ಬೆಂಗಳೂರು:ಕಾಂಗ್ರೆಸ್ ಪಕ್ಷವು ಮೇಕೆದಾಟು ಪಾದಯಾತ್ರೆ ಸಂದರ್ಭದಲ್ಲಿ ಕೋವಿಡ್ 19 ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಸಿದ್ದರಾಮಯ್ಯ,ಡಿ.ಕೆಶಿವಕುಮಾರ್ ಸೇರಿ ಹಲವು ನಾಯಕರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆಯಲು ಗುರುವಾರ ನಡೆದ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ ಅವರು ಈ ವಿಷಯ ತಿಳಿಸಿದರು
ಬುಧವಾರ ನಡೆದ ಸಚಿವ ಸಂಪುಟದ ಉಪಸಮಿತಿಯ ಶಿಫಾರಸಿನಂತೆ 9 ಪ್ರಕರಣಗಳನ್ನು ಅಭಿಯೋಜನೆಯಿಂದ ಹಿಂದಕ್ಕೆ ಪಡೆಯುವುದಕ್ಕಾಗಿ,ಹೈಕೋರ್ಟ್ನ ಅನುಮತಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳಲು ಸಭೆ ಅನುಮೋದಿಸಿದೆ ಎಂದರು.ಪ್ರಕರಣ ಹಿಂದಕ್ಕೆ ಪಡೆಯುವ ಸಂಬಂಧ ಸರ್ಕಾರದ ಮುಖ್ಯಸಚೇತಕ ಅಶೋಕ ಪಟ್ಟಣ ಪ್ರಸ್ತಾವನೆ ಸಲ್ಲಿಸಿದ್ದರು.
ಇದನ್ನೂ ಓದಿ:ಗೌತಮ ಗುತ್ತಿಗೆದಾರ ಅಲ್ಲ ; ಇದು ಬಿಜೆಪಿ ಪಿತೂರಿ – ಪೋಷಕರಿಂದ ಸ್ಪಷ್ಟನೆ
ರಾಜ್ಯದ ಜನಪ್ರತಿನಿಧಿಗಳಿಂದ ಮತ್ತು ಸಾರ್ವಜನಿಕರಿಂದ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ಸ್ವೀಕೃತವಾಗುವ ಪ್ರಸ್ತಾವನೆಗಳಿಗೆ ಒಳಾಡಳಿತ ಇಲಾಖೆಯಿಂದ ಸಚಿವ ಸಂಪುಟದ ನಿರ್ಣಯದಂತೆ ಪರಿಗಣಿಸಲಾಗುತ್ತದೆ ಎಂದು ಹೇಳಿದರು. ಕೋಮು ಗಲಭೆಗಳಿಗೆ ಸಂಬಂಧಿಸಿದಂತೆ ಯಾವುದೇ ಮೊಕದ್ದಮೆಗಳನ್ನು ಹಿಂದಕ್ಕೆ ಪಡೆದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.