ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ನಿಧನ

ನೆಲಮಂಗಲ : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.  ಅವರಿಗೆ 85 ವರ್ಷ ವಯಸ್ಸಾಗಿತ್ತು. ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದು, ಪುತ್ರ ವಿನೋದ್​ ರಾಜ್ ಅವರನ್ನು ಲೀಲಾವತಿ ಅಗಲಿದ್ದಾರೆ. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ಸಾರ್ವಜನಿಕರ ದರ್ಶನಕ್ಕೆ ಸಿದ್ದತೆ ಮಾಡಲಾಗುತ್ತಿದೆ.

ಲೀಲಾವತಿ ಅವರು ಚಿತ್ರರಂಗದಲ್ಲಿ ಬೇಡಿಕೆಯ ನಟಿಯಾಗಿ ಬೆಳೆದು, ಅಪಾರ ಅಭಿಮಾನಿಗಳನ್ನು ಗಳಿಸಿದ್ದರು. ಸಿನಿಮಾಗೆ ಪಾದಾರ್ಪಣೆ ಮಾಡುವ ಮೊದಲು ಅವರು ಮೈಸೂರಿನಲ್ಲಿ ರಂಗಭೂಮಿಯಲ್ಲಿ ಸಕ್ರಿಯರಾಗಿದ್ದರು. ಆ ನಂತರ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರು.  1938ರಲ್ಲಿ ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ಜನಿಸಿದ್ದ ಲೀಲಾವತಿ ಅವರು 50 ವರ್ಷಗಳ ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ಕನ್ನಡ ದಿಗ್ಗಜ ನಟರಾಟ ರಾಜ್​ಕುಮಾರ್​, ವಿಷ್ಣುವರ್ಧನ್​ ಮುಂತಾದವರ ಜೊತೆ ಅಭಿನಯಿಸಿ ಜನಮೆಚ್ಚುಗೆ ಗಳಿಸಿದ್ದರು. ಕನ್ನಡ, ತಮಿಳು, ತೆಲುಗು ಸೇರಿದಂತೆ 600ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

1949ರಲ್ಲಿ ಶಂಕರ್ ನಾಗ್ ಅಭಿನಯದ ನಾಗಕನ್ನಿಕೆ ಸಿನಿಮಾದಲ್ಲಿ ಸಖಿಯ ಪಾತ್ರದ ಮೂಲಕ ಚಂದನವನ ಪ್ರವೇಶಿಸಿದರು.  ಸುಬ್ಬಯ್ಯ ನಾಯ್ಡು ಅವರ ಸಂಸ್ಥೆಯಲ್ಲಿ ರಂಗಭೂಮಿ ಕಲಾವಿದೆಯಾಗಿದ್ದ ಲೀಲಾವತಿ ಅವರು, ಕಯಾದುವಿನ ಸಖಿಯಾಗಿ ಅಭಿನಯಿಸಿದ್ದರು. ಮಹಾಲಿಂಗ ಭಾಗವತರ ನಾಟಕ ಸಂಸ್ಥೆಯನ್ನು ಸೇರಿ ಹಲವಾರು ನಾಟಕಗಳಲ್ಲಿ ಅಭಿನಯಿಸಿದರು.

ಇದನ್ನೂ ಓದಿಜನಮತ 2023 : ಮನೆಯಿಂದಲೇ ಮತದಾನ ಪ್ರಕ್ರಿಯೆ ಆರಂಭ, ಮೊದಲ ವೋಟ್‌ ಮಾಡಿದ ಹಿರಿಯ ನಟಿ ಲೀಲಾವತಿ

ಅವರು ನಾಯಕಿಯಾಗಿ ಅವರು ಅಭಿನಯಿಸಿದ ಮೊದಲ ಚಿತ್ರ ‘ಮಾಂಗಲ್ಯ ಯೋಗ’. ಡಾ.ರಾಜ್ ಕುಮಾರ್ ಅವರೊಂದಿಗೆ ನಟಿಸಿದ ಮೊದಲ ಚಿತ್ರ ರಣಧೀರ ಕಂಠೀರವ. ರಾಣಿ ಹೊನ್ನಮ್ಮ ಚಿತ್ರದ ಯಶಸ್ಸಿನ ನಂತರ ರಾಜ್ ಕುಮಾರ್ ಮತ್ತು ಲೀಲಾವತಿ ಅವರ ಜೋಡಿ ಜನಪ್ರಿಯವಾಯಿತು. ಸಂತ ತುಕಾರಾಂ, ಕಣ್ತೆರೆದು ನೋಡು, ಕೈವಾರ ಮಹಾತ್ಮೆ, ಗಾಳಿ ಗೋಪುರ, ಕನ್ಯಾರತ್ನ, ಕುಲವಧು, ವೀರ ಕೇಸರಿ, ಮನ ಮೆಚ್ಚಿದ ಮಡದಿ, ಮದುವೆ ಮಾಡಿ ನೋಡು, ತುಂಬಿದ ಕೊಡ, ರಾಣಿ ಹೊನ್ನಮ್ಮ, ಗೆಜ್ಜೆ ಪೂಜೆ, ಸಿಪಾಯಿ ರಾಮು, ಬಿಳಿ ಹೆಂಡ್ತಿ, ನಾ ನಿನ್ನ ಮರೆಯಲಾರೆ, ಕಳ್ಳ ಕುಳ್ಳ, ಕನ್ನಡದ ಕಂದ, ವೀರ ಕೇಸರಿ ಹೀಗೆ ಹಲವಾರು ಚಿತ್ರಗಳ ನಾಯಕಿಯಾದರು.

2008 ರಲ್ಲಿ ತುಮಕೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್, 2006 ರಲ್ಲಿ ಕನ್ನಡದ ಕಂದ ಚಿತ್ರಕ್ಕೆ ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿ, 1999-2000 ರಲ್ಲಿ  ಡಾ.ರಾಜಕುಮಾರ್ ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿತ್ತು.

ಲೀಲಾವತಿ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಮತ್ತು ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ ಎಂದು ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *