ಬೆಂಗಳೂರು: ಎಲ್ಲ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ತಯಾರಿಸಿದ ನಿಯೋಜಿತ ರೂಪುರೇಷೆ (ಕಂಟಿನ್ವೆನ್ಸಿ ಪ್ಲಾನ್) ವರದಿ ಆಧಾರದಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನಚ್ಚರಿಕೆ ತೆಗೆದುಕೊಳ್ಳಲು 5.14 ಕೋಟಿ ಬಿಡುಗಡೆ ಮಾಡಲಾಗಿದೆ. ಇದರಿಂದ, ಈ ಹಿಂದೆ ಒದಗಿಸಿದ್ದ 11 ಕೋಟಿ ಸೇರಿ ಈವರೆಗೂ ಒಟ್ಟು 6.14 ಕೋಟಿ ನೀಡಿದಂತಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಶಾಲು ಹಾಕಿ ದಳ – ಸೇನೆ ಎಂದು ಕಾನೂನು ಕೈಗಿತ್ತಿಕೊಂಡರೆ ಒದ್ದು ಒಳಗಾಕಿ: ಪೊಲೀಸರಿಗೆ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ
ರಾಜ್ಯದ ಹಲವೆಡೆ ಮುಂಗಾರಿನ ಅಭಾವ ಎದುರಾಗಿದ್ದು ಹಲವು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಲಕ್ಷಣಗಳು ಕಾಣುತ್ತಿವೆ. ಹೀಗಾಗಿ ಗ್ರಾಮೀಣ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಬಾರದು ಎನ್ನುವ ಉದ್ದೇಶದಿಂದ ಸಾಕಷ್ಟು ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದಲ್ಲಿ ಬರದ ಛಾಯೆ ಎದುರಾಗುವ ಮುನ್ನವೇ ಎಲ್ಲ ಜಿಲ್ಲೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಕರೆದು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಿಲ್ಲಾವಾರು ಎಷ್ಟು ತಾಲ್ಲೂಕುಗಳಲ್ಲಿ ಮಳೆಯಾಗಿದೆ? ಎಷ್ಟು ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಲಿದೆ? ಎಲ್ಲೆಲ್ಲಿ ಕೆರೆಗಳಲ್ಲಿ ನೀರಿನ ಪ್ರಮಾಣ ಕ್ಷೀಣಿಸುತ್ತಿದೆ, ಯಾವ ಹಳ್ಳಿಗಳಿಗೆ ಕುಡಿಯುವ ನೀರನ್ನು ಟ್ಯಾಂಕ ಅಥವಾ ಬಾಡಿಗೆ ಬೋರ್ ವೆಲ್ ಮೂಲಕ ಒದಗಿಸಬೇಕು ಎಂಬುದನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ವರದಿ ಸಿದ್ಧಪಡಿಸಿ ಹಣ ಬಿಡುಗಡೆ ಮಾಡಲಾಗಿದೆ. ಆ ಮೂಲಕ, ರಾಜ್ಯದಾದ್ಯಂತ ಕುಡಿಯುವ ನೀರಿನ ಸಮಸ್ಯೆಯ ಯಾವುದೇ ಪ್ರಕರಣವೂ ಎದುರಾಗದಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದರು.
ಒಟ್ಟು 101 ತಾಲ್ಲೂಕುಗಳ 366 ಗ್ರಾಮ ಪಂಚಾಯತಿಗಳ 514 ಹಳ್ಳಿಗಳಿಗೆ 254 ಟ್ಯಾಂಕರ್ ಗಳಲ್ಲಿ ನೀರು ಪೂರೈಕೆ ಮಾಡಲಾಗುವುದು. ರಾಜ್ಯಾದ್ಯಂತ ಟ್ಯಾಂಕರ್ ಗಳಲ್ಲಿ ಪ್ರತಿ ದಿನ 703 ಟ್ರಿಪ್ ಗಳ ಮೂಲಕ ನೀರು ಪೂರೈಕೆ ಮಾಡಲಾಗುವುದು. ಜೊತೆಗೆ 465 ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆದು ನೀರು ಸರಬರಾಜು ಮಾಡಲು ಹಣ ಒದಗಿಸಲಾಗಿದೆ. ಒಟ್ಟು ಟ್ಯಾಂಕರ್ ನೀರು ಪೂರೈಕೆಗೆ 14.21 ಕೋಟಿ ನೀಡಲಾಗಿದ್ದು, ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆ ಪಡೆಯಲು 193 ಲಕ್ಷ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.