ಬೆಂಗಳೂರು: ತನ್ನ ತಾಯಿಗೆ ಬರುತ್ತಿದ್ದ ‘ಗೃಹಲಕ್ಷ್ಮಿ’ ಹಣದಿಂದ ವಿದ್ಯಾರ್ಥಿಯೊಬ್ಬರು B.Ed ಶುಲ್ಕ ಕಟ್ಟಿದ್ದಾರೆ. ಈ ವಿಚಾರವನ್ನು ಟ್ವೀಟ್ ಮೂಲಕ ಹಂಚಿಕೊಂಡು ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ. ಇದೀಗ ಈ ಕುರಿತು ಸಿಎಂ ಸಿದ್ದರಾಮಯ್ಯ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.
ಅಪ್ಪು ಎಂಬ ಹೆಸರಿನಲ್ಲಿ ಟ್ವೀಟ್
B.Ed 4ನೇ ಸೆಮಿಸ್ಟರ್ ಪರೀಕ್ಷೆಯ ಶುಲ್ಕವನ್ನ ತನ್ನ ತಾಯಿಗೆ ಬಂದಿದ್ದ ಗೃಹಲಕ್ಷ್ಮಿ ಹಣದಿಂದ ಕಟ್ಟಿದೆ. ಕುಟುಂಬ ಸಾಲದ ಸುಳಿಯಲ್ಲಿದೆ ತಂದೆ ಬಳಿ ಹಣ ಕೇಳೋಕೆ ಆಗದೆ ತಾಯಿ ಉಳಿಸಿಟ್ಟಿದ್ದ ಯೋಜನೆಯ ಹಣ ಸಹಾಯಕ್ಕೆ ಬಂದಿದೆ. ಸಂಕಷ್ಟದ ಸಮಯದಲ್ಲಿ ನನ್ನನ್ನ ಕಾಪಾಡಿದೆ. ಸಿದ್ದರಾಮಯ್ಯ ರಿಗೆ ಎಷ್ಟ್ ಧನ್ಯವಾದ ಹೇಳಿದ್ರು ಸಾಲಲ್ಲ ಎಂದು ವಿದ್ಯಾರ್ಥಿ ಹೇಳಿದ್ದಾರೆ.
ಇದನ್ನೂ ಓದಿ: ಗೃಹಲಕ್ಷ್ಮೀ ಯೋಜನೆಯ ಹಣದಿಂದ ಎತ್ತು ಖರಿದಿಸಿದ ಮಹಿಳೆ
ಸಿಎಂ ಸಿದ್ದರಾಮಯ್ಯ ಟ್ವೀಟ್
ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹಾ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ. ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ ಇಂದು ಮುಖ್ಯಮಂತ್ರಿಯಾಗಿ ಕೋಟ್ಯಂತರ ಕನ್ನಡಿಗರ ಸೇವೆ ಮಾಡುವ ಭಾಗ್ಯ ನನ್ನದಾಗುತ್ತಿರಲಿಲ್ಲ.
ಬಡತನದಲ್ಲೂ ಕಲಿಕೆಯೆಡೆಗಿನ ಈ ಯುವಕನ ಹಂಬಲ ಕಂಡು ನನಗೆ ಖುಷಿಯಾಯಿತು. ಗೃಹಲಕ್ಷ್ಮಿ ಯೋಜನೆ ನಿಜವಾಗಿ ತಲುಪಬೇಕಿರುವುದು ಮತ್ತು ತಲುಪುತ್ತಿರುವುದು ಇಂತಹ ಜನರನ್ನೆ. ತನಗೆ ಬಂದ ಗೃಹಲಕ್ಷ್ಮಿಯ ಹಣವನ್ನು ಕಡುಬಡತನದಲ್ಲೂ ಕೂಡಿಟ್ಟು ಮಗನ ಶಿಕ್ಷಣಕ್ಕಾಗಿ ಕೊಟ್ಟ ಆ ತಾಯಿಯ ಪ್ರೀತಿ – ಕಾಳಜಿಗೆ ಧನ್ಯವಾದ. ಬಿ.ಇಡಿ ಶಿಕ್ಷಣ ಮುಗಿಸಿ ಶಿಕ್ಷಕನಾಗಿ ನೂರಾರು ಮಕ್ಕಳ ಬದುಕು ರೂಪಿಸುವಂತಾಗು. ಇಂದು ನೀನು ಧನ್ಯವಾದ ತಿಳಿಸಿದ್ದಕ್ಕಿಂತ ಹೆಚ್ಚು ಖುಷಿ ಅಂದು ನನಗಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇದನ್ನೂ ನೋಡಿ: ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸನ್ಮಾನ – ಸರ್ಕಾರ ಅವರ ಜಾಮೀನು ರದ್ದು ಪಡಿಸಲಿ – ಬಿಟಿ ವೆಂಕಟೇಶ್