ಬೆಂಗಳೂರು: ಕರ್ನಾಟಕಕ್ಕೆ ಬರ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಪ್ರಶ್ನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ರಾಜ್ಯದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ ಎಂದು ಪ್ರಶ್ನಿಸಿದ್ದಾರೆ.
ರಾಜ್ಯದ ಒಟ್ಟು 236 ತಾಲ್ಲೂಕುಗಳ ಪೈಕಿ 216 ತಾಲ್ಲೂಕುಗಳು ಬರಪೀಡಿತವಾಗಿದೆ. ರಾಜ್ಯಕ್ಕೆ ಭೇಟಿ ನೀಡಿದ ಕೇಂದ್ರ ತಂಡವು ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಮನವರಿಕೆ ಮಾಡಿಕೊಂಡಿದೆ, ಆದರೂ ಇನ್ನೂ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಅವರು ಒತ್ತಿಹೇಳಿದ್ದಾರೆ. ಬರ ಪರಿಹಾರ
ಇದನ್ನೂ ಓದಿ: ಕೇರಳ: ಶವರ್ಮಾ ಸೇವಿಸಿ ಓರ್ವ ಸಾವು; 10 ಮಂದಿ ಆಸ್ಪತ್ರೆಗೆ ದಾಖಲು
“ರಾಜ್ಯದ 216 ತಾಲೂಕುಗಳು ಭೀಕರ ಬರದಿಂದ ಕಂಗೆಟ್ಟಿವೆ, ಈ ವರೆಗೆ ಕೇಂದ್ರದಿಂದ ನಯಾಪೈಸೆ ಪರಿಹಾರದ ಹಣ ಬಿಡುಗಡೆಯಾಗಿಲ್ಲ. ಪ್ರಧಾನಿ ಅವರೇ, ಜಗತ್ತಿನ ಕಷ್ಟ – ದು:ಖಕ್ಕೆಲ್ಲ ಮಿಡಿಯುವ ನಿಮ್ಮ ‘ವಿಶಾಲ ಹೃದಯ ಕನ್ನಡಿಗರ ಬಗ್ಗೆ ಇಷ್ಟೊಂದು ಕಟುವಾಗಿರುವುದು ಯಾಕೆ?” ಎಂದು ಅವರು ಟ್ವಿಟರ್ನಲ್ಲಿ ಪ್ರಶ್ನಿಸಿದ್ದಾರೆ. ಬರ ಪರಿಹಾರ
ನಿಮ್ಮ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆಯೇ? ಇದು ನನ್ನ ಪ್ರಶ್ನೆ ಮಾತ್ರವಲ್ಲ, ಆರೂವರೆ ಕೋಟಿ ಸ್ವಾಭಿಮಾನಿ ಕನ್ನಡಿಗರ ಪ್ರಶ್ನೆಯಾಗಿದೆ ಎಂದು ಅವರು ಹೇಳಿದ್ದಾರೆ.
“ಉತ್ತರ ಹೇಳಿ ಮೋದಿ” ಎಂಬ ಹ್ಯಾಶ್ಟ್ಯಾಗ್ನೊಂದಿಗೆ ಸಿದ್ದರಾಮಯ್ಯ ಅವರು ಬರಗಾಲ ಪೀಡಿತ ಕರ್ನಾಟಕ 33,770 ಕೋಟಿ ರೂಪಾಯಿಗಳ ಭಾರಿ ನಷ್ಟವನ್ನು ಎದುರಿಸುತ್ತಿದೆ ಎಂದು ಹೇಳಿದ್ದಾರೆ ಮತ್ತು 17,901 ಕೋಟಿ ರೂಪಾಯಿ ಪರಿಹಾರಕ್ಕಾಗಿ ಮನವಿ ಮಾಡಿದರೂ ಕೇಂದ್ರವು “ಮೌನವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಚೆನ್ನೈ | ರಾಜಭವನ ಪೆಟ್ರೋಲ್ ಬಾಂಬ್ ಪ್ರಕರಣ – ಆರೋಪಿಗೆ ಬಿಜೆಪಿ ಜೊತೆಗೆ ಸಂಬಂಧ!
ಮೇ ತಿಂಗಳ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ನಾಯಕರು ಕನ್ನಡಿಗರಿಗೆ ಒಡ್ಡಿರುವ ಬೆದರಿಕೆಗಳನ್ನು ನೆನಪಿಸಿಕೊಳ್ಳುವ ಸಮಯ ಬಂದಿದೆ ಎಂದು ಹೇಳಿರುವ ಸಿದ್ದರಾಮಯ್ಯ, “ಅಂದು ಒಡ್ಡಿದ್ದ ಬೆದರಿಕೆಯ ಫಲಿತಾಂಶವನ್ನು ನಾವು ಈಗ ನೋಡುತ್ತಿದ್ದೇವೆ” ಎಂದು ಹೇಳಿದ್ದಾರೆ.
“ಬಿಜೆಪಿ ಸಂಸದರು ಮತ್ತು ಕೇಂದ್ರ ಸರ್ಕಾರದ ಸಚಿವರು ಕರ್ನಾಟಕಕ್ಕೆ ಬರ ಪರಿಹಾರ ನೀಡುವ ಬಗ್ಗೆ ಮೌನವಾಗಿರುವುದು ಯಾಕೆ? ಕನ್ನಡಿಗರ ಮೇಲಿನ ದ್ವೇಷವೇ ಕಾರಣವೇ?” ಎಂದು ಸಿಎಂ ಪ್ರಶ್ನಿಸಿದ್ದಾರೆ.
ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ 224 ಸದಸ್ಯ ಬಲದ ವಿಧಾನಸಭೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳಲ್ಲಿ ಪಡೆದು ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿತು. ಈ ಚುನಾವಣೆಯಲ್ಲಿ ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಪಡೆದುಕೊಂಡಿದೆ. ಸರ್ಕಾರ ರಚನೆಯಾಗಿ ಒಂದು ಅಧಿವೇಶನ ಮುಗಿದರೂ ಬಿಜೆಪಿ ಇದುವರೆಗೂ ವಿಪಕ್ಷ ನಾಯಕನನ್ನು ಆಯ್ಕೆ ಮಾಡಿಲ್ಲ.
ವಿಡಿಯೊ ನೋಡಿ: ʻಬದುಕಿನ ಬೀಗದ ಕೀ ನಮ್ಮ ಕೈಲೇ ಇದೆʻ ಹಿರಿಯ ರಂಗಕರ್ಮಿ ಜೇವರ್ಗಿ ರಾಜಣ್ಣ ಜೊತೆ ಮಾತುಕತೆ