ಮುಖಂಡರಾದ ಕಿರಣ ಸಾಧುನವರ್, ಬಸವರಾಜ ಶಿಗ್ಗಾವಿ, ವಿವೇಕ ಜತ್ತಿ, ಮಹೇಶ ಕಡಪಟ್ಟಿ, ಆನಂದ ಘಡ್ಡದವರ್ ಮಟ್ಟ, ಮನಸೂರ ಖಾನ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಇದ್ದರು.
ಇಲ್ಲಿ ಕ್ಲಿಕ್ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್ಪ್ ಗುಂಪು ಸೇರಲು ಈ ಲಿಂಕ್ ಕ್ಲಿಕ್ ಮಾಡಿ