ಚನ್ನಪಟ್ಟಣ : ಪ್ರಧಾನಿ ನರೇಂದ್ರ ಮೋದಿ ಅವರಿಂದ ಕಳೆದ ತಿಂಗಳಷ್ಟೇ ಉದ್ಘಾಟನೆಗೊಂಡಿದ್ದ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ಅಪಘಾತಗಳು ಸಂಭವಿಸುತ್ತಲೇ ಇವೆ ಇದೀಗ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿ ತಾಂಡಾ ಬಳಿ ಇಂದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಗು ಸೇರಿ ಮೂವರು ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ನೂತನ ಬೆಂಗಳೂರು ಮೈಸೂರು ದಶಪಥ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಇನ್ನೊವಾ ಕಾರು ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಯಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಆಲ್ಟೋ ಕಾರಿನಲ್ಲಿದ್ದ ಮೂವರು (ತಂದೆ ಹಾಗೂ ಇಬ್ಬರು ಮಕ್ಕಳು) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಅತಿವೇಗದ ಹಾಗೂ ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಅಪಘಾತದಲ್ಲಿ ಮೃತಪಟ್ಟವರು ಟಿ.ನರಸೀಪುರ ಮೂಲದವರು ಎಂದು ಹೇಳಲಾಗುತ್ತಿದೆ. ಈ ಕುರಿತು ಪೊಲೀಸರು ಇನ್ನಷ್ಟೇ ಅಧಿಕೃತ ಹೇಳಿಕೆ ನೀಡಬೇಕಿದೆ. ಸ್ಥಳಕ್ಕೆ ಚನ್ನಪಟ್ಟಣ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬೆಂ-ಮೈ ಎಕ್ಸ್ಪ್ರೆಸ್ ವೇನಲ್ಲಿ ಮುಂದುವರಿದ ಅಪಘಾತ ಸರಣಿ
ಕೆಎಸ್ಆರ್ಟಿಸಿ ಬಸ್ ಕಣಿಮಿಣಿಕೆ ಬಳಿ ಟೋಲ್ ಕಟ್ಟುವುದನ್ನು ತಪ್ಪಿಸಲು ಹೋಗಿ ಬೈಕ್ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟ ಘಟನೆ ಕಳೆದ ತಿಂಗಳು ಸಂಭವಿಸಿತ್ತು. ಹಿಂಬದಿ ಸವಾರ ಗಾಯಗೊಂಡಿದ್ದರು. ಈ ಕಹಿ ಘಟನೆಯ ನೆನಪು ಮಾಸುವ ಮುನ್ನವೇ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.