ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಇಲ್ಲ, ಸಿದ್ದರಾಮಯ್ಯ ಪೂರ್ಣವಧಿ ಮುಖ್ಯಮಂತ್ರಿ ಆಗಲಿದ್ದಾರೆ ಎಂಬ ಸಚಿವ ಎಂಬಿ ಪಾಟೀಲ್ ಹೇಳಿಕೆ ಕಾಂಗ್ರೆಸ್ನಲ್ಲಿ ಸಂಚಲನ ಸೃಷ್ಟಿಸಿದೆ. ಈ ಹೇಳಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಣಗಳ ನಡುವೆ ಶೀತಲ ಸಮರಕ್ಕೆ ಕಾರಣವಾಗಿದೆ. ಇದರ ಬೆನ್ನಲ್ಲೇ ಪಾಟೀಲ್ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಹೈಕಮಾಂಡ್, ಅಧಿಕಾರ ಹಂಚಿಕೆ ಸೂತ್ರದ ಬಗ್ಗೆ ಯಾರೂ ಚರ್ಚಿಸಬಾರದು ಎಂದು ಖಡಕ್ ಎಚ್ಚರಿಕೆ ನೀಡಿದೆ.
ಯಾರೂ ಕೂಡ ಅನಗತ್ಯ ಹೇಳಿಕೆಗಳನ್ನು ನೀಡಬಾರದು. ಒಳ್ಳೆಯ ಆಡಳಿತ ನೀಡುವುದಷ್ಟೇ ಈಗ ನಮ್ಮ ಆದ್ಯತೆ. ಇದರ ಕಡೆಗೆ ಗಮನ ಕೊಡಬೇಕು. ಇದರ ಹೊರತಾಗಿ ಅನಗತ್ಯ ಹೇಳಿಕೆಗಳನ್ನು ನೀಡಬಾರದು ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಣದ ಸಚಿವರು, ಶಾಸಕರಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ.
ಮೈಸೂರಿನ ಸುತ್ತೂರಿನಲ್ಲಿ ಸೋಮವಾರ ರಾತ್ರಿ ಮಾತನಾಡಿದ್ದ ಎಂಬಿ ಪಾಟೀಲ್, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಪೂರ್ಣವಧಿ ಇರಲಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಹೇಳಿದ್ದರು. ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆಯೇ ಸ್ಪಷ್ಟನೆ ನೀಡಿರುವ ಅವರು, ರಾಜ್ಯದಲ್ಲಿ ಮುಖ್ಯಮಂತ್ರಿ ಮತ್ತು ಉಪ-ಮುಖ್ಯಮಂತ್ರಿಗಳು 5 ವರ್ಷಗಳ ಕಾಲ ಮುಂದುವರಿಯಲಿದ್ದಾರೆ, ಮುಂದಿನ ವರ್ಷ ನಡೆಯುವ ಸಾರ್ವತ್ರಿಕ ಚುನಾವಣೆವರೆಗೆ ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರಿಯಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹೇಳಿದ್ದನ್ನೇ ತಾನು ಪುನರುಚ್ಛರಿಸಿದ್ದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಮಾರ್ಚ್9 ರ ಕೈ ಬಂದ್‌ನಿಂದ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಲಾಗಿದೆ : ರಣದೀಪ್‍ಸಿಂಗ್ ಸುರ್ಜೇವಾಲ
ಈ ಮಧ್ಯೆ ಎಂಬಿ ಪಾಟೀಲ್ ಹೇಳಿಕೆ ಕುರಿತು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಎಐಸಿಸಿ ಜನರಲ್ ಸೆಕ್ರೆಟರಿ ಇದ್ದಾರೆ, ಮುಖ್ಯಮಂತ್ರಿಗಳಿದ್ದಾರೆ ಹಾಗೂ ಎಐಸಿಸಿ ಅಧ್ಯಕ್ಷರು ಇದ್ದಾರೆ. ಅವರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.