ಬೆಂಗಳೂರು: ಕೇಂದ್ರ ಸರ್ಕಾರ ಸಿದ್ಧಪಡಿಸಿದ ಹೊಸ ಶಿಕ್ಷಣ ನೀತಿಯನ್ನು ರದ್ದುಗೊಳಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.
ಕೇಂದ್ರ ಸರ್ಕಾರ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕಾಂಗ್ರೆಸ್ ಪಕ್ಷ ಆರಂಭದಿಂದಲೂ ವಿರೋಧಿಸುತ್ತಾ ಬಂದಿತ್ತು. ಈಗ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ದುರ್ಬಲಗೊಳಿಸುತ್ತದೆ. ಅವೈಜ್ಞಾನಿಕ ಅಂಶಗಳನ್ನು ಒಳಗೊಂಡಿದ್ದು, ಬಹುಧರ್ಮ, ಬಹುಭಾಷೆ, ಬಹುಸಂಸ್ಕೃತಿ ಇರುವ ನಮ್ಮ ದೇಶಕ್ಕೆ ಏಕರೂಪದ ಶಿಕ್ಷಣ ವ್ಯವಸ್ಥೆ ಹೊಂದಿಕೊಳ್ಳುವುದಿಲ್ಲ.
ಇದನ್ನೂ ಓದಿ:ಸರ್ಕಾರಗಳು ಜಾರಿಗೊಳಿಸುತ್ತಿರುವ ಜನ ವಿರೋಧಿ ಕಾಯ್ದೆಗಳ ವಾಪಸ್ಸಿಗೆ ಆಗ್ರಹಿಸಿ ಎಡ-ಪ್ರಜಾಸತ್ತಾತ್ಮಕ ಪಕ್ಷಗಳ ಪ್ರತಿಭಟನೆ
ಕರ್ನಾಟಕದ ಸ್ಥಳೀಯ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕತೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿಯನ್ನು ತರಲಾಗುವುದು. ಹೊಸ ಶಿಕ್ಷಣ ನೀತಿಯಡಿ ಉನ್ನತ ಶಿಕ್ಷಣ ಗುಣಮಟ್ಟವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದು ಯುವಜನತೆ ಜಾಗತಿಕವಾಗಿ ಪ್ರಬಲ ಸ್ಪರ್ಧೆಯೊಡ್ಡಲು ಮತ್ತು ಅರ್ಥವತ್ತಾದ ಉದ್ಯೋಗಾವಕಾಶಗಳನ್ನು ಪಡೆಯಲು ಅನುಕೂಲ ಮಾಡಿಕೊಡುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.
ಶಾಲಾ ಶಿಕ್ಷಣ ಮಗುವಿನ ವ್ಯಕ್ತಿತ್ವ ನಿರ್ಮಾಣದಲ್ಲಿ, ಆ ಮೂಲಕ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಶಿಕ್ಷಣವು ಮಕ್ಕಳ ಶಾರೀರಿಕ ಹಾಗೂ ಭಾವನಾತ್ಮಕ ಬೆಳವಣಿಗೆಗೆ, ಜ್ಞಾನ ಮತ್ತು ಮನೋವಿಕಾಸಕ್ಕೆ ಪೂರಕವಾಗಿರಬೇಕು. ಶಿಕ್ಷಣವು ಬಾಂಧವ್ಯ, ಭ್ರಾತೃತ್ವ, ಸಾಮರಸ್ಯ ಮತ್ತು ಸಹಬಾಳ್ವೆಯ ಮನೋಭಾವ ಮೂಡಿಸುವಂತಿರಬೇಕು. ಈ ಆಶಯಕ್ಕೆ ವಿರುದ್ಧವಾದ ಪಠ್ಯಗಳನ್ನು ಹಿಂದಿನ ಸರ್ಕಾರವು ಪಠ್ಯ ಪರಿಷ್ಕರಣೆಯಲ್ಲಿ ಸೇರ್ಪಡೆಗೊಳಿಸಿದ್ದು, ಅವುಗಳನ್ನು ಪ್ರಸಕ್ತ ಸಾಲಿನಿಂದಲೇ ಕೈಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿವರಿಸಿದರು.