ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಗೃಹಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹ ಲಕ್ಷ್ಮಿ’ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಕರ್ನಾಟಕ ಸರ್ಕಾರದ “ ಗೃಹಲಕ್ಷ್ಮೀ ” ಯೋಜನೆಯ ಕುರಿತು ವಿಧಾನಸೌಧದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ  ಅವರು
ಗೃಹಲಕ್ಷ್ಮೀ ಯೋಜನೆಯು ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಿಪಿಎಲ್/ಎಪಿಎಲ್/ಅಂತ್ಯೋದಯ ಕಾರ್ಡ್ ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು ರೂ, 2,000/- ಗಳನ್ನು (DBT) ನೇರ ನಗದು ವರ್ಗಾವಣೆ ಮೂಲಕ  ನೀಡುವ ಯೋಜನೆಯಾಗಿರುತ್ತದೆ. ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ಧಿಯನ್ನು ಖಚಿತ ಪಡಿಸಬಹುದಾಗಿರುತ್ತದೆ ಹಾಗೂ ಕುಟುಂಬದ ಅಭಿವೃದ್ಧಿ ಸಮಾಜದ ಅಭಿವೃದ್ಧಿಗೆ ಬುನಾದಿಯಾಗಿರುತ್ತದೆ. ಆದ್ದರಿಂದ ಸದರಿ ಯೋಜನೆಯು ಮಹಿಳಾ ಸಬಲೀಕರ ಹಾಗೂ ಸ್ವಾಭಿಮಾನದ ಹೆಗ್ಗುರುತಾಗಲಿದೆ. ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ. ನಾಳೆಯಿಂದ ಆಫ್ ಲೈನ್ ಹಾಗೂ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24 ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲು ಸರ್ಕಾರವು ಹರ್ಷಿಸುತ್ತಿದೆ ಎಂದರು.

ಇದನ್ನೂ ಓದಿ:ಗೃಹಲಕ್ಷ್ಮೀ ಯೋಜನೆಯ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ? : ಇಲ್ಲಿದೆ ಮಹತ್ವದ ಮಾಹಿತಿ

ನಾಳೆ ಮಧ್ಯಾಹ್ನ 1.30ಕ್ಕೆ ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಸೇವಾ ಸಿಂಧು ಪೋರ್ಟಲ್​ನಲ್ಲಿ ಚಾಲನೆ ನೀಡಲಿದ್ದಾರೆ. ಶಕ್ತಿಭವನದಲ್ಲಿ ಸೇವಾ ಸಿಂಧು ವೆಬ್​ಪೋರ್ಟಲ್​ ಸಿಎಂರಿಂದ ಲಾಂಚ್ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ಅರ್ಜಿಗಳನ್ನು ಆನ್‌ಲೈನ್ ಮೂಲಕ ಅಥವಾ ಭೌತಿಕವಾಗಿ ಗ್ರಾಮ ಒನ್/ಬೆಂಗಳೂರು ಒನ್/ಕರ್ನಾಟಕ ಒನ್ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್‌ ಖಾತೆ ವಿವರಗಳು ಅಗತ್ಯವಾಗಿರುತ್ತದೆ ಎಂದು ಅವರು ಹೇಳಿದರು. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ವರ್ಷವಿಡೀ ನಿರಂತರ ಪ್ರಕ್ರಿಯೆಯಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ವಿಧಿಸಲಾಗುವುದಿಲ್ಲ, ಸಂಪೂರ್ಣ ಉಚಿತವಾಗಿರುತ್ತದೆ. ಯೋಜನೆಯ ಕುರಿತಂತೆ ಸಂದೇಹ/ ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ. ಎಂದು ಅವರು ಮಾಹಿತಿ ನೀಡಿದರು.ಇ- ಗವರ್ನೆನ್ಸ್ ಮೂಲಕ ಅರ್ಜಿ ಹಾಕುವ ವ್ಯವಸ್ಥೆ ಮಾಡಿದ್ದೇವೆ. ಅರ್ಜಿದಾರರ ಪತಿ ತೆರಿಗೆದಾರರು ಆಗಿದ್ರೆ ಅರ್ಜಿ ಸ್ವೀಕಾರ ಆಗೋದಿಲ್ಲ. ಹೀಗಾಗಿ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಲು ಸಾಧ್ಯವಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದರು.

 

Donate Janashakthi Media

Leave a Reply

Your email address will not be published. Required fields are marked *