ಬೆಂಗಳೂರು: ಕಾವೇರಿ,ಮೇಕೆದಾಟು,ಮಹದಾಯಿ,ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನಿ ಬಳಿಗೆ ಸರ್ವಪಕ್ಷಗಳ ನಿಯೋಗ ಕೊಡ್ಯೊಯ್ಯಲು ನಿರ್ಧರಿಸಿದ್ದು, ಅದಕ್ಕೆ ಸಹಕಾರ ನೀಡಲು ಎಲ್ಲ ಪಕ್ಷಗಳ ಮುಂಖಡರು ಒಪ್ಪಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ವಿವಿಧ ಜಲ ವಿವಾದಗಳ ಕುರಿತಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಐದಾರು ವರ್ಷಗಳಿಗೊಮ್ಮ ಮಳೆ ಕೊರತೆಯಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಸಾಮಾನ್ಯ ಜಲವರ್ಷದಲ್ಲಿ ನೀರು ಹಂಚಿಕೆಯ ತೀರ್ಮಾನ ಆಗಿದೆಯೇ ಹೊರತು, ಸಂಕಷ್ಟ ಸೂತ್ರ ನಿರ್ದಿಷ್ಟಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ಸಮರ್ಥವಾಗಿ ವಾದ ಮಂಡಿಸುವಂತೆ ರಾಜ್ಯದ ವಕೀಲರಿಗೆ ಸಲಹೆ ನೀಡಲಾಗಿದೆ ಎಂದರು.
ಇದನ್ನೂ ಓದಿ:ಕೃಷ್ಣಾ ಜಲ ವಿವಾದ: ನಾಳೆಗೆ ವಿಚಾರಣೆ ಮುಂದೂಡಿದ ಸರ್ವೋಚ್ಚ ನ್ಯಾಯಾಲಯ
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇಬೇಕು. 67 ಟಿಎಂಸಿ ಅಡಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಇಂತಹ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಕೊಟ್ಟ ಬಳಿಕ 2018ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿ ಸ್ಥಾಪನೆಯಾಗಿದೆ. ಪ್ರಾಧಿಕಾರ 22 ಸಭೆ ಹಾಗೂ ನಿಯಂತ್ರಣ ಸಮಿತಿ 84 ಸಭೆಗಳನ್ನು ನಡೆಸಿವೆ. ಈ ಸಮಿತಿಗಳು ರಚನೆಯಾದ ಬಳಿಕ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿವೆ. ಆಗ ಪ್ರಾಧಿಕಾರ ಮತ್ತು ಸಮಿತಿಯಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ ಎಂದು ಹೇಳಿದರು.
ಇದನ್ನೂ ಓದಿ:ಕಾವೇರಿ ನದಿ ನೀರು ಹಂಚಿಕೆ ವಿವಾದ: ಪ್ರತ್ಯೇಕ ಪೀಠ ರಚನೆಗೆ ಒಪ್ಪಿದ ಸುಪ್ರೀಂ ಕೋರ್ಟ್
ಇಲ್ಲಿಯವರೆಗೆ 86.38 ಟಿಎಂಸಿ ಅಡಿ ನೀರು ಬಿಡಬೇಕಾಗಿತ್ತು. ಇದೇ 20ರವರೆಗೆ 24 ಟಿಎಂಸಿ ಅಡಿಯಷ್ಟು ನೀರು ಬಿಟ್ಟಿದ್ದೇವೆ. ನೀರು ಬಿಡಲು ಯಾಕೆ ಸಾಧ್ಯ ಇಲ್ಲವೆಂಬ ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ. ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ. ಕುಡಿಯಲು ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ ಎಂದರು.
15 ಸಾವಿರ ಕ್ಯೂಸೆಕ್ ನೀರು ಕೊಡಲಾಗದು ಎಂದು ನಮ್ಮ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿದ್ದಾಗ ತಮಿಳುನಾಡಿನ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಮ್ಮ ಅಧಿಕಾರಿಗಳು ವಾದ ಮಾಡಿದ್ದರಿಂದ 10 ಸಾವಿರ ಕ್ಯುಸೆಕ್‌ಗೆ ಇಳಿಸಲು ಸೂಚಿಸಿತ್ತು. ಅದನ್ನೂ ಮರು ಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದ್ದೆವು. ನಂತರ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದು ಸುಪ್ರೀಂ ಕೋರ್ಟ್ ರಚಿಸಿರುವ ಪೀಠವು ಇದೇ 25 ರಂದು ಪ್ರಕರಣ ವಿಚಾರಣೆ ನಡೆಸಲಿದೆ ಎಂದರು.
ಸುಪ್ರೀಂ ಕೋರ್ಟ್‌ನಲ್ಲಿ ವಸ್ತುಸ್ಥಿತಿ ಮನವರಿಕೆ ಮಾಡಲಿ:
ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿ ಸಲ್ಲಿಸಿ ವಸ್ತುಸ್ಥಿತಿ ಮನವರಿಕೆ ಮಾಡಿಕೊಡುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದೇವೆ ಎಂದು ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು. ರಾಜ್ಯದ ರೈತರಿಗೆ ನೀರು ಕೊಡದೆ ತಮಿಳುನಾಡಿಗೆ ನೀರು ಬಿಟ್ಟಿರುವುದು ಸರಿಯಲ್ಲ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ವಾದ ಮಾಡುವುದರಲ್ಲಿ ಮತ್ತು ಈ ವಿಚಾರದಲ್ಲಿ ಸುಪ್ರಿಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸದೆ ಎಡವಿರುವುದಾಗಿ ಹೇಳಿದ್ದೇವೆ. ಮಹದಾಯಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿ ನಂತರ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗುವ ಬಗ್ಗೆ ಆಲೋಚಿಸುವಂತೆ ಸಲಹೆ ನೀಡಿದ್ದೇವೆ ಎಂದು ತಿಳಿಸಿದರು.
ಸುಪ್ರೀಂ ಕೋರ್ಟ್‌ಗೆ ಆಕ್ಷೇಪ ಸಲ್ಲಿಸುವ ಮೊದಲು ನೀರು ಹರಿಸಿದ್ದೇಕೆ:
ಸುಪ್ರೀಂ ಕೋರ್ಟ್‌ಗೆ ತಮಿಳುನಾಡು ಅರ್ಜಿ ಸಲ್ಲಿಸಿದ ತಕ್ಷಣ ರಾಜ್ಯ ಸರ್ಕಾರ ನೀರು ಹರಿಸುವ ನಿರ್ಧಾರ ಕೈಗೊಳ್ಳುವ ಬದಲು ತಕರಾರು ಅರ್ಜಿ ಸಲ್ಲಿಸಬೇಕಿತ್ತು. ಈ ವಿಷಯದಲ್ಲಿ ಸರ್ಕಾರದಿಂದ ಲೋಪವಾಗಿದೆ. ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ನೆಲ ಜಲ ಭಾಷೆ ವಿಚಾರದಲ್ಲಿ ವಿರೋಧ ಪಕ್ಷಗಳು ಪ್ರಶ್ನೆ ಮಾಡಿದರೆ ಅದನ್ನು ರಾಜಕೀಯ ಎಂದು ಭಾವಿಸುವುದು ತಪ್ಪು. ಸರ್ಕಾರ ಹೊಣೆಗಾರಿಕೆಯಿಂದ ವರ್ತಿಸಬೇಕು.ತಮಿಳುನಾಡಿಗೆ ನೀರು ಹರಿಸುವ ಮೊದಲೇ ಸರ್ವಪಕ್ಷ ಸಭೆ ಕರೆದಿದ್ದರೆ ಅದಕ್ಕೊಂದು ಅರ್ಥ ಇರುತ್ತಿತ್ತು. ಅಲ್ಲದೆ ಸರ್ವಪಕ್ಷಗಳ ಸಭೆಯಲ್ಲಿ ಏನೇ ವಾದ ಮಾಡಿದರೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಪರಿಣಾಮಕಾರಿ ವಾದ ಮಂಡಿಸಬೇಕು ಎಂದರು.
ಸಭೆಯಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ವೀರಪ್ಪ ಮೋಯ್ಲಿ,ಜಗದೀಶ ಶೆಟ್ಟರ್, ಸಂಸದರಾದ ಸುಮಲತಾ, ತೇಜಸ್ವಿ ಸೂರ್ಯ,ಜಗ್ಗೇಶ, ಎಲ್.ಹನುಂತಯ್ಯ, ಮುನಿಸ್ವಾಮಿ, ಜಿ.ಎಂ.ಸಿದ್ದೇಶ್ವರ, ಜಿ.ಸಿ.ಚಂದ್ರಶೇಖರ್, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು.