ನವದೆಹಲಿ: ರಾಹುಲ್ ಗಾಂಧಿ ಅವರನ್ನು ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಳಿಸಿರುವುದನ್ನು ವಿರೋಧಿಸಿ ಕಾಂಗ್ರೆಸ್ ಭಾನುವಾರ ಎಲ್ಲಾ ರಾಜ್ಯಗಳು ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಮಟ್ಟಿಗೆ ಸತ್ಯಾಗ್ರಹ ಹಮ್ಮಿಕೊಂಡಿದೆ.
ಸತ್ಯಾಗ್ರಹವು ನಾಳೆ ಬೆಳಗ್ಗೆ 10 ಗಂಟೆಗೆ ಆರಂಭವಾಗಿ ಸಂಜೆ 5 ಗಂಟೆಗೆ ಮುಕ್ತಾಯವಾಗಲಿದೆ. ರಾಷ್ಟ್ರ ರಾಜಧಾನಿ ದೆಹಲಿಯ ರಾಜ್ಘಾಟ್ನಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸತ್ಯಾಗ್ರಹ ನಡೆಸಲಿದ್ದಾರೆ.
ರಾಹುಲ್ ಭಾಷಣಕ್ಕೆ ಪ್ರಧಾನಿ ಮೋದಿ ಹೆದರಿದ್ದಾರೆ :
ಅದಾನಿ ವಿಷಯದ ಕುರಿತು ಮುಂದಿನ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಮಾಡಲಿರುವ ಭಾಷಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹೆದರಿದ್ದಾರೆ ಆದ್ದರಿಂದಲೇ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ರಾಹುಲ್ ಗಾಂಧಿಯವರು ಒಬ್ಬಂಟಿಯಲ್ಲ ಅವರ ಜೊತೆ ಲಕ್ಷಾಂತರ ಕಾಂಗ್ರೆಸ್ಸಿಗರು ಮತ್ತು ಜನರು ತಮ್ಮ ರಾಜಕೀಯ ಸಂಬಂಧವನ್ನು ಲೆಕ್ಕಿಸದೆ ಸತ್ಯ ಮತ್ತು ನ್ಯಾಯಕ್ಕಾಗಿ ಈ ಹೋರಾಟದಲ್ಲಿ ಅವರೊಂದಿಗೆ ಸೇರಿಕೊಳ್ಳುತ್ತಾರೆ ಎಂದು ಕಾಂಗ್ರೆಸ್ ಹೇಳಿದೆ. ಈ ನಿಟ್ಟಿನಲ್ಲಿ ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಗಳು ಭಾನುವಾರ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಎಲ್ಲಾ ರಾಜ್ಯ ಮತ್ತು ಜಿಲ್ಲಾ ಕೇಂದ್ರಗಳಲ್ಲಿನ ಗಾಂಧಿ ಪ್ರತಿಮೆಗಳ ಮುಂದೆ ಒಂದು ದಿನದ ಸತ್ಯಾಗ್ರಹವನ್ನು ಆಯೋಜಿಸಲು ತಿಳಿಸಲಾಗಿದೆ.
2019ರ ಲೋಕಸಭೆ ಚುನಾವಣೆ ವೇಳೆ ಕೋಲಾರದಲ್ಲಿ ಮಾಡಿದ ಭಾಷಣ ಸಂಬಂಧ 2 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸದಸ್ವತ್ಯ ರದ್ದು ಮಾಡಿ ಲೋಕಸಭೆ ಸಚಿವಾಲಯ ಶುಕ್ರವಾರ ಆದೇಶ ಹೊರಡಿಸಿದೆ.
ಎಲ್ಲ ಕಳ್ಳರ ಉಪನಾಮ ಮೋದಿ ಎಂದೇ ಯಾಕಿರುತ್ತದೆ ಎಂದು ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ವ್ಯಂಗ್ಯವಾಡಿದ್ದರು. ಈ ಸಂಬಂಧ ಸೂರತ್ ಕೋರ್ಟ್ನಲ್ಲಿ ಮಾನನಷ್ಟ ಮೊಕದ್ದಮೆ ದೂರು ದಾಖಲಾಗಿತ್ತು. ಪ್ರಕರಣಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಕೋರ್ಟ್ ಗುರುವಾರ ಆದೇಶ ಹೊರಡಿಸಿತ್ತು. ಜತೆಗೆ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತಿನಲ್ಲಿರಿಸಿ,ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಿತ್ತು.
ಇದನ್ನೂ ಓದಿ : ಮೋದಿ ಹೆಸರನ್ನು ಟೀಕಿಸಿದ ರಾಹುಲ್ ಗಾಂಧಿಗೆ 2 ವರ್ಷ ಜೈಲು; ತೀರ್ಪು ನೀಡಿದ ಕೋರ್ಟಿನಿಂದಲೇ ಜಾಮೀನು
ಮಾರ್ಚ್ 23ರಿಂದ ಅನ್ವಯವಾಗುವಂತೆ ರಾಹುಲ್ ಗಾಂಧಿಯವರ ಲೋಕಸಭೆ ಸದಸ್ಯತ್ವ ಅನರ್ಹಗೊಂಡಿದೆ. ಸದ್ಯ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡ್ ಲೋಕಸಭಾ ಕ್ಷೇತ್ರ ತೆರವಾಗಿದೆ. ಇನ್ನು ಆರು ತಿಂಗಳಲ್ಲಿ ಚುನಾವಣೆ ನಡೆಸುವ ಜವಾಬ್ದಾರಿ ಚುನಾವಣಾ ಆಯೋಗದ್ದು. ಜತೆಗೆ ಕೇಂದ್ರ ದೆಹಲಿಯಲ್ಲಿ ತಮಗೆ ನೀಡಲಾಗಿರುವ ಸರ್ಕಾರಿ ಬಂಗಲೆಯನ್ನು ರಾಹುಲ್ ಗಾಂಧಿ ಅವರು ತೊರೆಯಬೇಕು. ಇನ್ನು ಸೂರತ್ ನ್ಯಾಯಾಲಯ ನೀಡಿದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಅವಕಾಶ ರಾಹುಲ್ ಗಾಂಧಿ ಅವರಿಗಿದೆ. ಶಿಕ್ಷೆಗೆ ಹಾಗೂ ಅನರ್ಹತೆಗೆ ತಡೆ ನೀಡುವ ಅಧಿಕಾರ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ಗೆ ಇದೆ.
ಇದನ್ನೂ ಓದಿ : ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿ ಅಧಿಸೂಚನೆ
ಒಂದು ವೇಳೆ ಉನ್ನತ ನ್ಯಾಯಾಲಯದಲ್ಲೂ ಇದೇ ತೀರ್ಪು ಬಂದರೆ, ರಾಹುಲ್ ಗಾಂಧಿ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕು. ಅಲ್ಲದೇ, ಶಿಕ್ಷೆ ಪೂರ್ಣಗೊಳಿಸಿದ ಬಳಿಕ 6 ವರ್ಷ ಚುನಾವಣೆಗೆ ಸ್ಪರ್ಧೆ ಮಾಡುವಂತಿಲ್ಲ.