ಬೆಂಗಳೂರು: ಸರ್ಕಾರದ 5 ಗ್ಯಾರೆಂಟಿ ಜಾರಿಗೆ ಮತ್ತು ಗ್ಯಾರೆಂಟಿಗಳಿಗೆ ವಿಧಿಸಿರುವ ಷರತ್ತುಗಳು, ಗೋ ಹತ್ಯೆ ಮತ್ತು ಮತಾಂತರ ಕಾಯ್ದೆಯನ್ನು ವಾಪಸ್ ಪಡೆಯುತ್ತಿರುವುದನ್ನು ವಿರೋಧಿಸಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ.
ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ನಡೆಸಿದರು. ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರು, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂಬುವುದಕ್ಕೆ ಈ ವೇಳೆ ಪ್ರತಿಕ್ರಿಯಿಸಿರುವ ಅವರು, ಕುಮಾರಸ್ವಾಮಿಯವರು ಹೇಳಿರುವ ಮಾತುಗಳು ನಿಜ. ನಾನು ಕುಮಾರಸ್ವಾಮಿಯವರ ಹೇಳಿಕೆಗಳನ್ನು ಬೆಂಬಲಿಸುತ್ತೇನೆ. ಭವಿಷ್ಯದಲ್ಲಿ ಕುಮಾರಸ್ವಾಮಿ ಮತ್ತು ನಾವು ಒಟ್ಟಾಗಿ ಹೋರಾಡುತ್ತೇವೆ ಎಂದು ಹೇಳಿದರು. 2024ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಕ್ಕೆ ಯಡಿಯೂರಪ್ಪನವರ ಮಾತುಗಳು ಪುಷ್ಠಿ ನೀಡುತ್ತಿವೆ.
ಇದನ್ನೂ ಓದಿ:ಕಾಂಗ್ರೆಸ್ ಗ್ಯಾರೆಂಟಿ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ
ಪ್ರತಿಭಟನೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾತನಾಡಿ ಜನರಿಗೆ ಸುಳ್ಳು ಹೇಳಿ ಐದು ಗ್ಯಾರೆಂಟಿ ಕಾರ್ಡ್ಗಳನ್ನು ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸರ್ಕಾರ ರಚನೆಯಾದ 24 ಘಂಟೆಯೊಳಗೆ ಜನರಿಗೆ ತಲುಪಿಸುತ್ತೇವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದರೆ ಇವತ್ತಿನವರೆಗೂ ಜನರಿಗೆ ಸಮರ್ಪಕವಾಗಿ ಗ್ಯಾರೆಂಟಿ ಯೋಜನೆಗಳನ್ನು ತಲುಪಿಸುವಲ್ಲಿ ವಿಫಲವಾಗಿದ್ದಾರೆ ಎದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟಿಲ್, ಮಾಜಿ ಸಿಎಂ ಡಿ.ವಿ ಸದಾನಂದ ಗೌಡ, ಮಾಜಿ ಸಚಿವರಾದ ಗೋಪಾಲಯ್ಯ, ಬಿ.ಸಿ ನಾಗೇಶ್, ಎನ್.ಮಹೇಶ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಪರಿಷತ್ ಸದಸ್ಯ ಎನ್.ರವಿಕುಮಾರ್ ಸೇರಿದಂತೆ ಹಲವಾರು ಬಿಜೆಪಿ ಮುಖಂಡರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.