ದಿಂಡಿಗಲ್ : ರಾಹುಲ್ ಗಾಂಧಿ ಅವರಿಗೆ 2019ರ ಮಾನಹಾನಿ ಪ್ರಕರಣದಲ್ಲಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದ ಸೂರತ್ ಕೋರ್ಟ್ ನ್ಯಾಯಾಧೀಶರ ನಾಲಿಗೆ ಕತ್ತರಿಸುವುದಾಗಿ ಹೇಳುವ ಮೂಲಕ ತಮಿಳುನಾಡಿನ ಕಾಂಗ್ರೆಸ್ ನಾಯಕ ಭಾರಿ ವಿವಾದ ಸೃಷ್ಟಿಸಿದ್ದಾರೆ.
ಈ ಸಂಬಂಧ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಕೋಲಾರದಲ್ಲಿ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪ್ರಚಾರ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ‘ಕಳ್ಳರೆಲ್ಲರೂ ಮೋದಿ ಸರ್ನೇಮ್ ಹೊಂದಿರುವುದು ಹೇಗೆ?’ ಎಂದು ವ್ಯಂಗ್ಯವಾಡಿದ್ದರು. ಇದರ ವಿರುದ್ಧ ಗುಜರಾತ್ ಬಿಜೆಪಿ ಶಾಸಕ ಪೂರ್ಣೇಶ್ ಮೋದಿ ಅವರು ಸೂರತ್ನಲ್ಲಿ ದೂರು ದಾಖಲಿಸಿದ್ದರು. ಈ ಕುರಿತಂತೆ ರಾಹುಲ್ ಗಾಂಧಿ ಅವರಿಗೆ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
ಇದನ್ನೂ ಓದಿ : ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹಗೊಳಿಸಿ ಅಧಿಸೂಚನೆ
ಶಿಕ್ಷೆಯ ಬೆನ್ನಲ್ಲೇ ರಾಹುಲ್ ಗಾಂಧಿ ಅವರನ್ನು ವಯನಾಡು ಲೋಕಸಭೆ ಕ್ಷೇತ್ರದ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು. ಅದರ ವಿರುದ್ಧ ತಮಿಳುನಾಡಿನ ದಿಂಡಿಗಲ್ನಲ್ಲಿ ಕಾಂಗ್ರೆಸ್ನ ಎಸ್ಸಿ ಎಸ್ಟಿ ಮೋರ್ಚಾ ವತಿಯಿಂದ ಗುರುವಾರ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ ದಿಂಡಿಗಲ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಣಿಕಂದನ್ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.