ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ. ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಶಿವಮೊಗ್ಗದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಲೆಕ್ಕಾಧೀಕ್ಷಕರಾಗಿದ್ದ ಷಡಕ್ಷರಿ ಅವರನ್ನು ಕೋಲಾರ ಜಿಲ್ಲೆಯಲ್ಲಿ ಖಾಲಿ ಇದ್ದ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರ ಹುದ್ದೆಗೆ ವರ್ಗಾವಣೆಗೊಳಿಸಿ ಆರ್ಥಿಕ ಇಲಾಖೆಯ ಅಧೀನ ಕಾರ್ಯದರ್ಶಿ (ಆಡಳಿತ ಮತ್ತು ಮುಂಗಡಗಳು ವಿಭಾಗ) ಆದೇಶಿಸಿದ್ದಾರೆ.
ಇದನ್ನೂ ಓದಿ:ಕೆರೆಯ ಮಣ್ಣನ್ನು ನುಂಗಿದ “ಸರ್ಕಾರಿ ನೌಕರರ ಸಂಘದ ಅಧ್ಯಕ್ಷ”! 71 ಲಕ್ಷರೂ ವಂಚನೆ!!
ಷಡಕ್ಷರಿ ಶಿವಮೊಗ್ಗದಲ್ಲಿ ಕರ್ತವ್ಯ ಸ್ಥಾನದಲ್ಲಿರದೇ ಬೆಂಗಳೂರಿನಲ್ಲಿಯೇ ಹೆಚ್ಚು ಸಮಯ ಇರುತ್ತಾರೆ ಎನ್ನುವ ಆರೋಪ ಕೇಳಿಬಂದಿತ್ತು. ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಹೆಚ್ಚು ಕೆಲಸ ಇಲ್ಲದೇ ಇರುವುದರಿಂದ ಶಿವಮೊಗ್ಗದ ಬದಲು ಬೆಂಗಳೂರಿನಲ್ಲಿಯೇ ಸಮಯ ಕಳೆಯುತ್ತಿದ್ದರು ಮತ್ತು ಶಿವಮೊಗ್ಗದ ಅಬ್ಬಲಗೆರೆಯ ಕೆರೆಯಿಂದ ಮಣ್ಣು ಸಾಗಾಟ ಮಾಡಿ ಖಾಸಗಿ ಲೇಔಟ್‌ಗೆ ತುಂಬಿಸಿದ ಪ್ರಕರಣವೇ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರ ವರ್ಗಾವಣೆಗೆ ಕಾರಣ ಎಂದು ಹೇಳಲಾಗಿದೆ.
ಕೆರೆಯ ಮಣ್ಣನ್ನು ನುಂಗಿದ “ಸರ್ಕಾರಿ ನೌಕರರ ಸಂಘದ ಅಧ್ಯಕ್ಷ”! 71 ಲಕ್ಷರೂ ವಂಚನೆ!! ಎಂಬ ವರದಿಯನ್ನು ಜನಶಕ್ತಿ ಮೀಡಿಯಾ ಮೊದಲು ಪ್ರಕಟಿಸಿತ್ತು.ಇದರ ಬಗ್ಗೆ ರಾಜ್ಯ ಸರ್ಕಾರ ಕೂಡಲೇ ಮಧ್ಯಪ್ರವೇಶಿಸಿ ಅಕ್ರಮದ ಬಗ್ಗೆ ಇನ್ನಷ್ಟು ತನಿಖೆಯನ್ನು ನಡೆಸಲು ಮುಂದಾಗಬೇಕಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ, ಇದೀಗ ಶಿವಮೊಗ್ಗದಿಂದ ಕೋಲಾರಕ್ಕೆ ವರ್ಗಾಯಿಸಿದೆ. ಹೆಚ್ಚಿನ ಕೆಲಸದ ಒತ್ತಡವಿರುವ ಸಮಾಜ ಕಲ್ಯಾಣ ಇಲಾಖೆಯ ಲೆಕ್ಕಾಧೀಕ್ಷಕರನ್ನಾಗಿ ನೇಮಿಸಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಕೂಡಾ ಷಡಕ್ಷರಿ ಶಿವಮೊಗ್ಗದಲ್ಲಿನ ಲೆಕ್ಕಪರಿಶೋಧಕರ ಕಚೇರಿಯಲ್ಲಿ ಅಲಭ್ಯವಾಗಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.
ಸಿ.ಎಸ್.ಷಡಾಕ್ಷರಿ ಅವರ ಮೇಲಿರುವ ಆರೋಪ:
ರಾಯಲ್ಟಿ ಪಾವತಿಸದೆ ಶಿವಮೊಗ್ಗದ ಅಬ್ಬಲಗೆರೆ ಕೆರೆಯಿಂದ ಅಕ್ರಮವಾಗಿ ಮಣ್ಣು ಸಾಗಿಸಿ ಸರ್ಕಾರದ ಖಜಾನೆಗೆ 71,45,920 ರೂ. ನಷ್ಟ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಇಂಜಿನಿಯರ್ ವರದಿ ನೀಡಿದ್ದರು. ಅದರಂತೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಸಿ.ಎಸ್.ಷಡಕ್ಷರಿಯವರನ್ನು ಕೂಡಲೇ ವರ್ಗಾವಣೆ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದರು.
ಶಿವಮೊಗ್ಗ ತಾಲೂಕು, ಅಬ್ಬಲಗೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಬ್ಬಲಗೆರೆ ಗ್ರಾಮದ ಸರ್ವೆ ನಂ.119ರಲ್ಲಿ ಮುದ್ದಣ್ಣನ ಕೆರೆಯಲ್ಲಿ ಅಕ್ರಮವಾಗಿ ಮಣ್ಣನ್ನು ತೆಗೆದು ಖಾಸಗಿ ಲೇಔಟ್ ಗೆ ಸಾಗಿಸಿರುವ ಬಗ್ಗೆ ಸರ್ಕಾರಕ್ಕೆ ಪಾವತಿಸಬೇಕಾಗಿರುವ ಮಣ್ಣಿನ ಒಟ್ಟು ರಾಯಲ್ಟಿ ಮೊತ್ತವನ್ನು ಪಾವತಿಸದೆ ಸರ್ಕಾರದ ಬೊಕ್ಕಸಕ್ಕೆ ರೂ. 71,45,920/-ಗಳನ್ನು ನಷ್ಟ ಉಂಟು ಮಾಡಲಾಗಿದೆ.
ಈ ಬಗ್ಗೆ ಹಾಗೂ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದ ಸರ್ಕಾರದ ಆದೇಶವನ್ನು ಉಲ್ಲಂಘಿಸಿದ ಬಗ್ಗೆ ಕಾರ್ಯಪಾಲಕ ಇಂಜಿನಿಯರ್ ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ, ಜಿಲ್ಲಾ ಪಂಚಾಯತ್ ಶಿವಮೊಗ್ಗ ಇವರು ವರದಿ ನೀಡಿರುತ್ತಾರೆ.
ಈ ಪ್ರಕರಣದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರ ನಿರ್ದೇಶನದಂತೆ ಗ್ರಾಮ ಪಂಚಾಯತ್ ಮತ್ತು ಗಣಿ ಇಲಾಖೆಯವರು ನಡೆದುಕೊಂಡಿರುವ ಬಗ್ಗೆ ಆಕ್ಷೇಪಣೆಗಳು ವ್ಯಕ್ತವಾಗಿರುತ್ತವೆ.
ಇದೇ ವೇಳೆ ಸರ್ಕಾರಿ ನೌಕರರ ಸಂಘದ ರಾಜ್ಯ ಸರಿಷತ್ ಸದಸ್ಯರಾದ ಬಿ ಗಂಗಾಧರ ಮತ್ತು ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ ಅವರು ಹಾಗೂ ಜಿಲ್ಲೆಯ ಅನೇಕ ಸಂಘ ಸಂಸ್ಥೆಗಳು ಸದರಿ ಘಟನೆಯ ಬಗ್ಗೆ ತನಿಖೆ ನಡೆಸಿ ಸಂಬಂಧಪಟ್ಟವರ ಮೇಲೆ ಕ್ರಮಕೈಗೊಳ್ಳುವಂತೆ ಒತ್ತಾಯಿಸಿರುತ್ತಾರೆ.
ಈ ಬಗ್ಗೆ ಪ್ರಧಾನ ನಿರ್ದೇಶಕರು, ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕ ಪತ್ರ ಇಲಾಖೆ, ಬೆಂಗಳೂರು ಇವರು ಜಂಟಿ ನಿರ್ದೇಶಕರ ಕಛೇರಿ, ಸ್ಥಳೀಯ ಲೆಕ್ಕ ಪರಿಶೋಧನಾ ವರ್ತುಲ, ಶಿವಮೊಗ್ಗ ಇಲ್ಲಿ ಲೆಕ್ಕಾಧೀಕ್ಷಕರಾಗಿರುವ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಸಿ. ಎಸ್. ಪಡಕ್ಟರಿ, ಈ ಪ್ರಕರಣದಲ್ಲಿ ಭಾಗಿಯಾಗಿರುವುದರಿಂದ ಇವರನ್ನು ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲೆಯಿಂದ ಬೇರೆಡೆಗೆ ವರ್ಗಾಯಿಸುವ ಕುರಿತು ಸರ್ಕಾರದ ಆರ್ಥಿಕ ಇಲಾಖೆಯನ್ನು ಕೋರಿರುತ್ತಾರೆ.
ಸದರಿಯವರು ಜಿಲ್ಲೆಯ ಸಿಬ್ಬಂದಿ ಮತ್ತು ಅಧಿಕಾರಿಗಳು ತಮ್ಮ ಇಚ್ಚೆಯಂತೆ ಕಾರ್ಯನಿರ್ವಹಿಸಲು ಒತ್ತಡ ಹೇರುವುದರಿಂದ ಭಯದ ವಾತಾವರಣದಲ್ಲಿ ಕರ್ತವ್ಯ ನಿರ್ವಹಿಸುವ ಪರಿಸ್ಥಿತಿಯು ಉಂಟಾಗಿರುವುದಾಗಿ ದಿನಾಂಕ: 16-09-2023ರಲ್ಲಿ ನಡೆದ ಜಿಲ್ಲಾ ಪರಿಶೀಲನಾ ಸಭೆಯ ಚರ್ಚೆಯಲ್ಲಿ ಪ್ರಸ್ತಾಪವಾಗಿರುತ್ತದೆ. ಆದ್ದರಿಂದ ಈ ಬಗ್ಗೆ ಸಂಬಂಧ ಪಟ್ಟವರ ಮೇಲೆ ಕ್ರಮಕೈಗೊಳ್ಳಲು ಕೋರುತ್ತೇನೆ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಿಡಿಯೋ ನೋಡಿ:ಸಂವಿಧಾನ ರಕ್ಷಣೆಯ ಹೊಣೆ ನಮ್ಮೆಲ್ಲರ ಮೇಲಿದೆ – ಪಿ.ಸಾಯಿನಾಥ್ Janashakthi Media