ಬೆಂಗಳೂರು: ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ ಎಂಬ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಕ್ರಮ ವಹಿಸುವಂತೆ ರಾಜ್ಯಪಾಲರ ಅಧೀನ ಕಾರ್ಯದರ್ಶಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಬರೆದಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ:ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗಲೆಂದು ಜೆಡಿಎಸ್ ಸ್ಪರ್ಧೆ
ಮಂಡ್ಯ, ಮಳ್ಳವಳ್ಳಿ, ಕೆ.ಆರ್. ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವರ ಕೃಷಿ ಸಹಾಯಕ ಅಧಿಕಾರಿಗಳು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದು, ಲಂಚಕ್ಕೆ ಕಡಿವಾಣ ಹಾಕದಿದ್ದರೆ ವಿಷ ಆತ್ಮ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ದೂರಿನ ಜೊತೆಗಿನ ಪತ್ರದಲ್ಲಿ ಹೇಳಿದ್ದಾರೆ. ಈ ಅರ್ಜಿಯನ್ನು ನಿಯಾಮನುಸಾರ ಪರಿಶೀಲಿಸಿ ಸೂಕ್ತ ಕ್ರಮ ವಹಿಸುವಂತೆ ಕೋರುತ್ತೇನೆ ಎಂದು ರಾಜ್ಯಪಾಲರ ಅಧೀನ ಕಾರ್ಯದರ್ಶಿ ಜಿ.ಪ್ರದೀಪ್ ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ಈ ಕುರಿತು ಸೋಮವಾರ ನಗರದಲ್ಲಿ ಪ್ರತಿಕ್ರಿಯೆ ನೀಡಿದ ಕೃಷಿ ಸಚಿವ ಚಲುವರಾಯಸ್ವಾಮಿ ‘ಕೆಲವರು ಹುಡುಕಿ ಹುಡುಕಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ, ಹಿಂದೆ ಬಸ್ ಚಾಲಕ ಆತ್ಮಹತ್ಯೆ ಯತ್ನ ಪ್ರಕರಣದಲ್ಲೂ ಇದೇ ರೀತಿ ಕುತಂತ್ರ ಮಾಡಿದ್ದರು. ಇದೊಂದು ನಕಲಿ ಪತ್ರವಾಗಿದೆ ಎಂದು ಕೃಷಿ ಇಲಾಖೆ ಅಧಿಕಾರಿಗಳೇ ಹೇಳಿದ್ದಾರೆ. ಆದರೂ ಪತ್ರದ ಸತ್ಯಾಸತ್ಯತೆ ಬಗ್ಗೆ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.
‘ಕೃಷಿ ಇಲಾಖೆ ಜಂಟಿ ನಿರ್ದೇಶಕ ಈಗಾಗಲೇ ಸಹಾಯಕ ನಿರ್ದೇಶಕರ ಜೊತೆ ಆನ್‌ಲೈನ್ ಸಭೆ ನಡೆಸಿದ್ದಾರೆ. ಯಾರೂ ಕೂಡ ಈ ರೀತಿ ಪತ್ರ ಬರೆದಿಲ್ಲ ಎಂದು ತಿಳಿಸಿರುವ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ತನಿಖೆಯಿಂದ ಅದೊಂದು ನಕಲಿ ಪತ್ರ ಎಂದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೂ ಸೂಚಿಸಿದ್ದೇನೆ’ ಎಂದರು.