ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿನ 545 ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಕೈಗೊಳ್ಳಲು ಸರ್ಕಾರ ಆದೇಶಿಸಿದೆ.
ಈ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಪಿಎಸ್ಐ ಹುದ್ದೆಗಳಿಗೆ ಈಗಾಗಲೇ ಪರೀಕ್ಷೆ ನಡೆದಿದೆ. ಹಾಗೆಯೇ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟಗೊಂಡಿದೆ. ಆದರೆ, ಈ ನಡುವೆ ಈ ಹುದ್ದೆಯ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಸಾರ್ವಜನಿಕರಿಂದ ದೂರುಗಳು ಬಂದಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತದೆ ಎಂದು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕಲಬುರಗಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲು ಮಾಡಲಾಗಿದೆ. ಕಲಬುರಗಿಯ ಜ್ಞಾನಜ್ಯೋತಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ನಡೆದಿದೆ ಎಂಬ ಸಂಶಯವಿದೆ. ಈಗಾಗಲೇ ಸಿಐಡಿ ತನಿಖೆಯು ಕಲಬುರಗಿಗೆ ತಲುಪಿದೆ ಎಂದು ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗಕ್ಕೆ ಅನ್ಯಾಯ
545 ಪಿಎಸ್‌ಐ-ಸಿವಿಲ್ ನೇಮಕಾತಿ ಪರೀಕ್ಷೆ ಹಾಗೂ ಆಯ್ಕೆ ಪಟ್ಟಿಯಲ್ಲಿ ಅಕ್ರಮ ಮತ್ತು ಹಗರಣದ ಆರೋಪಗಳು ಬಯಲಾಗುತ್ತಿವೆ. ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ನೊಂದ ಅಭ್ಯರ್ಥಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಶ್ನಿಸಿದ್ದರು. ಇದೇ ವೇಳೆ ಅಕ್ರಮದ ಕುರಿತ ಅನುಮಾನಸ್ಪದ ಅಂಶಗಳುಳ್ಳ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.
ಪಿಎಸ್ಐ ನೇಮಕಾತಿ ಆಯ್ಕೆ ಪಟ್ಟಿಯಲ್ಲಿ ಕಲ್ಯಾಣ ಕರ್ನಾಟಕ ಭಾಗದ (ಕಲಂ 371 ಜೆ) ಅಭ್ಯರ್ಥಿಗಳಿಗೆ ಮೀಸಲಾತಿ ವಿಚಾರದಲ್ಲಿ ಅನ್ಯಾಯ ಮಾಡಲಾಗಿದೆ. ಅಲ್ಲದೇ ಪರೀಕ್ಷೆಯಲ್ಲಿ ಭಾರಿ ಅಕ್ರಮ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ ನೊಂದ ಅಭ್ಯರ್ಥಿಯೊಬ್ಬರು ಯಾದಗಿರಿ ಜಿಲ್ಲಾಡಳಿತ ಮೂಲಕ ಮುಖ್ಯಮಂತ್ರಿ ಹಾಗೂ ಗೃಹ ಸಚಿವರಿಗೆ ದೂರು ನೀಡಿ, ತನಿಖೆಗೆ ಆಗ್ರಹಿಸಿದ್ದರು. ಈ ಎಲ್ಲಾ ಬೆಳವಣಿಗೆಯ ಬೆನ್ನಲ್ಲೇಓ ಫೆಬ್ರವರಿಯಲ್ಲಿ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು.
ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿಯಿಂದ ತನಿಖೆ: ಬಸವರಾಜ ಬೊಮ್ಮಾಯಿ
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಆರೋಪಗಳು ಕೇಳಿ ಬಂದಿದ್ದು, ಈ ಸಂಬಂಧ ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಸಮಿತಿ ರಚಿಸಲಾಗುವುದು, ವರದಿ ಬಂದ ನಂತರ ಪರಾಮರ್ಶಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮದಲ್ಲಿ ಆರೋಗ್ಯ ಸಿಬ್ಬಂದಿ, ಪಿಎಸ್ಐಗೆ ಆಯ್ಕೆಯಾದ ಅಭ್ಯರ್ಥಿಗಳು ನೀಡಿದ ಮನವಿಯನ್ನು ಸ್ವೀಕರಿಸಿದರು. ಮನವಿ ಸ್ವೀಕರಿಸಿ ಬಳಿಕ ಮಾತನಾಡಿದ ಬೊಮ್ಮಾಯಿ ಅವರು, ಈಗಾಗಲೇ 545 ಪಿಎಸ್ಐ ಹುದ್ದೆಗಳ ನೇಮಕಾತಿ ಅಕ್ರಮ ಸಂಬಂಧ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಆಯ್ಕೆಯಾಗಿರುವ ಅಭ್ಯರ್ಥಿಗಳು ಬಂದು ಮನವಿ ಕೊಟ್ಟಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಕಮಿಟಿ ರಚಿಸಿ, ವರದಿ ಬಂದ ನಂತರ ಪರಾಮರ್ಶಿಸಿ ಮುಂದಿನ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದೇನೆ ಎಂದು ಹೇಳಿದರು.