ದಿಸ್‌ಪುರ್: ಏಕರೂಪ ನಾಗರಿಕ ಸಂಹಿತೆಯತ್ತ ಅಸ್ಸಾಂ ಮತ್ತೊಂದು ಹೆಜ್ಜೆ ಹಾಕಿದ್ದು, ಶುಕ್ರವಾರ ರಾಜ್ಯದ ಸಚಿವ ಸಂಪುಟ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ-1935 ಅನ್ನು ರದ್ದುಗೊಳಿಸಿದೆ. ಇದರೊಂದಿಗೆ, ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳು ಈಗ ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಬರುತ್ತವೆ.
ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನಂತರ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ರಾಜ್ಯ ಸಚಿವ ಜಯಂತ ಮಲ್ಲಬರುವ, ಇದು ಯುಸಿಸಿ ಸಾಧಿಸುವತ್ತ ಒಂದು ಹೆಜ್ಜೆ ಎಂದು ಬಣ್ಣಿಸಿದ್ದಾರೆ. ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ಕಾನೂನನ್ನು ಜಾರಿಗೊಳಿಸಿದ ಮೂರು ವಾರಗಳ ನಂತರ ಬಿಜೆಪಿ ಆಡಳಿತದ ಮತ್ತೊಂದು ರಾಜ್ಯದ ಅದೇ ಪ್ರಯತ್ನ ಮಾಡಿದೆ.
ಇದನ್ನೂ ಓದಿ: ಕಾಂಗ್ರೆಸ್‌ನ ಶಶಿತರೂರ್ ಪ್ರತಿನಿಧಿಸುವ ತಿರುವನಂತಪುರಂ ಕ್ಷೇತ್ರಕ್ಕೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿ; ಕೇರಳ ಬಿಜೆಪಿ ಒಲವು
“ನಾವು ಏಕರೂಪ ನಾಗರಿಕ ಸಂಹಿತೆಯತ್ತ ಸಾಗುತ್ತಿದ್ದೇವೆ ಎಂದು ಮುಖ್ಯಮಂತ್ರಿ ಇತ್ತೀಚೆಗೆ ಹೇಳಿದ್ದಾರೆ. ಈ ಪ್ರಯಾಣದಲ್ಲಿ ಬಹಳ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅಸ್ಸಾಂ ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯಿದೆ-1935 ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 94 ಮುಸ್ಲಿಂ ರಿಜಿಸ್ಟ್ರಾರ್‌ಗಳು ಇದ್ದು, ಅದನ್ನು ಇಂದು ರದ್ದುಗೊಳಿಸಲಾಗಿದೆ” ಎಂದು ಮಲ್ಲಬರುವ ಹೇಳಿದ್ದಾರೆ.
ಇನ್ನು ಮುಸ್ಲಿಂ ವಿವಾಹ ಮತ್ತು ವಿಚ್ಛೇದನಗಳ ನೋಂದಣಿಯನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ನೋಂದಣಾಧಿಕಾರಿಗಳು ವಹಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಈ ಕಾಯಿದೆಯಡಿ ಕಾರ್ಯನಿರ್ವಹಿಸುತ್ತಿದ್ದ 94 ಮುಸ್ಲಿಂ ರಿಜಿಸ್ಟ್ರಾರ್‌ಗಳನ್ನು ತಮ್ಮ ಕರ್ತವ್ಯದಿಂದ ಬಿಡುಗಡೆ ಮಾಡಲಾಗುವುದು ಮತ್ತು ಪ್ರತಿ ವ್ಯಕ್ತಿಗೆ 2 ಲಕ್ಷ ರೂ.ಗಳ ಪರಿಹಾರ ನೀಡಲಾಗುವುದು ಎಂದು ಮಲ್ಲಬರುವ ಘೋಷಿಸಿದ್ದಾರೆ.
ಈ ತಿಂಗಳ ಆರಂಭದಲ್ಲಿ, ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ಮಸೂದೆಯನ್ನು ಅಂಗೀಕರಿಸಿದ ದೇಶದ ಮೊದಲ ರಾಜ್ಯವಾಗಿ ಕುಖ್ಯಾತಿ ಪಡೆಯಿತು. ಮದುವೆ, ವಿಚ್ಛೇದನ, ಉತ್ತರಾಧಿಕಾರ ಮತ್ತು ಲಿವ್-ಇನ್ ಸಂಬಂಧಗಳನ್ನು ನಿಯಂತ್ರಿಸುವ ಹಳೆಯ ವೈಯಕ್ತಿಕ ಕಾನೂನುಗಳನ್ನು ಬದಲಿಸಲು ಮಸೂದೆ ಮಂಡಿಸಲಾಗಿದೆ.
ವಿಡಿಯೊ ನೋಡಿ: ಬ್ರಿಟಿಷರಿಗೆ ಸಹಾಯ ಮಾಡಿದ್ದ ವ್ಯಕ್ತಿ ಸ್ವಾತಂತ್ರ್ಯ ಹೋರಾಟಗಾರ ಆಗಲು ಹೇಗೆ ಸಾಧ್ಯ?